×
Ad

ಉಡುಪಿ: ನಾಡಪ್ರಭು ಕೆಂಪೇಗೌಡ ಜಯಂತಿ ಆಚರಣೆ

Update: 2025-06-27 21:48 IST

ಉಡುಪಿ, ಜೂ.27: ನಾಡಪ್ರಭು ಕೆಂಪೇಗೌಡರು ದೂರದೃಷ್ಟಿಯಿಂದ ನಿರ್ಮಿಸಿದ ಬೆಂಗಳೂರು ನಗರ ಇಂದು ಇಡೀ ವಿಶ್ವದ ಜನರನ್ನು ತನ್ನತ್ತ ಸೆಳೆಯುವಂತೆ ಮಾಡುವುದರೊಂದಿಗೆ ಕೋಟ್ಯಾಂತರ ಜನರಿಗೆ ಬದುಕು ಕಟ್ಟಿಕೊಳ್ಳಲು ಆಶ್ರಯ ನೀಡಿದೆ ಎಂದು ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದ್ದಾರೆ.

ನಗರದ ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾ ಯತ್ ಹಾಗೂ ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡುತ್ತಿದ್ದರು.

ಬೆಂಗಳೂರು ನಗರ ನಿರ್ಮಾಣ ಕೆಂಪೇಗೌಡರ ಅತಿದೊಡ್ಡ ಕನಸಾಗಿತ್ತು. ನಗರ ನಿರ್ಮಾಣಕ್ಕೆ ಬೇಕಾದ ಅಗತ್ಯತೆಗಳ ಬಗ್ಗೆ ಸ್ಪಷ್ಟತೆ ಹೊಂದಿದ್ದ ಅವರು, ನಾಡಿನ ಭವಿಷ್ಯದ ದೃಷ್ಟಿಯಿಂದ ಹಾಗೂ ಮುಂದಿನ ಪೀಳಿಗೆಯ ಏಳಿಗೆಗಾಗಿ ಹಲವು ಜನಪ್ರಿಯ ಯೋಜನೆಗಳನ್ನು ಜಾರಿಗೆ ತಂದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ವಿಶೇಷ ಉಪನ್ಯಾಸ ನೀಡಿದ ತೆಂಕನಿಡಿಯೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದ ರಾಜ್ಯಶಾಸ್ತ್ರ ಸಹಪ್ರಾಧ್ಯಾಪಕ ಪ್ರಶಾಂತ್ ನೀಲಾವರ, ರಾಜನಾ ದವನು ಸಮಾಜದ ಚಿಂತನೆ ಮಾಡುವುದರೊಂದಿಗೆ ದೂರದೃಷ್ಟಿಯಿಂದ ಆಡಳಿತ, ಪ್ರಗತಿಪರ ಚಿಂತನೆಯನ್ನು ಮೈಗೂಡಿಸಿಕೊಳ್ಳಬೇಕು ಎಂಬುದಕ್ಕೆ ಸ್ಪಷ್ಟ ನಿದರ್ಶನ ನಾಡಪ್ರಭು ಕೆಂಪೇಗೌಡರು. ವಿಜಯನಗರ ಸಾಮ್ರಾಜ್ಯದ ಸಾಮಂತರಲ್ಲಿ ಕೆಂಪೇಗೌಡರ ಮನೆತನವೂ ಒಂದು ಎಂದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಒಕ್ಕಲಿಗ ಸೇವಾ ಸಂಘದ ಕಾರ್ಯದರ್ಶಿ ಹೇಮಾನಂದ ಹಲ್ದಡ್ಕ ಮಾತನಾಡಿದರು. ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಇದೇ ಸಂದರ್ಭದಲ್ಲಿ ಕೆಂಪೇಗೌಡ ಜಯಂತಿ ಅಂಗವಾಗಿ ಪ್ರೌಢಶಾಲೆ ಹಾಗೂ ಪದಪೂರ್ವ ಕಾಲೇಜುಗಳ ವಿದ್ಯಾರ್ಥಿಗಳಿಗೆ ಆಯೋಜಿಸಲಾದ ಪ್ರಬಂಧ, ಭಾಷಣ ಹಾಗೂ ಚಿತ್ರಕಲೆ ಸ್ಪರ್ಧೆಗಳಲ್ಲಿ ವಿಜೇತರಾದ ವರಿಗೆ ಬಹುಮಾನ ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಉಪತಹಶೀಲ್ದಾರ್ ಐರೀನ್, ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಎಲ್ಲಮ್ಮ, ಒಕ್ಕಲಿಗ (ಗೌಡ) ಸೇವಾ ಸಂಘದ ಜಿಲ್ಲಾ ಅಧ್ಯಕ್ಷ ಸೀತಾರಾಮ ಗೌಡ ಎ, ಬಾಲಕಿಯರ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಜಗದೀಶ್‌ಕುಮಾರ್, ಸರಕಾರಿ ಬಾಲಕಿಯರ ಪ್ರೌಢಶಾಲೆ ಮುಖ್ಯೋಪಾ ಧ್ಯಾಯಿನಿ ಇಂದಿರಾ ಹಾಗೂ ಇತರರು ಉಪಸ್ಥಿತರಿದ್ದರು.

ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರೆ, ದಯಾನಂದ ಡಿ ಕಿದಿಯೂರು ಕಾರ್ಯಕ್ರಮ ನಿರೂಪಿಸಿ, ಉಪನ್ಯಾಸಕ ಗಂಗಾಧರ್ ವಂದಿಸಿದರು.



Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News