×
Ad

ಮಹಿಳೆಯರ ಸಬಲೀಕರಣಕ್ಕೆ ಶಕ್ತಿ ಯೋಜನೆಯಿಂದ ಪುಷ್ಠಿ: ಉಡುಪಿ ಜಿಲ್ಲಾಧಿಕಾರಿ

Update: 2025-07-14 19:56 IST

ಉಡುಪಿ: ರಾಜ್ಯ ಸರಕಾರ ಜಾರಿಗೆ ತಂದಿರುವ ಹೆಣ್ಣು ಮಕ್ಕಳ ಉಚಿತ ಬಸ್ ಪ್ರಯಾಣದ ಶಕ್ತಿ ಯೋಜನೆಯು ಮಹಿಳಾ ಸಬಲೀಕರಣಕ್ಕೆ ಇನ್ನಷ್ಟು ಪುಷ್ಠಿ ನೀಡಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದ್ದಾರೆ.

ಉಡುಪಿಯ ಬನ್ನಂಜೆಯಲ್ಲಿರುವ ರಾಜ್ಯ ಸಾರಿಗೆ ನಿಗಮದ ಕೆಎಸ್ಸಾರ್ಟಿಸಿ ಬಸ್ ನಿಲ್ದಾಣದ ಆವರಣದಲ್ಲಿ ಉಡುಪಿ ಜಿಲ್ಲಾ ಪಂಚ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರ ವತಿಯಿಂದ, ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದಾಗಿನಿಂದ ಈವರೆಗೆ 500 ಕೋಟಿ ಮಹಿಳಾ ಪ್ರಯಾಣಿಕರು ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತವಾಗಿ ಸಂಚರಿಸಿರುವ ಹಿನ್ನೆಲೆಯಲ್ಲಿ ಆಯೋಜಿಸಲಾದ ಶಕ್ತಿ ಯೋಜನೆಯ ಸಂಭ್ರಮಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಸರಕಾರ ಐದು ಗ್ಯಾರಂಟಿ ಯೋಜನೆಗಳನ್ನು ರಾಜ್ಯಾದ್ಯಂತ ಯಶಸ್ವಿಯಾಗಿ ಜಾರಿ ಗೊಳಿಸಿದೆ. 2023ರ ಜೂನ್ 11ರಂದು ಶಕ್ತಿ ಯೋಜನೆಯನ್ನು ಮೊದಲು ಜಾರಿಗೆ ತರಲಾಗಿದ್ದು, ಅಂದಿನಿಂದ ರಾಜ್ಯದ ಮಹಿಳೆ ಯರು, ವಿದ್ಯಾರ್ಥಿನಿಯರು ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ಸರಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿದೆ. ಈ ಯೋಜನೆ ಜಾರಿಗೊಂಡಂದಿನಿಂದ ಈವರೆಗೆ 500 ಕೋಟಿ ಮಹಿಳಾ ಪ್ರಯಾಣಿಕರು ಇದರ ಲಾಭ ಪಡೆದುಕೊಂಡಿದ್ದಾರೆ. ಇದಕ್ಕಾಗಿ ಸರಕಾರ 12,000 ಕೋಟಿ ರೂ.ಗೂ ಹೆಚ್ಚು ಹಣವನ್ನು ರಾಜ್ಯ ಸಾರಿಗೆ ನಿಗಮಕ್ಕೆ ಭರಿಸಿದೆ ಎಂದರು.

ಶಕ್ತಿ ಯೋಜನೆಯ ಅನುಷ್ಠಾನದಿಂದಾಗಿ ಹೆಣ್ಣು ಮಕ್ಕಳು ಪ್ರಯಾಣಕ್ಕೆ ಮನೆಯ ಯಜಮಾನರನ್ನು ಅವಲಂಬಿಸುವುದು ತಪ್ಪಿದೆ. ಹೆಣ್ಣು ಮಕ್ಕಳು ಸ್ವಂತ-ಉದ್ಯೋಗ ಹೊಂದಲು, ಶಿಕ್ಷಣವಂತರಾಗಲು ಹಾಗೂ ಮತ್ತಿತರ ದೈನಂದಿನ ಚಟುವಟಿಕೆಗಾಗಿ ಪ್ರಯಾಣಿಸಲು ಶಕ್ತಿ ಯೋಜನೆ ಸಹಕಾರಿ ಯಾಗಿದೆ. ಸರಕಾರದ ಯೋಜನೆಗಳ ಮೂಲಕ ಹೆಣ್ಣು ಮಕ್ಕಳು ಶಿಕ್ಷಣ ಪಡೆದು, ಉನ್ನತ ಹುದ್ದೆಗಳನ್ನು ಹೊಂದುವುದರೊಂದಿಗೆ ಸ್ವಾವಲಂಬಿ ಗಳಾಗಬೇಕು ಎಂದವರು ಕರೆ ನೀಡಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕೊಡವೂರು ಮಾತನಾಡಿ, ಸಿದ್ಧರಾಮಯ್ಯ ನೇತೃತ್ವದ ಸರಕಾರ ಐದು ಗ್ಯಾರಂಟಿ ಯೋಜನೆಗಳನ್ನು ಪ್ರಕಟಿಸಿ, ಅವುಗಳನ್ನು ಯಶಸ್ವಿಯಾಗಿ ಕಳೆದೆರಡು ವರ್ಷಗಳಿಂದ ಅನುಷ್ಠಾನಗೊಳಿಸುತ್ತಿದೆ. ರಾಜ್ಯದ ಆರ್ಥಿಕ ಸ್ಥಿತಿಗತಿಗಳನ್ನು ಅವಲೋಕಿಸಿ, ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ್ದಿದ್ದು ಇವು ನಿರಂತರವಾಗಿರುತ್ತವೆ ಎಂದರು.

