×
Ad

ಪರ್ಕಳ ರಾ.ಹೆದ್ದಾರಿ ಹದಗೆಟ್ಟು ವಾಹನಗಳ ಸಂಚಾರಕ್ಕೆ ಅಡ್ಡಿ| ಉಡುಪಿ ಶಾಸಕರು, ಪ್ರಾಧಿಕಾರದ ಅಧಿಕಾರಿಗಳಿಂದ ಪರಿಶೀಲನೆ

Update: 2025-06-22 18:50 IST

ಉಡುಪಿ: ರಾಷ್ಟೀಯ ಹೆದ್ದಾರಿ 169 ಎ ಕೆಳ ಪರ್ಕಳ ಭಾಗದಲ್ಲಿ ರಸ್ತೆ ಸಂಪೂರ್ಣ ಹದಗೆಟ್ಟು ವಾಹನಗಳ ಸುಗಮ ಸಂಚಾರಕ್ಕೆ ಸಮಸ್ಯೆ ಉಂಟಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಹಾಗೂ ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಳೆದ ಹಲವು ವರ್ಷಗಳಿಂದ ಹೆದ್ದಾರಿ ಕಾಮಗಾರಿ ಬಗ್ಗೆ ಖಾಸಗಿ ವ್ಯಕ್ತಿಗಳು ನ್ಯಾಯಾಲಯದಲ್ಲಿ ತಡೆ ಯಾಜ್ಞೆ ತಂದಿರುವ ಕಾರಣ ಕಾಮಗಾರಿ ಬಾಕಿ ಉಳಿದಿದ್ದು, ಇದೀಗ ರಸ್ತೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಿಗೆ ತೀವ್ರ ಅನನುಕೂಲತೆ ಉಂಟಾಗುತ್ತಿದೆ.

ಸಮಸ್ಯೆಯ ಬಗ್ಗೆ ಈಗಾಗಲೇ ನೂತನ ಜಿಲ್ಲಾಧಿಕಾರಿಗಳು ಹಾಗೂ ಸಂಸದರ ಗಮನಕ್ಕೂ ತರಲಾಗಿದ್ದು, ತುರ್ತು ನೆಲೆಯಲ್ಲಿ ಪೊಲೀಸ್ ಇಲಾಖೆ ಮೂಲಕ ಟ್ರಾಫಿಕ್ ನಿರ್ವಹಣೆ ಹಾಗೂ ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಮೂಲಕ ರಸ್ತೆಯನ್ನು ಸಮತಟ್ಟು ಮಾಡಿ ವಾಹನಗಳ ಸುಗಮ ಸಂಚಾರಕ್ಕೆ ಅನುವು ಮಾಡಿ ಕೊಡುವಂತೆ ಅಧಿಕಾರಿಗಳಿಗೆ ಶಾಸಕರು ಸೂಚನೆ ನೀಡಿದರು.

ಈ ಹಿಂದೆ ಇದ್ದ ತಡೆಯಾಜ್ಞೆಯನ್ನು ತೆರವು ಮಾಡಿದ ಬಳಿಕ ಇತ್ತೀಚೆಗೆ ವ್ಯಕ್ತಿಯೊಬ್ಬರು ಮತ್ತೊಮ್ಮೆ ನ್ಯಾಯಲಯದಲ್ಲಿ ತಡೆಯಾಜ್ಞೆ ತಂದ ಹಿನ್ನಲೆಯಲ್ಲಿ ಸ್ಥಗಿತಗೊಂಡಿರುವ ಕಾಮಗಾರಿಯ ಪುನರ್ ಆರಂಭಕ್ಕೆ ಜಿಲ್ಲಾಡಳಿತ ಹಾಗೂ ರಾಷ್ಟೀಯ ಹೆದ್ದಾರಿ ಮೂಲಕ ಕ್ರಮ ವಹಿಸಿ ಶೀಘ್ರದಲ್ಲೇ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸುವ ಭರವಸೆಯನ್ನು ಶಾಸಕರು ನೀಡಿದರು.

ಈ ಸಂದರ್ಭದಲ್ಲಿ ಉಡುಪಿ ನಗರಸಭೆ ಸದಸ್ಯೆ ಸುಮಿತ್ರಾ ನಾಯಕ್, ರಾಷ್ಟೀಯ ಹೆದ್ದಾರಿ ಪ್ರಾಧಿಕಾರದ ಇಂಜಿನಿಯರ್ ಮಂಜುನಾಥ ನಾಯಕ್, ಸ್ಥಳೀಯ ಪ್ರಮುಖರಾದ ಅಕ್ಷಿತ್ ಶೆಟ್ಟಿ ಹೆರ್ಗ, ಶುಭಕರ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News