‘ಮನೆಮನೆ ಭೇಟಿ ಮೂಲಕ ಪಂಚ ಗ್ಯಾರಂಟಿಗಳ ಪ್ರಗತಿ ಪರಿಶೀಲನೆ’
ಉಡುಪಿ, ಡಿ.17: ಸಮಾಜದ ಪ್ರತಿಯೊಬ್ಬ ವ್ಯಕ್ತಿಯೂ ಗೌರವಯುತ ಮತ್ತು ಸ್ವಾವಲಂಬಿ ಬದುಕು ಹೊಂದಬೇಕೆನ್ನುವ ಉದ್ದೇಶದಿಂದ ರಾಜ್ಯ ಸರಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿದ್ದು, ಕಳೆದ ಎರಡೂವರೆ ವರ್ಷಗಳಿಂದ ಅವು ರಾಜ್ಯವ್ಯಾಪಿ ಯಶಸ್ವಿಯಾಗಿ ಅನುಷ್ಠಾನ ಗೊಂಡಿವೆ ಎಂದು ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ರಮೇಶ್ ಕಾಂಚನ್ ಹೇಳಿದ್ದಾರೆ.
ಅಜ್ಜರಕಾಡಿನ ಪುರಭವನದಲ್ಲಿ ಉಡುಪಿ ತಾಲೂಕು ಕರ್ನಾಟಕ ರಾಜ್ಯ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ವತಿಯಿಂದ ಆಯೋಜಿ ಸಲಾದ ನಮ್ಮ ನಡೆ ವಾರ್ಡ್ ಕಡೆಗೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಲ್ಲಿ ಉಂಟಾಗ ಬಹುದಾದ ಸಮಸ್ಯೆಗಳನ್ನು ಪರಿಹರಿಸಲು ಹಾಗೂ ಯೋಜನೆಗಳ ಪ್ರಗತಿ ಪರಿಶೀಲಿಸಲು ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದವರು ತಿಳಿಸಿದರು.
ಗ್ಯಾರಂಟಿ ಯೋಜನೆಗಳು ಸಮದರ್ಶಿ ಮತ್ತು ಸಮಾವೇಶಿಯಾಗಿದ್ದು ಸಮಾಜದ ಬಡವರ್ಗವನ್ನು ಮೇಲೆತ್ತುವಲ್ಲಿ ತನ್ನದೇ ಆದ ಕೊಡುಗೆ ನೀಡುತ್ತಿದೆ. ಮನೆ ಮನೆಗೆ ಭೇಟಿ ನೀಡಿ ಯೋಜನೆಯ ಕುಂದು ಕೊರತೆಗಳನ್ನು ಆಲಿಸಿ ಪರಿಹರಿಸಲಾಗುತ್ತಿದೆ. ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಹಾಗೂ ಯುವನಿಧಿ ಯೋಜನೆಗಳ ಲಾಭವನ್ನು ಪ್ರತಿಯೊಂದು ಫಲಾನುಭವಿಯ ಮನೆ ಬಾಗಿಲಿಗೆ ತಲುಪಿಸುವಲ್ಲಿ ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರು ಮಹತ್ವದ ಪಾತ್ರ ವಹಿಸುತ್ತಿದ್ದಾರೆ ಎಂದರು.
ಯೋಜನೆಗಳ ಸಮಿತಿ ಸದಸ್ಯ ಡಾ.ಸಂತೋಷ್ ಕುಮಾರ್ ಬೈರಂಪಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ, ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ಬಡವರಿಗೆ ಆರ್ಥಿಕ ಚೈತನ್ಯ ತುಂಬಿದೆ. ಪಂಚ ಗ್ಯಾರಂಟಿ ಯೋಜನೆಗಳು ಗಿನ್ನೆಸ್ ದಾಖಲೆ ನಿರ್ಮಿಸಿದ್ದು, ಜನರ ಕೊಳ್ಳುವ ಸಾಮರ್ಥ್ಯ ವನ್ನು ಹೆಚ್ಚಿಸಿವೆ. ಯೋಜನೆ ರಾಜ್ಯದ ಜಿಡಿಪಿಗೂ ಚೈತನ್ಯ ನೀಡಿದ್ದು ಆರ್ಥಿಕತೆಗೂ ಬಲ ನೀಡುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ವಿಜಯಾ, ಉಡುಪಿ ತಾಲೂಕು ಉಪ ತಹಶೀಲ್ದಾರ್ ಐರಿನ್ ನೊರೊನ್ಹಾ, ಅನುಷ್ಠಾನ ಸಮಿತಿ ಸದಸ್ಯರಾದ ಅರ್ಚನಾ ದೇವಾಡಿಗ, ದಿನೇಶ್ ಜತ್ತನ್ನ, ಯೋಜನೆಯ ಅಧಿಕಾರಿಗಳು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು ಉಪಸ್ಥಿತರಿದ್ದರು.