×
Ad

ಸ್ನೇಹ, ಸೌಹಾರ್ದತೆಯ ವಾತಾವರಣ ಸೃಷ್ಟಿಗೆ ಸಂಕಲ್ಪ: ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

Update: 2026-01-26 19:01 IST

ಉಡುಪಿ : ಜಾತಿ, ಭಾಷೆ, ಸಂಕುಚಿತ ಭಾವನೆಗಳಿಂದ ಹೊರಬಂದು ಸ್ನೇಹ ಹಾಗೂ ಸೌಹಾರ್ದತೆಯ ವಾತಾವರಣ ಸೃಷ್ಟಿಸಿ, ಒಗ್ಗಟ್ಟು ಮತ್ತು ಐಕ್ಯತೆಯನ್ನು ಕಾಪಾಡಲು ಎಲ್ಲರೂ ದೃಢಸಂಕಲ್ಪ ಮಾಡುವಂತೆ ಜಿಲ್ಲಾ ಉಸ್ತುವಾರಿ ಸಚಿವೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರೂ ಆದ ಲಕ್ಷ್ಮೀ ಆರ್. ಹೆಬ್ಬಾಳ್ಕರ್ ಜಿಲ್ಲೆಯ ಜನತೆಗೆ ಕರೆ ನೀಡಿದ್ದಾರೆ.

ನಗರದ ಅಜ್ಜರಕಾಡಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 77ನೇ ಗಣರಾಜ್ಯೋತ್ಸವ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಗಣರಾಜ್ಯೋತ್ಸವ ಸಂದೇಶ ನೀಡಿ ಮಾತನಾಡುತ್ತಿದ್ದರು.

ದುರ್ಬಲರಿಗೆ ಸಹಾಯ ಹಸ್ತ, ಕೃಷಿಕರಿಗೆ ಸೌಕರ್ಯ, ಉದ್ಯಮಶೀಲರಿಗೆ ಒತ್ತಾಸೆ, ಸಾಮಾಜಿಕ ಸೌಹಾರ್ದದ ವಾತಾವರಣ ಅಭಿವೃದ್ಧಿಯ ಬುನಾದಿ ಎಂಬ ವಿಶ್ವಾಸದೊಂದಿಗೆ ರಾಜ್ಯ ಸರಕಾರ ಹತ್ತು ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದೆ ಎಂದು ಅವರು ಹೇಳಿದರು.

ಸ್ವತಂತ್ರ ಭಾರತವು ತನ್ನ ಸಂವಿಧಾನವನ್ನು ಅನುಷ್ಠಾನಕ್ಕೆ ತಂದು ದೇಶದ ಆಡಳಿತ ಚೌಕಟ್ಟನ್ನು ರೂಪಿಸಿದ ಜನವರಿ 26 ನಮ್ಮೆಲ್ಲರಿಗೂ ಐತಿಹಾಸಿಕ ದಿನ. ನಮ್ಮ ಹಕ್ಕು ಮತ್ತು ಕರ್ತವ್ಯಗಳನ್ನು ಮನನ ಮಾಡಿಕೊಳ್ಳಲು ಪ್ರತಿಯೊಬ್ಬ ಭಾರತೀಯ ಪ್ರಜೆಗೂ ಇದು ಸುದಿನವಾಗಿದೆ. ಉನ್ನತ ಪ್ರಜಾಪ್ರಭುತ್ವದ ಆಶಯದ ನಮ್ಮ ಸಂವಿಧಾನ ವ್ಯವಸ್ಥೆಯಲ್ಲಿ ಎಲ್ಲರಿಗೂ ಸಾಮಾಜಿಕ ನ್ಯಾಯ, ವಾಕ್ ಸ್ವಾತಂತ್ರ್ಯ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಲಿಂಗ, ಭಾಷೆ, ಧರ್ಮ, ಜನಾಂಗ, ಜನ್ಮಸ್ಥಳ ಯಾವುದೇ ಬೇಧವಿಲ್ಲದೇ ಸಮಾನ ಅವಕಾಶ ನೀಡಲಾಗಿದೆ ಎಂದು ಅವರು ಹೇಳಿದರು.