ಉಡುಪಿ ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ 2023ರ ಜೂನ್‌ನಿಂದ ಈವರೆಗೆ 2.57 ಕೋಟಿಗೂ ಅಧಿಕ ಮಹಿಳೆಯರು ಸಂಚರಿಸಿದ್ದು, 90.10 ಕೋಟಿ ರೂ.ಗಳನ್ನು ಇದಕ್ಕಾಗಿ ಭರಿಸಲಾಗಿದೆ ಎಂದು ವಿವರಿಸಿದರು.

ಮಾಜಿ ಸಚಿವ ವಿನಯಕುಮಾರ್ ಸೊರಕೆ ಮಾತನಾಡಿ, ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳಲ್ಲಿ ಶಕ್ತಿ ಯೋಜನೆಯನ್ನು ಪ್ರಥಮವಾಗಿ ಪ್ರಾರಂಭಿಸಲಾಗಿದ್ದು, ವಿದ್ಯಾರ್ಥಿನಿಯರು, ಬಡ ಮಹಿಳೆಯರು ಸೇರಿದಂತೆ 500 ಕೋಟಿ ಮಹಿಳಾ ಪ್ರಯಾಣಿಕರು ಉದ್ಯೋಗ, ಶಿಕ್ಷಣ, ಧಾರ್ಮಿಕ ಕ್ಷೇತ್ರ, ಪ್ರವಾಸಿ ಸ್ಥಳಗಳಿಗೆ ಉಚಿತವಾಗಿ ಸಂಚರಿಸುವ ಮೂಲಕ ಯೋಜನೆಯ ಲಾಭ ಪಡೆದುಕೊಂಡಿದ್ದಾರೆ ಎಂದರು.

ಕೇವಲ ಮನೆಯೊಳಗೆ ಸೀಮಿತರಾಗಿದ್ದ ಹೆಣ್ಣುಮಕ್ಕಳು ಇಂದು ಹೊರ ಪ್ರಪಂಚವನ್ನು ನೋಡಲು ಶಕ್ತಿ ಯೋಜನೆಯಿಂದ ಸಾಧ್ಯವಾಗಿದೆ. ಮಹಿಳೆಯರು ಸ್ವಾವಲಂಬಿಗಳಾಗಿ ಬದುಕಲು ಈ ಯೋಜನೆ ದಾರಿ ಮಾಡಿಕೊಟ್ಟದೆ. ರಾಜ್ಯದ ಹೆಣ್ಣು ಮಕ್ಕಳಿಗೆ ಆರ್ಥಿಕ ಸ್ವಾತಂತ್ರ್ಯ ಗ್ಯಾರಂಟಿ ಯೋಜನೆಗಳಾದ ಶಕ್ತಿ, ಅನ್ನಭಾಗ್ಯ, ಗೃಹಲಕ್ಷ್ಮೀ, ಗೃಹಜ್ಯೋತಿಯಂತಹ ಕಾರ್ಯಕ್ರಮಗಳಿಂದ ದೊರಕಿದೆ ಎಂದರು.

ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಉಪಾಧ್ಯಕ್ಷೆ ಗೀತಾ ವಾಗ್ಳೆ, ಉಡುಪಿ ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ, ಸಮಿತಿಯ ಸದಸ್ಯರಾದ ಪ್ರಶಾಂತ ಜತ್ತನ್ನ, ಎಂ.ಎ.ಗಫೂರ್, ಜ್ಯೋಇ ಹೆಬ್ಬಾರ್, ರೆಡ್‌ಕ್ರಾಸ್ ಕಾರ್ಯದರ್ಶಿ ಡಾ.ಗಣನಾಥ ಎಕ್ಕಾರು, ಸಾರಿಗೆ ನಿಗಮದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ನಿಗಮದ ಬಸ್ಸಿಗೆ ಪೂಜೆ ಸಲ್ಲಿಸಿ, ಮಹಿಳಾ ಪ್ರಯಾಣಿಕರಿಗೆ ಗುಲಾಬಿ ಹೂವು ನೀಡಿ, ಸಿಹಿತಿಂಡಿ ವಿತರಿಸಲಾಯಿತು.







Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News