×
Ad

"ಉಡುಪಿ ಜಿಲ್ಲೆಯಲ್ಲಿ ಮಳೆ ಕೊರತೆ; 146 ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ ಸಾಧ್ಯತೆ"

ಮುಂಜಾಗ್ರತೆ ವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

Update: 2026-07-15 20:28 IST

ಉಡುಪಿ, ಜು.15: ಜಿಲ್ಲೆಯಲ್ಲಿ ಪ್ರಸ್ತುತ ವರ್ಷದಲ್ಲಿ ಇಂದಿನವರೆಗೆ 1959ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ ಈವರೆಗೆ ಬಂದಿರು ವುದು 1182ಮಿ.ಮೀ. ಮಳೆ ಮಾತ್ರ. ಈಗಾಗಲೇ ವಾಡಿಕೆ ಮಳೆಯಲ್ಲಿ ಶೇ. 40ರಷ್ಟು ಕೊರತೆ ಕಂಡುಬಂದಿದೆ. ಇದರಿಂದ ಮುಂಬರುವ ದಿನಗಳಲ್ಲಿ ಜಿಲ್ಲೆಯ ಒಟ್ಟು 94 ಗ್ರಾಮಪಂಚಾಯತ್‌ಗಳ 146 ಗ್ರಾಮಗಳಲ್ಲಿ ಕುಡಿಯುವ ನೀರಿಗೆ ಕೊರತೆ ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಅಧಿಕಾರಿಗಳು ಈ ಬಗ್ಗೆ ಮುಂಜಾಗ್ರತೆ ವಹಿಸುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಸೂಚನೆಗಳನ್ನು ನೀಡಿದ್ದಾರೆ.

ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬುಧವಾರ ನಡೆದ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯ ಕಾರ್ಕಳ ತಾಲೂಕಿನ 17 ಗ್ರಾಮ ಪಂಚಾಯತಿಗಳ 21 ಗ್ರಾಮ, ಕುಂದಾಪುರ ತಾಲೂಕಿನ 36 ಗ್ರಾಪಂಗಳ 57 ಗ್ರಾಮ, ಉಡುಪಿ ತಾಲೂಕಿನ 4 ಗ್ರಾಪಂಗಳ 6 ಗ್ರಾಮ, ಬೈಂದೂರು ತಾಲೂಕಿನ 15 ಗ್ರಾಪಂಗಳ 22 ಗ್ರಾಮ, ಬ್ರಹ್ಮಾವರ ತಾಲೂಕಿನ 13 ಗ್ರಾಪಂಗಳ 25 ಗ್ರಾಮ, ಕಾಪು ತಾಲೂಕಿನ 4 ಗ್ರಾಪಂಗಳ 5 ಗ್ರಾಮ ಹಾಗೂ ಹೆಬ್ರಿ ತಾಲೂಕಿನ 5 ಗ್ರಾಪಂಗಳ 10 ಗ್ರಾಮಗಳು ಸೇರಿದಂತೆ ಒಟ್ಟು 94 ಗ್ರಾಪಂಗಳ 146 ಗ್ರಾಮಗಳಲ್ಲಿ ಮುಂಬರುವ ದಿನಗಳಲ್ಲಿ ಕುಡಿಯುವ ನೀರಿನ ಕೊರತೆ ಎದುರಾಗುವ ಸಾಧ್ಯತೆ ಇದೆ ಎಂದವರು ವಿವರಿಸಿದರು.

ಆದ್ದರಿಂದ ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಪರ್ಯಾಯ ಮೂಲಗಳಿಂದ ಕುಡಿಯುವ ನೀರಿನ ಸರಬ ರಾಜು ಮಾಡಬೇಕು. ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ರೀತಿಯ ಅಭಾವ ಉಂಟಾಗದಂತೆ ನೋಡಿಕೊಳ್ಳಬೇಕು ಎಂದು ಸ್ಪಷ್ಟ ಸೂಚನೆ ನೀಡಿದರು.