ರಾಜ್ಯ ಸರಕಾರದ ಕಾರ್ಯ ಯೋಜನೆಗಳನ್ನು ಪ್ರಸ್ತಾಪಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ದೌರ್ಜನ್ಯ, ನಿರ್ಲಕ್ಷ್ಯತೆ ಅಥವಾ ಶೋಷಣೆಗೆ ಒಳಗಾದ ಮಹಿಳೆಯರು ಮತ್ತು ಮಕ್ಕಳಿಗೆ ಸಕಾಲದಲ್ಲಿ ನೆರವು ಮತ್ತು ರಕ್ಷಣೆ ಒದಗಿಸಿ ಭಯ ಮುಕ್ತ ವಾತಾವರಣ ಸೃಷ್ಟಿಸಲು ರಾಜ್ಯದ ಎಲ್ಲಾ ಜಿಲ್ಲೆ ಹಾಗೂ 5 ಪೊಲೀಸ್ ಆಯುಕ್ತಾಲಯಗಳಲ್ಲಿ ಅಕ್ಕಪಡೆಯನ್ನು ಸ್ಥಾಪಿಸಲಾಗಿದೆ. ಬಡ ಮಕ್ಕಳಿಗೆ ಪೂರ್ವ ಪ್ರಾಥಮಿಕ ಶಿಕ್ಷಣ ಒದಗಿಸುವ ಮಹತ್ವಾಕಾಂಕ್ಷೆಯಿಂದ ರಾಜ್ಯದಲ್ಲಿ 4,056 ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿಗಳನ್ನು ಪ್ರಸಕ್ತ ವರ್ಷದಿಂದ ಆರಂಭಿಸಲಾಗುತ್ತಿದೆ ಎಂದರು.

ಮಹಿಳೆಯರ ಆರ್ಥಿಕ ಸ್ವಾತಂತ್ರ್ಯ ಹೆಚ್ಚಿಸಲು ಗೃಹಲಕ್ಷ್ಮೀ ವಿವಿದ್ದೋದ್ದೇಶ ಸಹಕಾರ ಸಂಘ ಸ್ಥಾಪಿಸಲಾಗುತ್ತಿದೆ. ಸರಕಾರಿ ಶಾಲೆಗಳಲ್ಲಿ ಮಧ್ಯಾಹ್ನದ ಬಿಸಿಯೂಟದ ಕ್ಷೀರಭಾಗ್ಯ ಯೋಜನೆಯ ಜೊತೆಗೆ ವಾರದಲ್ಲಿ ಎರಡು ದಿನ ನೀಡುತ್ತಿದ್ದ ಬೇಯಿಸಿದ ಮೊಟ್ಟೆ ನೀಡುವ ಯೋಜನೆಯನ್ನು ವಾರದಲ್ಲಿ 6 ದಿನ ನೀಡಲಾಗುತ್ತಿದ್ದು, ಇದನ್ನು 9, 10ನೇ ತರಗತಿಗಳಿಗೂ ವಿಸ್ತರಿಸಲಾಗಿದೆ ಎಂದು ವಿವರಿಸಿದರು.

ಕೈಗಾರಿಕಾ ಕ್ಷೇತ್ರದಲ್ಲಿ ವಿದೇಶಿ ಬಂಡವಾಳ ಹೂಡಿಕೆಯಲ್ಲಿ ನಮ್ಮದು ಮುಂಚೂಣಿ ರಾಜ್ಯವಾಗಿದೆ. ಹೂಡಿಕೆ ಪ್ರಸ್ತಾವನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸುತ್ತಿದ್ದು, ಹೆಚ್ಚು ಕೈಗಾರಿಕಾ ಸ್ನೇಹಿಯಾಗಿದೆ. ಕಳೆದ ಎರಡೂವರೆ ವರ್ಷದಲ್ಲಿ ರಾಜ್ಯದ ಜನರ ಸಮಸ್ಯೆಗಳನ್ನು ಬಗೆಹರಿಸಲು 100ಕ್ಕೂ ಹೆಚ್ಚು ಮಸೂದೆಗಳನ್ನು ವಿಧಾನಸಭೆಯಲ್ಲಿ ಮಂಡಿಸಿ, ಕಾನೂನಾಗಿಸಿ ಜನರ ಸೇವೆಗೆ ಅವುಗಳನ್ನು ಲಭ್ಯಗೊಳಿಸಲಾಗಿದೆ. ಇದು ದೇಶದಲ್ಲಿಯೇ ಅತ್ಯಂತ ಹೆಚ್ಚು ಹಾಗೂ ತ್ವರಿತ ಕಾನೂನುಗಳನ್ನು ಜಾರಿ ಮಾಡಿದ ಶಾಸಕಾಂಗ ಎನ್ನುವ ಹಿರಿಮೆಗೆ ಪಾತ್ರವಾಗಿದೆ ಎಂದರು.

ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ಮಹಿಳೆಯರ ಆತ್ಮವಿಶ್ವಾಸವನ್ನು, ಆರ್ಥಿಕ ಸ್ವಾತಂತ್ರ್ಯವನ್ನು ಹಾಗೂ ಕುಟುಂಬದ ಸ್ಥಿರತೆಯನ್ನು ಹೆಚ್ಚಿಸಿವೆ ಎಂದು ಹೇಳಿದ ಸಚಿವರು, ಇದರಿಂದ ಕುಟುಂಬದ ಖರೀದಿ ಸಾಮರ್ಥ್ಯ ಹೆಚ್ಚಾಗಿ, ಮಾರುಕಟ್ಟೆಗಳಲ್ಲಿ ಬೇಡಿಕೆ ಏರಿಕೆಯಾಗಿದೆ. ಈವರೆಗೆ ಐದು ಗ್ಯಾರಂಟಿಗಳಿಗೆ 1 ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ವೆಚ್ಚ ಮಾಡಲಾಗಿದೆ. ಇದರಿಂದ ಜಿ.ಎಸ್.ಟಿ ಸಂಗ್ರಹ ಹಾಗೂ ತಲಾ ಆದಾಯ ಕಳೆದ 10 ವರ್ಷಗಳಲ್ಲಿ ಶೇ. 101ರಷ್ಟು ಹೆಚ್ಚಾಗಿದೆ ಎಂದರು.

ರಾಜ್ಯದ ವಿದ್ಯಾರ್ಥಿನಿಯರಿಗಾಗಿ ದೀಪಿಕಾ ಉನ್ನತ ಶಿಕ್ಷಣ ವಿದ್ಯಾರ್ಥಿ ವೇತನವನ್ನು ಅಜೀಂ ಪ್ರೇಮ್ ಜೀ ಫೌಂಡೇಶನ್ನೊಂದಿಗೆ ಒಡಂಬಡಿಕೆ ಮಾಡಿಕೊಂಡು ಜಾರಿಗೆ ತರಲಾಗಿದೆ. ಸರಕಾರ ಪ್ರತೀ ವರ್ಷ ಪ್ರತೀ ವಿದ್ಯಾರ್ಥಿನಿಗೆ 30 ಸಾವಿರ ರೂ. ದೀಪಿಕಾ ವಿದ್ಯಾರ್ಥಿವೇತನವನ್ನು ನೀಡಲಿದೆ. ಇದು ಉನ್ನತ ಶಿಕ್ಷಣದಲ್ಲಿ ಸಾಧನೆ ಮಾಡಲು ಹೆಣ್ಣು ಮಕ್ಕಳಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಪ್ರವಾಸೋದ್ಯಮಕ್ಕೆ ಉತ್ತೇಜನ :

ಪ್ರವಾಸೋದ್ಯಮದಲ್ಲಿ ಹೂಡಿಕೆ ಮಾಡುವವರಿಗೆ ನಮ್ಮ ಸರಕಾರ ಎಲ್ಲಾ ರೀತಿಯ ಬೆಂಬಲ ನೀಡಲಿದೆ. ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿಗೆ ವಿಫುಲ ಅವಕಾಶಗಳಿವೆ. ಇಲ್ಲಿನ ಪ್ರವಾಸೋದ್ಯಮದ ಅಭಿವೃದ್ಧಿಗೆ ಸರಕಾರ ಆಸಕ್ತಿ ವಹಿಸಿದ್ದು, ಕಳೆದ ವಾರ ಮಂಗಳೂರಿನಲ್ಲಿ ಕರಾವಳಿ ಪ್ರವಾಸೋದ್ಯಮ ಸಮಾವೇಶ ನಡೆಸಿದೆ ಎಂದು ವಿವರಿಸಿದರು.

