ಉಡುಪಿ ಜಿಲ್ಲೆಯಲ್ಲಿ ಒಂದು ವಾರ ಗಾಳಿಮಳೆ ಸಾಧ್ಯತೆ
ಉಡುಪಿ: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಬೆಂಗಳೂರು ಇವರ ಮುನ್ಸೂಚನೆಯಂತೆ ರಾಜ್ಯದ ಕರಾವಳಿ ಭಾಗದಲ್ಲಿ ಮುಂದಿನ ಒಂದು ವಾರ (ಮೇ 24ರಿಂದ 29ರವರೆಗೆ) ಜಿಲ್ಲೆಯಲ್ಲಿ ಗುಡುಗು ಸಿಡಿಲಿನೊಂದಿಗೆ ಹೆಚ್ಚಿನ ಗಾಳಿ (ಸುಮಾರು 40ಕಿ.ಮೀ. ವೇಗ) ಯಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.
ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿದ್ದು ಹೆಚ್ಚಿನ ಗಾಳಿ ಬೀಸುವ ಸಾಧ್ಯತೆಯಿದೆ ಹಾಗೂ ಸಮುದ್ರ ಅಲೆಗಳ ಎತ್ತರವು ಹೆಚ್ಚಾಗಿರುತ್ತದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರಿಗೆ ಹಾಗೂ ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದೆ.
ಹೆಚ್ಚು ಮಳೆಯಾಗುತ್ತಿರುವುದರಿಂದ ಕೆಲವು ಪ್ರದೇಶಗಳಲ್ಲಿ ಭೂಕುಸಿತ ವಾಗುವ ಸಂಭವ ಹೆಚ್ಚಾಗಿದೆ. ಹಾಗಾಗಿ ಇಂತಹ ಪ್ರದೇಶದಲ್ಲಿ ವಾಸಿಸುವ ಸಾರ್ವಜನಿಕರು ತಹಶೀಲ್ದಾರರ ಕಛೇರಿ ಅಥವಾ ಗ್ರಾಪಂ ಸಿಬ್ಬಂಧಿಗಳನ್ನು ಸಂಪರ್ಕಿಸಿ ಹತ್ತಿರದ ಕಾಳಜಿ ಕೇಂದ್ರದಲ್ಲಿ ಸಾಕಷ್ಟು ಮುಂಚಿತವಾಗಿಯೆ ಉಳಿಯಬಹುದು. ಹೆಚ್ಚಿನ ಮಾಹಿತಿಗಾಗಿ ವಿಪತ್ತು ನಿರ್ವಹಣಾ ಕಂಟ್ರೋಲ್ ರೂಂಗೆ ಅಥವಾ ಆಯಾ ತಾಲೂಕಾ ತಹಶೀಲ್ದಾರರ ಕಛೇರಿಗೆ ಕರೆ ಮಾಡಬಹುದು ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.