×
Ad

ಉಡುಪಿ: ಅನರ್ಹ ಪಡಿತರ ಚೀಟಿ ರದ್ದು

Update: 2025-06-13 19:36 IST

ಉಡುಪಿ, ಜೂ.13: ಜಿಲ್ಲೆಯಲ್ಲಿ ಅಂತ್ಯೋದಯ ಅನ್ನ ಯೋಜನೆ ಮತ್ತು ಆದ್ಯತಾ ಪಡಿತರ ಚೀಟಿ (ಬಿಪಿಎಲ್) ಹೊಂದಿರುವವರು ಸರಕಾರ ವಿಧಿಸಿರುವ ಮಾನದಂಡದ ವಿರುದ್ಧವಾಗಿ ಪಡಿತರ ಚೀಟಿ ಹೊಂದಿದ್ದಲ್ಲಿ, ಸಂಬಂಧಿಸಿದ ತಾಲೂಕು ಕಚೇರಿಯ ಆಹಾರ ಶಾಖೆಯ ಅಧಿಕಾರಿಗಳಿಗೆ ಮಾಹಿತಿ ನೀಡಿ, ಪಡಿತರ ಚೀಟಿಯನ್ನು ಆದ್ಯರ್ಪಣೆ (ಸರೆಂಡರ್) ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಯಾವುದೇ ಪಡಿತರ ಚೀಟಿದಾರರು ಸರಕಾರದ ನಿಯಮಾವಳಿಗಳನ್ನು ಮೀರಿ ಒಂದೇ ಮನೆಯಲ್ಲಿ ವಾಸವಿರುವವರು ಒಂದಕ್ಕಿಂತ ಹೆಚ್ಚು ಪಡಿತರ ಚೀಟಿ ಹೊಂದಿದ್ದಲ್ಲಿ ಅಂತಹ ಪಡಿತರ ಚೀಟಿದಾರರು ಸಂಬಂಧಪಟ್ಟ ಆಹಾರ ಶಾಖೆಯ ಅಧಿಕಾರಿಗಳಿಗೆ ಪಡಿತರ ಚೀಟಿಯನ್ನು ನೀಡಿ ಒಂದಕ್ಕಿಂತ ಹೆಚ್ಚಿನ ಪಡಿತರ ಚೀಟಿಯನ್ನು ರದ್ದುಪಡಿಸಿಕೊಳ್ಳಬೇಕು.

ಪಡಿತರ ಚೀಟಿದಾರರಲ್ಲಿ ಕೆಲವರು ರಾಜ್ಯ ಸರಕಾರದ ಅನ್ನಭಾಗ್ಯ ಯೋಜನೆಯಡಿ ಉಚಿತವಾಗಿ ಒದಗಿಸುವ ಅಕ್ಕಿಯನ್ನು ಹಣದ ಆಸೆಗೆ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿರುವುದು ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು, ಅಕ್ಕಿಯನ್ನು ಸ್ವಂತಕ್ಕೆ ಉಪಯೋಗಿಸದೇ ಮಾರಾಟ ಮಾಡುವುದು ಅಪರಾಧ ವಾಗಿದ್ದು, ಈ ಬಗ್ಗೆ ಮಾಹಿತಿ ಬಂದಲ್ಲಿ ಅಂತಹ ಕುಟುಂಬಕ್ಕೆ ಪಡಿತರ ವ್ಯವಸ್ಥೆಯಡಿ ಪಡಿತರ ಅಗತ್ಯವಿಲ್ಲ ವೆಂದು ತಿಳಿದು ಅಂತವರ ಪಡಿತರ ಚೀಟಿಯನ್ನು ರದ್ದುಪಡಿಸಲು ಕ್ರಮವಹಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಕುಟುಂಬದ ವಾರ್ಷಿಕ ಆದಾಯ 1.20 ಲಕ್ಷ ರೂ.ಗಳಿಗಿಂತಲೂ ಹೆಚ್ಚು ಇರುವ ಕುಟುಂಬಗಳು, ಜೀವನೋಪಾಯಕ್ಕಾಗಿ ಸ್ವತಹ ಓಡಿಸುವ ಒಂದು ವಾಣಿಜ್ಯ ವಾಹನವನ್ನು (ಟ್ರ್ಯಾಕ್ಟರ್, ಮ್ಯಾಕ್ಸಿಕ್ಯಾಬ್, ಟ್ಯಾಕ್ಸಿ ಇತ್ಯಾದಿಗಳನ್ನು) ಹೊರತು ಪಡಿಸಿ ನಾಲ್ಕು ಚಕ್ರದ ವಾಹನವನ್ನು ಹೊಂದಿರುವ ಕುಟುಂಬಗಳು, ಗ್ರಾಮೀಣ ಪ್ರದೇಶದಲ್ಲಿ 3 ಹೆಕ್ಟೇರ್ ಒಣಭೂಮಿ ಅಥವಾ ತತ್ಸಮಾನ ನೀರಾವರಿ ಭೂಮಿ ಹೊಂದಿರುವ ಕುಟುಂಬಗಳು ಅಥವಾ ಗ್ರಾಮೀಣ ಪ್ರದೇಶವನ್ನು ಹೊರತುಪಡಿಸಿ, ನಗರಪ್ರದೇಶಗಳಲ್ಲಿ 1000 ಚದರ ಅಡಿ ಗಿಂತಲೂ ಹೆಚ್ಚಿನ ವಿಸ್ತೀರ್ಣದ ಪಕ್ಕಾ ಮನೆಯನ್ನು ಸ್ವಂತವಾಗಿ ಹೊಂದಿರುವ ಕುಟುಂಬಗಳು ಮತ್ತು ವೇತನವನ್ನು ಗಣನೆಗೆ ತೆಗೆದುಕೊಳ್ಳದೇ ಎಲ್ಲಾ ಖಾಯಂ ನೌಕರರು ಅಂದರೆ ಸರಕಾರದ ಅಥವಾ ಸರಕಾರದಿಂದ ಅನುದಾನ ವನ್ನು ಪಡೆಯುತ್ತಿರುವ ಸಂಸ್ಥೆಗಳು, ಸರಕಾರಿ ಪ್ರಾಯೋಜಿತ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳು, ಮಂಡಳಿಗಳು, ನಿಗಮಗಳು, ಸ್ವಾಯತ್ತ ಸಂಸ್ಥೆಗಳು ಇತ್ಯಾದಿ ಒಳಗೊಂಡಂತೆ ಆದಾಯ ತೆರಿಗೆ, ಸೇವಾ ತೆರಿಗೆ, ವ್ಯಾಟ್, ವೃತ್ತಿ ತೆರಿಗೆ ಪಾವತಿಸುತ್ತಿರುವ ಎಲ್ಲಾ ಕುಟುಂಬಗಳು ಆದ್ಯತಾ ಪಡಿತರ ಚೀಟಿ ಹೊಂದಲು ಅನರ್ಹರಾಗಿರುತ್ತಾರೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News