ಉಡುಪಿ: ನಿರ್ಗಮನ ಜಿಲ್ಲಾಧಿಕಾರಿಗೆ ಜಿಲ್ಲಾಡಳಿತದಿಂದ ಬೀಳ್ಕೊಡುಗೆ
ಉಡುಪಿ, ಜೂ.18: ಸರಕಾರಿ ಕಚೇರಿಗಳು ಜನಸ್ನೇಹಿಯಾಗಿ ಕಾರ್ಯ ನಿರ್ವಹಿಸಬೇಕು. ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಸರಕಾರದ ಕೆಲಸ ಗಳನ್ನು ನಿಷ್ಠೆ, ಪ್ರಾಮಾಣಿಕತೆಯಿಂದ ಮಾಡಿದರೆ ಜನರು ನಮ್ಮನ್ನು ಖಂಡಿತ ಗೌರವಿಸುತ್ತಾರೆ ಎಂದು ಉಡುಪಿಯ ನಿರ್ಗಮನ ಜಿಲ್ಲಾಧಿಕಾರಿ ಡಾ.ಕೆ. ವಿದ್ಯಾ ಕುಮಾರಿ ಹೇಳಿದ್ದಾರೆ.
ಮಣಿಪಾಲ ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣ ದಲ್ಲಿ ಇಂದು ಸಂಜೆ ನಡೆದ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ಜನರು ತುಂಬಾ ನಿರೀಕ್ಷೆಗಳೊಂದಿಗೆ ತಮ್ಮ ಕೆಲಸ ಕಾರ್ಯಗಳಿಗಾಗಿ ಸರ್ಕಾರಿ ಕಚೇರಿಗಳಿಗೆ ಬರುತ್ತಿದ್ದರು. ಅವರಿಗೆ ನನ್ನಿಂದ ಸಾಧ್ಯವಾದಷ್ಟು ಕೆಲಸವನ್ನು ಮಾಡಿಕೊಟ್ಟಿದ್ದೇನೆ ಎಂದು ತೃಪ್ತಿ ವ್ಯಕ್ತಪಡಿಸಿದರು.
ಮಳೆಗಾಲದ ಸಂದರ್ಭದಲ್ಲಿ ಪ್ರಾಕೃತಿಕ ವಿಕೋಪಗಳಾದಾಗ ಅಧಿಕಾರಿಗಳು ಉತ್ತಮವಾಗಿ ನಿಭಾಯಿಸಿ ದ್ದಾರೆ. ಐದು ವರ್ಷಗಳ ಬಳಿಕ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಡುಪಿ ಜಿಲ್ಲೆ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದೆ. ಅದೇ ರೀತಿ ಎಸೆಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಎರಡನೇ ಸ್ಥಾನ ತಂದು ಕೊಟ್ಟಿದೆ.ಇದಕ್ಕೆ ಶಿಕ್ಷಣ ಇಲಾಖೆ, ಶಾಲಾ -ಕಾಲೇಜುಗಳ ಮುಖ್ಯ ಶಿಕ್ಷಕರು, ಪ್ರಾಂಶುಪಾಲರ, ಅಧ್ಯಾಪಕರು, ಶಿಕ್ಷಕರ ಪರಿಶ್ರಮ ಕಾರಣ ಎಂದರು.
ಜಿಲ್ಲೆಯಲ್ಲಿ ಮರಳು ಹಾಗೂ ಗಣಿ ಸಮಸ್ಯೆಯನ್ನು ಬಗೆಹರಿಸಲು, ಮತದಾನದ ಸಂದರ್ಭದಲ್ಲಿ ಪರಿಸ್ಥಿಗಳನ್ನು ಸಮರ್ಥವಾಗಿ ನಿಭಾಯಿಸಲು ಪೊಲೀಸ್ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಜೊತೆ ಯಾಗಿ ಸಹಕಾರ ನೀಡಿದ್ದಾರೆ ಜೊತೆಗೆ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಪಾಲನೆಗೆ ಅವಿರತ ಶ್ರಮ ವಹಿಸಿದ್ದಾರೆ ಎಂದರು.
ನೂತನ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧ್ಯಕ್ಷತೆ ವಹಿಸಿ ಮಾತನಾಡಿ, ಸರಕಾರಿ ಉದ್ಯೋಗದ ಅವಕಾಶ ಎಲ್ಲರಿಗೂ ದೊರೆಯುವುದಿಲ್ಲ. ಅವಕಾಶ ದೊರೆತ ನಾವು ಬದ್ಧತೆಯಿಂದ ಕೆಲಸ ಮಾಡಬೇಕು. ಜನಸಾಮಾನ್ಯರಿಗಾಗಿ ಅವರ ಕೆಲಸಗಳನ್ನು ಆದ್ಯತೆಯ ಮೇಲೆ ನಿಯಮಾನುಸಾರ ಮಾಡಬೇಕು. ಅಗತ್ಯವಿದ್ದರೆ ಮಾನವೀಯ ನೆಲೆಗಟ್ಟಿನಲ್ಲಿ ಸ್ಪಂದಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಮಾತನಾಡಿ, ಡಾ.ಕೆ. ವಿದ್ಯಾಕುಮಾರಿ ಜೊತೆಯಲ್ಲಿ ಕರ್ತವ್ಯ ನಿರ್ವಹಿಸಿರುವುದು ನನಗೆ ಹೆಮ್ಮೆ ಇದೆ. ಇನ್ನಷ್ಟು ಸಾರ್ವಜನಿಕ ಸೇವೆ ಮಾಡಲು ಸ್ಫೂರ್ತಿದಾಯಕವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಕರಾವಳಿ ಕಾವಲು ಪಡೆಯ ಅಧೀಕ್ಷಕ ಮಿಥುನ್, ಡಿಎಫ್‌ಓ ಗಣಪತಿ, ಎಎಸ್ಪಿ ಹರ್ಷ ಪ್ರಿಯಂವದ, ಸಹಾಯಕ ಕಮಿಷನರ್ ರಶ್ಮಿ, ವಿವಿಧ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಸ್ವಾಗತಿಸಿದರು. ಯುವಜನ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಷನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.