×
Ad

ತುಳುವಿಗೆ ಅಧಿಕೃತ ಭಾಷಾ ಸ್ಥಾನಮಾನ : ಆಂಧ್ರಕ್ಕೆ ಭೇಟಿ ನೀಡಿದ ಅಧ್ಯಯನ ತಂಡ

Update: 2026-01-21 19:40 IST

ಬೆಂಗಳೂರು, ಜ.21: ತುಳು ಭಾಷೆಯನ್ನು ರಾಜ್ಯದ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ ಮಾಡುವ ನಿಟ್ಟಿನಲ್ಲಿ ರೂಪಿಸಬೇಕಾದ ಕಾನೂನು ಪ್ರಕ್ರಿಯೆಗಳ ಬಗ್ಗೆ ಹಾಗೂ ಅನುಷ್ಠಾನದ ವಿಧಿವಿಧಾನಗಳ ಬಗ್ಗೆ ಅಧ್ಯಯನ ಮಾಡಲು ರಾಜ್ಯ ಸರಕಾರವು ನೇಮಿಸಿದ್ದ ಅಧ್ಯಯನ ಸಮಿತಿಯು ಆಂಧ್ರಪ್ರದೇಶಕ್ಕೆ ತೆರಳಿ ಎರಡು ದಿನಗಳ ಕಾಲ ಆಂಧ್ರ ಸರಕಾರದ ವಿವಿಧ ಇಲಾಖೆಗಳ ಜೊತೆಗೆ ಮಾತುಕತೆ ನಡೆಸಿ ಮಾಹಿತಿ ಸಂಗ್ರಹಿಸಿದೆ.

ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ರಾಜ್ಯ ನಿರ್ದೇಶಕಿ ಕೆ.ಎಂ. ಗಾಯತ್ರಿ ಅಧ್ಯಕ್ಷತೆ ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಉಪಸ್ಥಿತಿಯಲ್ಲಿ ಏಳು ಮಂದಿಯ ಅಧ್ಯಯನ ಸಮಿತಿಯು ಆಂದ್ರಪ್ರದೇಶದ ರಾಜಧಾನಿ ಅಮರಾವತಿ ಹಾಗೂ ಎನ್.ಟಿ. ಆರ್. ಜಿಲ್ಲೆಯ ವಿವಿಧ ಕಚೇರಿಗಳಿಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿತು.

ಮೊದಲ ದಿನ ಅಧ್ಯಯನ ತಂಡವು ಸಚಿವಾಲಯದಲ್ಲಿ ಆಂಧ್ರಪ್ರದೇಶ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ವಿಜಯಾನಂದ ಅವರನ್ನು ಭೇಟಿ ನೀಡಿ ಸಮಾಲೋಚನೆ ನಡೆಸಿತು. ಆಂಧ್ರಪ್ರದೇಶದಲ್ಲಿ ಉರ್ದು ಭಾಷೆಯನ್ನು ರಾಜ್ಯದ ಹೆಚ್ಚುವರಿ ಭಾಷೆಯಾಗಿ ಘೋಷಣೆ ಮಾಡಿರುವುದರಿಂದ ಉರ್ದು ಭಾಷಾ ಬೆಳವಣಿಗೆ ಸಹಕಾರಿಯಾಗಿದೆ. ಕರ್ನಾಟಕದಲ್ಲಿ ತುಳು ಭಾಷೆಯನ್ನು ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಿಸಲು ಉದ್ದೇಶಿಸಿರುವ ರಾಜ್ಯ ಸರಕಾರದ ನಿಲುವು ಅತ್ಯಂತ ಶ್ಲಾಘನೀಯವಾದುದು ಎಂದು ವಿಜಯಾನಂದ ಅಭಿಪ್ರಾಯಪಟ್ಟರು.