ಕಾಲುಸಂಕಗಳ ಕುರಿತು ವರದಿ: ಜಿಲ್ಲೆಯಲ್ಲಿರುವ ಕಾಲುಸಂಕಗಳ ಗುಣಮಟ್ಟವನ್ನು ತಾಂತ್ರಿಕ ತಂಡದೊಂದಿಗೆ ಪರಿಶೀಲಿಸಿ, ಅವುಗಳ ಸ್ಥಿತಿಗತಿಗಳ ಕುರಿತ ಸಮರ್ಪಕ ವರದಿಯೊಂದನ್ನು ನೀಡುವಂತೆ ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅವರು ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ 600ಕ್ಕೂ ಹೆಚ್ಚು ಕಾಲುಸಂಕಗಳಿದ್ದು, ಒಂದೊಮ್ಮೆ ಶಿಥಿಲಾವಸ್ಥೆ ಯಲ್ಲಿರುವ ಕಾಲುಸಂಕಗಳ ಮೇಲೆ ಸಾರ್ವಜನಿಕರು, ವಿದ್ಯಾರ್ಥಿಗಳು, ಸಂಚರಿಸಿದ್ದಲ್ಲಿ ಪ್ರಾಣಹಾನಿ ಆಗುವ ಸಾಧ್ಯತೆಗಳು ಇರುತ್ತವೆ. ಆದ್ದರಿಂದ ಹೊಸ ಕಾಲುಸಂಕಗಳ ನಿರ್ಮಾಣದ ಜೊತೆಗೆ ಈಗಾಗಲೇ ಅಸ್ಥಿತ್ವದಲ್ಲಿರುವ ಕಾಲುಸಂಕಗಳ ದುರಸ್ಥಿಗೆ ಆದ್ಯತೆಯ ಮೇಲೆ ಕ್ರಮಕೈಗೊಳ್ಳಬೇಕು. ಯಾವುದೇ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದರು.

ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಪೂರ್ವ ಮಳೆ ಹಾಗೂ ಬಳಿಕ ಮಳೆಗಾಲದ ಮಳೆಯಿಂದ ಆಗಿರುವ ಮಾನವ ಜೀವ ಹಾನಿ ಹಾಗೂ ಜಾನುವಾರು ಜೀವ ಹಾನಿ ಪ್ರಕರಣಗಳಿಗೆ ಸಂಬಂಧಿಸಿದಂತೆ ಪರಿಹಾರದ ಮೊತ್ತ ವಿತರಣೆ ಬಾಕಿ ಉಳಿಯದಂತೆ ನೋಡಿಕೊಳ್ಳಬೇಕು ಎಂದು ಅವರು ಕಂದಾಯ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದರು.

ಮೇವಿನ ಕೊರತೆ ಇಲ್ಲ: ಜಿಲ್ಲೆಯಲ್ಲಿ ಜಾನುವಾರುಗಳಿಗೆ ಮೇವಿನ ಕೊರತೆ ಈವರೆಗೂ ಕಂಡುಬಂದಿಲ್ಲ. ಮುಂದಿನ 44 ವಾರಗಳಿಗೆ ಆಗುವಷ್ಟು ಮೇವಿನ ದಾಸ್ತಾನು ಸದ್ಯ ಲಭ್ಯವಿದೆ. ಮುಂಗಾರು ಹಂಗಾಮಿನಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜಗಳ ಪೂರೈಕೆ ಮಾಡಬೇಕು. ರೈತರ ಅವಶ್ಯಕತೆಗೆ ಅನುಗುಣವಾಗಿ ಬಿತ್ತನೆ ಬೀಜ ಗಳನ್ನು ಹಂತಹಂತವಾಗಿ ದಾಸ್ತಾನೀಕರಿಸಿ, ರೈತರಿಗೆ ವಿತರಿಸಬೇಕು ಎಂದ ಅವರು, ರಸಗೊಬ್ಬರ ವಿತರಣೆಯಲ್ಲಿ ಯಾವುದೇ ರೀತಿಯ ತೊಂದರೆಯಾಗದಂತೆ ಹಾಗೂ ಕೃತಕ ಅಭಾವ ಸೃಷ್ಟಿಯಾಗದಂತೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದರು.

ಈಗಾಗಲೇ ಜಿಲ್ಲೆಯಲ್ಲಿ 4720 ಮೆ.ಟನ್‌ನಷ್ಟು ರಸಗೊಬ್ಬರ ದಾಸ್ತಾನು ಇದ್ದು, ಸಮತೋಲಿತ ರಸಗೊಬ್ಬರ ಬಳಕೆ, ಮಣ್ಣು ಪರೀಕ್ಷಾ ಆಧಾರಿತ ಪೋಷಕಾಂಶಗಳ ಶಿಫಾರಸ್ಸು ಹಾಗೂ ಹಸಿರೆಲೆ ಗೊಬ್ಬರದ ಬೀಜಗಳ ಬಳಕೆಯ ಬಗ್ಗೆ ರೈತರಿಗೆ ಹೆಚ್ಚಿನ ಅರಿವು ಮೂಡಿಸಬೇಕು ಎಂದು ತಿಳಿಸಿದರು.

