×
Ad

ಲಿಂಗಾನುಪಾತದಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಪ್ರಥಮ: ಜಿಲ್ಲಾಧಿಕಾರಿ ವಿದ್ಯಾಕುಮಾರಿ

Update: 2025-06-05 20:22 IST

ಉಡುಪಿ, ಜೂ.5: ಗಂಡು ಮಕ್ಕಳು ಹಾಗೂ ಹೆಣ್ಣು ಮಕ್ಕಳ ಲಿಂಗಾನುಪಾತದಲ್ಲಿ ಉಡುಪಿ ಜಿಲ್ಲೆ ಸದ್ಯ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ ಸದ್ಯ 1000 ಗಂಡು ಮಕ್ಕಳಿಗೆ 978 ಹೆಣ್ಣು ಮಕ್ಕಳಿದ್ದಾರೆ. ಹೆಣ್ಣು ಮಕ್ಕಳ ಪ್ರಮಾಣ ಇನ್ನೂ ಹೆಚ್ಚಾಗಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ ತಿಳಿಸಿದ್ದಾರೆ.

ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಕಾಯಿದೆಯ ಜಿಲ್ಲಾ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

2023-24ನೇ ಸಾಲಿನಲ್ಲಿ ಜಿಲ್ಲೆಯಲ್ಲಿ ಒಟ್ಟು 5,845 ಗಂಡು ಮಕ್ಕಳ ಜನನವಾಗಿದ್ದರೆ, 5827 ಹೆಣ್ಣು ಮಕ್ಕಳು ಜನಿಸಿದ್ದಾರೆ. ಅಂದರೆ ಗಂಡು ಮತ್ತು ಹೆಣ್ಣು ಮಕ್ಕಳ ಸರಾಸರಿ ಅನುಪಾತ 1000:968 ಆಗಿತ್ತು. ಅದೇ 2024-25 ನೇ ಸಾಲಿನಲ್ಲಿ ಈ ಪ್ರಮಾಣ 1000:978ಕ್ಕೆ ಹೆಚ್ಚಿದ್ದು, ಸರಾಸರಿ ಲಿಂಗಾನುಪಾತದಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದವರು ತಿಳಿಸಿದರು.

ದಾವಣಗೆರೆ, ರಾಮನಗರ, ಶಿವಮೊಗ್ಗ ನಂತರದ ಸ್ಥಾನಗಳಿಸಿದ್ದು, 2ರಿಂದ ನಾಲ್ಕನೇ ಸ್ಥಾನದಲ್ಲಿವೆ. ಜಿಲ್ಲೆಯ ಗಂಡು-ಹೆಣ್ಣು ಮಕ್ಕಳ ಲಿಂಗಾನುಪಾತದಲ್ಲಿ ಸಮಾನಾನುಪಾತ (1000:1000) ಸಾಧಿಸಲು ಪ್ರಯತ್ನಿಸಬೇಕು ಎಂದವರು ಹೇಳಿದರು.

ಪಿ.ಸಿ.ಪಿ.ಎನ್.ಡಿ.ಟಿ ಕಾಯ್ದೆಯಡಿ ಜಿಲ್ಲೆಯಾದ್ಯಂತ ಈ ಬಗ್ಗೆ ಮಾಹಿತಿ ಶಿಕ್ಷಣದ ಚಟುವಟಿಕೆಗಳನ್ನು ನಡೆಸಬೇಕು. ಹೆಚ್ಚು ಲಿಂಗಾನುಪಾತ ಇರುವ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹೆಚ್ಚು ಹೆಚ್ಚು ಅರಿವು ಕಾರ್ಯಕ್ರಮಗಳು ಮಾಡಬೇಕೆಂದು ಅವರು ಸಲಹೆ ನೀಡಿದರು.

ಸ್ಕ್ಯಾನಿಂಗ್ ಸೆಂಟರ್‌ಗಳ ಮೇಲೆ ನಿಗಾ: ಜಿಲ್ಲೆಯಲ್ಲಿರುವ ಪ್ರತಿಯೊಂದು ಸ್ಕ್ಯಾನಿಂಗ್ ಸೆಂಟರ್‌ಗಳು ಸರಕಾರದ ಮಾರ್ಗ ಸೂಚಿಅನ್ವಯ ದಾಖಲೆಗಳನ್ನು ನಿರ್ವಹಣೆ ಮಾಡಬೇಕು. ಒಂದೊಮ್ಮೆ ಇದನ್ನು ಉಲ್ಲಂಘಿಸಿದಲ್ಲಿ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದ ಡಿಸಿ, ಸಮಿತಿಯ ಸದಸ್ಯರು ಆಗಾಗ ಸ್ಕ್ಯಾನಿಂಗ್ ಸೆಂಟರ್‌ಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಅಲ್ಲಿನ ಚಟುವಟಿಕೆಗಳ ಪರಿಶೀಲನೆ ನಡೆಸಬೇಕು ಎಂದರು.