ವಿಧಾನ ಮಂಡಲದ ಸ್ಪೀಕರ್ ಕಚೇರಿ ಸಹಿತ ವಿವಿಧ ಕಚೇರಿಗಳಿಗೂ ಅಧ್ಯಯನ ತಂಡ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿತು. ಆಂಧ್ರ ಪ್ರದೇಶ ಅಲ್ಪಸಂಖ್ಯಾಂತ ಇಲಾಖೆಯ ಕಾರ್ಯದರ್ಶಿಯವರನ್ನು, ಆಂಧ್ರಪ್ರದೇಶ ಉರ್ದು ಅಕಾಡಮಿಯ ಅಧ್ಯಕ್ಷರನ್ನು, ಆಂಧ್ರ ಉರ್ದು ಭಾಷಾ ಅಭಿವೃದ್ಧಿ ಮಂಡಳಿಯ ನಿರ್ದೇಶಕರನ್ನು ಕೂಡ ಭೇಟಿ ಮಾಡಿ ಆಂಧ್ರಪ್ರದೇಶದಲ್ಲಿ ಉರ್ದು ಭಾಷೆಯನ್ನು ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ ಮಾಡಿದ ಬಳಿಕದ ಅನುಷ್ಠಾನ ಪ್ರಕ್ರಿಯೆಗಳ ಬಗ್ಗೆ ಮಾಹಿತಿ ಪಡೆಯಲಾಯಿತು.

ಅಧ್ಯಯನ ಸಮಿತಿಯ 2ನೇ ದಿನದ ಭೇಟಿಯಲ್ಲಿ ಅಮರಾವತಿ ಮಹಾನಗರ ಪಾಲಿಕೆಯ ವಲಯ ಕಮಿಷನರ್, ಸ್ಥಳೀಯ ಪೊಲೀಸ್ ಠಾಣೆ, ಸ್ಥಳೀಯ ಉರ್ದು ಮಾಧ್ಯಮ ಶಾಲೆ, ಸ್ಥಳೀಯ ಆಂಗ್ಲ ಮಾಧ್ಯಮ ಶಾಲೆ, ಆಂಧ್ರ ಪ್ರದೇಶ ತೆಲುಗು ಭಾಷಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನು ಹಾಗೂ ಎನ್‌ಟಿಆರ್ ಜಿಲ್ಲೆಯ ಜಿಲ್ಲಾಧಿಕಾರಿ ಡಾ.ಜಿ. ಲಕ್ಷ್ಮೀಶ ಅವರನ್ನು ಭೇಟಿ ಮಾಡಿ ಮಾಹಿತಿ ಸಂಗ್ರಹಿಸಲಾಯಿತು.

ಉರ್ದು ಭಾಷೆಯನ್ನು ಹೆಚ್ಚುವರಿ ಅಧಿಕೃತ ಭಾಷೆಯಾಗಿ ಘೋಷಣೆ ಮಾಡಿರುವುದರಿಂದ ತೆಲುಗು ಭಾಷಾ ಅಭಿವೃದ್ಧಿಗೆ ಯಾವುದೇ ತೊಡಕುಗಳು ಆಗಿರುವುದಿಲ್ಲ ಎಂಬುದನ್ನು ತೆಲುಗು ಭಾಷಾ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ತ್ರಿವಿಕ್ರಮ್ ರಾವ್ ಹೇಳಿದರು.

ಅಧ್ಯಯನ ಸಮಿತಿಯಲ್ಲಿ ಕಾನೂನು ಇಲಾಖೆಯ ಉಪಕಾರ್ಯದರ್ಶಿ ವನಿತ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಉಪ ಕಾರ್ಯದರ್ಶಿ ಮೂರ್ತಿ ಕೆ.ಎನ್., ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಉಪಕಾರ್ಯದರ್ಶಿ ಶುಭಶ್ರೀ ಕೆ.ಎಂ., ಕರ್ನಾಟಕ ಸಾಹಿತ್ಯ ಅಕಾಡಮಿ ರಿಜಿಸ್ಟ್ರಾರ್ ಕರಿಯಪ್ಪಎನ್.,ಕರ್ನಾಟಕ ಯಕ್ಷಗಾನ ಅಕಾಡಮಿ ಸದಸ್ಯ ಸುಧಾಕರ ಶೆಟ್ಟಿ, ಉಸ್ಮಾನಿಯಾ ವಿಶ್ವವಿದ್ಯಾನಿಲಯದ ಕಲಾ ನಿಕಾಯದ ಡೀನ್ ಪ್ರೊ.ಲಿಂಗಪ್ಪಗೋನಾಳ್ ಭಾಗವಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News