ಕರ್ನಾಟಕ ಪ್ರವಾಸೋದ್ಯಮ ನೀತಿ-2024-29ರಲ್ಲಿ ಕಾಪು ಬೀಚ್, ಲೈಟ್ ಹೌಸ್, ಪಡುಬಿದ್ರಿ ಎಂಡ್ ಪಾಯಿಂಟ್, ಬ್ಲೂ ಫ್ಲ್ಯಾಗ್ ಬೀಚ್, ಕಾಪು ಮಾರಿಗುಡಿ ದೇವಸ್ಥಾನ, ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನ, ಕುಂಜಾರುಗಿರಿ ದುರ್ಗಾದೇವಿ ದೇವಸ್ಥಾನ, ಮಟ್ಟು ರಾಕ್ದ್ವೀಪಗಳನ್ನು ಪ್ರವಾಸಿ ತಾಣಗಳಾಗಿ ಅಭಿವೃದ್ಧಿಗೊಳಿಸಲು ಗುರುತಿಸಲಾಗಿದೆ ಎಂದರು.

ಮೀನುಗಾರರಿಗೆ ಸ್ವಾವಲಂಭಿ ಜೀವನ ನಡೆಸಲು ಅನುಕೂಲವಾಗುವಂತೆ ಸಾಲ ಸೌಲಭ್ಯ, ವಿದ್ಯಾ ನಿಧಿ ಯೋಜನೆ, ಗುಂಪು ವಿಮಾ ಯೋಜನೆ ಸೇರಿದಂತೆ ವಸತಿ ರಹಿತ ಮೀನುಗಾರರಿಗೆ ಮತ್ಸ್ಯಾಶ್ರಯ ಯೋಜನೆಯಡಿ ರಾಜ್ಯದಲ್ಲಿ ಇದುವೆರೆಗೆ 10 ಸಾವಿರ ವಸತಿಗಳನ್ನು ನೀಡಲಾಗಿದೆ ಎಂದರು.

ರಾಜ್ಯದಲ್ಲಿ ಆರೋಗ್ಯ ಸೇತು ಯೋಜನೆಯಡಿ 81 ಸಂಚಾರಿ ಆರೋಗ್ಯ ಘಟಕಗಳಿಗೆ ಚಾಲನೆ ನೀಡಲಾಗಿದೆ. ಉಡುಪಿ ಜಿಲ್ಲೆಯ 4 ಸಂಚಾರಿ ಆರೋಗ್ಯ ಘಟಕಗಳು ದುರ್ಗಮ ಹಾಗೂ ಸಂಪರ್ಕ ರಹಿತ ಹಳ್ಳಿಗಳಿಗೆ ಸಂಚರಿಸಲಿದ್ದು, ಇದರಿಂದ ಜಿಲ್ಲೆಯ ಸುಮಾರು 9,218 ಕೊರಗ ಜನಾಂಗದ ನಾಗರಿಕರಿಗೆ ಸಹಕಾರಿಯಾಗಲಿದೆ. ಪ್ರಧಾನಮಂತ್ರಿ ಬೆಳೆ ವಿಮೆ ಅನುಷ್ಠಾನದಲ್ಲಿ ನಮ್ಮ ರಾಜ್ಯ ಎರಡನೇ ಸ್ಥಾನದಲ್ಲಿದ್ದು, ಕೇಂದ್ರ ಸರ್ಕಾರವು ರಾಜ್ಯ ಕೃಷಿ ಇಲಾಖೆಗೆ ಇತ್ತೀಚೆಗೆ ಪ್ರಶಸ್ತಿ ನೀಡಿ ಗೌರವಿಸಿದೆ ಎಂದರು.

ಜಿಲ್ಲಾ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಹಾಗೂ ಸಚಿವರ ಸಹೋದರ ಚನ್ನರಾಜ್ ಹಟ್ಟಿಹೊಳಿ, ಕರಾವಳಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಂ.ಎ.ಗಫೂರ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾಧಿಕಾರಿ ಟಿ.ಕೆ.ಸ್ವರೂಪ, ಜಿಲ್ಲಾ ಪಂಚಾಯತ್ ಸಿಇಒ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಹಾಗೂ ಇತರರು ಉಪಸ್ಥಿತರಿದ್ದರು.

 

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News