ಶಾಲಾ ಕೊಠಡಿಗಳ ಸುರಕ್ಷತೆ: ಜಿಲ್ಲೆಯಲ್ಲಿರುವ ಶಾಲಾ-ಅಂಗನವಾಡಿ ಕಟ್ಟಡ ಹಾಗೂ ಕೊಠಡಿಗಳ ಸದೃಢತೆಯ ಬಗ್ಗೆ ಲೋಕೋಪಯೋಗಿ ಇಲಾಖೆ, ಪಂಚಾಯತ್‌ರಾಜ್ ಇಲಾಖೆಗಳ ಅಭಿಯಂತರರು, ಶಿಕ್ಷಣ ಇಲಾಖೆ ಅಧಿಕಾರಿ ಗಳು ಜಂಟಿ ಪರಿಶೀಲನೆ ನಡೆಸಿ, ಸುರಕ್ಷತೆಯ ಬಗ್ಗೆ ಖಚಿತಪಡಿಸಿ ಕೊಳ್ಳಬೇಕು. ಒಂದೊಮ್ಮೆ ಕೊಠಡಿಗಳು ಶಿಥಿಲಾವಸ್ಥೆಯಲ್ಲಿದ್ದು, ಬಳಕೆಗೆ ಯೋಗ್ಯವಿಲ್ಲದಿದ್ದಲ್ಲಿ ಅಂತಹ ಕೊಠಡಿಗಳಲ್ಲಿ ತರಗತಿಗಳನ್ನು ನಡೆಸದೇ ಬದಲೀ ವ್ಯವಸ್ಥೆಯನ್ನು ಕೈಗೊಳ್ಳಬೇಕು ಎಂದರು.

ಸಭೆಯಲ್ಲಿ ಡಿಎಫ್‌ಓ ರುಥ್ರೇನ್ ಪಿ, ವೈಲ್ಡ್‌ಲೈಫ್ ಡಿಎಫ್‌ಓ ಶಿವರಾಮ ಎಂ ಬಾಬು, ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ್, ಸಹಾಯಕ ಕಮಿಷನರ್ ರಶ್ಮಿ, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ತಹಶೀಲ್ದಾರರುಗಳು ಹಾಗೂ ಇತರರು ಉಪಸ್ಥಿತರಿದ್ದರು.

28 ಲಕ್ಷ ರೂ. ತೋಟಗಾರಿಕಾ ಬೆಳೆಹಾನಿ

ಜಿಲ್ಲೆಯಲ್ಲಿ ಪ್ರಸ್ತುತ ಜನವರಿಯಿಂದ ಜೂನ್‌ವರೆಗೆ ತೋಟಗಾರಿಕೆ ಬೆಳೆಗಳಿಗೆ ಸಂಬಂಧಿಸಿದಂತೆ 9.34 ಹೆಕ್ಟೇರ್‌ಗಳಷ್ಟು ಪ್ರದೇಶದಲ್ಲಿ ಅಡಿಕೆ ಹಾಗೂ ತೆಂಗು ಬೆಳೆಗಳಿಗೆ ಹಾನಿಯಾಗಿ 28.64 ಲಕ್ಷ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಸಂತ್ರಸ್ಥರಿಗೆ ಬೆಳೆ ಹಾನಿ ಪರಿಹಾರವನ್ನು ಶೀಘ್ರವಾಗಿ ವಿತರಿಸಬೇಕು. ಅಡಿಕೆ ಬೆಳೆಗಾರರಿಗೆ ಸಕಾಲದಲ್ಲಿ ಸಸಿಗಳನ್ನು ವಿತರಿಸಿ, ಕೀಟ ನಿರ್ವಹಣೆ, ಕೊಳೆ ರೋಗ ನಿಯಂತ್ರಣ ಕ್ರಮಗಳ ಬಗ್ಗೆ ತಾಲೂಕು ಮಟ್ಟದಲ್ಲಿ ತರಬೇತಿ ಮತ್ತು ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು.

‘ಜಿಲ್ಲೆಯಲ್ಲಿ ಪ್ರಸ್ತುತ ಮುಂಗಾರು ಮಳೆ ವಾಡಿಕೆಗಿಂತ ಕಡಿಮೆ ಬಂದಿರುವ ಹಿನ್ನೆಲೆಯಲ್ಲಿ ನಗರ ಹಾಗೂ ಗ್ರಾಮೀಣ ಭಾಗದ ಕೆಲವು ಕಡೆಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆ ಇದೆ. ಮುಂದಾಗುವ ಕುಡಿಯುವ ನೀರಿನ ಸಮಸ್ಯೆ ಬಗೆಹರಿಸಲು ಈಗಿನಿಂದಲೇ ಖಾಸಗಿ ಬೋರ್‌ವೆಲ್, ಬಾವಿ, ಟ್ಯಾಂಕರ್‌ಗಳನ್ನು ಗುರುತಿಸಿಟ್ಟುಕೊಂಡು ಕುಡಿಯುವ ನೀರನ್ನು ಸರಬರಾಜು ಮಾಡುವ ಮೂಲಕ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳಲಾಗುವುದು.’

-ಪ್ರತೀಕ್ ಬಾಯಲ್, ಜಿಪಂನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ. 




 


Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News