ಗರ್ಭಪೂರ್ವ ಮತ್ತು ಪ್ರಸವ ಪೂರ್ವ ಭ್ರೂಣಲಿಂಗ ಪತ್ತೆ ಹಚ್ಚುವುದು ಕಾನೂನಿನ ಅಡಿಯಲ್ಲಿ ಶಿಕ್ಷಾರ್ಹ ಅಪರಾಧವಾಗಿದೆ. ಭ್ರೂಣಲಿಂಗ ಪತ್ತೆಯಿಂದ ಹೆಣ್ಣು ಮತ್ತು ಗಂಡು ಮಕ್ಕಳ ಅನುಪಾತದಲ್ಲಿ ಹೆಚ್ಚಿನ ವ್ಯತ್ಯಾಸವಾಗಿ ಸಮಾಜದಲ್ಲಿ ಅಸಮತೋಲನ ಉಂಟಾಗುತ್ತದೆ. ಇದರಿಂದ ಮಹಿಳೆಯರ ಮೇಲೆ ಅಪರಾಧಿಕ ಪ್ರಕರಣಗಳೂ ಸಹ ಹೆಚ್ಚಾಗುವ ಸಾಧ್ಯತೆಗಳು ಇರುತ್ತವೆ. ಇದಕ್ಕೆ ಯಾರೂ ಆಸ್ಪದ ನೀಡಬಾರದು ಎಂದರು.

ಭ್ರೂಣಲಿಂಗ ಪತ್ತೆ ಮಾಡುವುದು ಶಿಕ್ಷಾರ್ಹ ಅಪರಾಧ. ಇದರಂತೆ ವೈದ್ಯಾಧಿಕಾರಿಗಳು ಹಾಗೂ ಸ್ಕ್ಯಾನಿಂಗ್ ಸೆಂಟರ್‌ಗಳ ಮಾಲಕರುಗಳಿಗೆ ಹತ್ತು ಸಾವಿರ ರೂ. ದಂಡ ಹಾಗೂ 3 ವರ್ಷ ಜೈಲು ಶಿಕ್ಷೆ ವಿಧಿಸಲಾಗುವುದು. ಇದೇ ಅಪರಾಧ ಪುನರಾವರ್ತನೆಯಾದಲ್ಲಿ ಐವತ್ತು ಸಾವಿರ ರೂ. ದಂಡ ದೊಂದಿಗೆ 5 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಲು ಕಾನೂನಿನಡಿ ಅವಕಾಶವಿದೆ ಎಂದರು.

ಸಭೆಯಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಬಸವರಾಜ್ ಹುಬ್ಬಳ್ಳಿ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ. ಜ್ಯೋತ್ಸ್ನಾ ಬಿ.ಕೆ, ಕುಟುಂಬ ಕಲ್ಯಾಣ ಅಧಿಕಾರಿ ಡಾ.ಶ್ರೀರಾಮರಾವ್, ಜಿಲ್ಲಾ ಕುಷ್ಠರೋಗ ನಿವಾರಣಾಧಿಕಾರಿ ಡಾ.ಲತಾ ನಾಯಕ್, ಡಿಎಸ್‌ಓ ಡಾ. ನಾಗರತ್ನ, ಜಿಲ್ಲಾ ಏಡ್ಸ್ ರೋಗ ನಿಯಂತ್ರಣಾಧಿಕಾರಿ ಡಾ.ಚಿದಾನಂದ ಸಂಜು, ಜಿಲ್ಲಾ ಸರ್ಜನ್ ಡಾ. ಹೆಚ್.ಅಶೋಕ್, ಜಿಲ್ಲಾ ರೋಗ ವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಪ್ರಶಾಂತ್‌ಭಟ್, ಕೆಎಂಸಿಯ ತಜ್ಞ ವೈದ್ಯರು, ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಆರೋಗ್ಯಾಧಿಕಾರಿಗಳು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News