×
Ad

ಜ.15ರಿಂದ ರಾ.ಪಿಂಚಣಿ ಯೋಜನೆಗಳಡಿ ಅಸಂಘಟಿತ ಕಾರ್ಮಿಕರ ನೋಂದಣಿಗೆ ವಿಶೇಷ ಅಭಿಯಾನ: ಉಡುಪಿ ಜಿಲ್ಲಾಧಿಕಾರಿ

Update: 2026-01-22 20:38 IST

ಉಡುಪಿ, ಜ.22: ಕೇಂದ್ರ ಸರಕಾರದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್‌ಧನ್ ಯೋಜನೆಯಲ್ಲಿ ಜಿಲ್ಲೆಯ ಸಣ್ಣ ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳು ಸೇರಿದಂತೆ ಅಸಂಘಟಿತ ವಲಯದ ಕಾರ್ಮಿಕರನ್ನು ರಾಷ್ಟ್ರೀಯ ಪಿಂಚಣಿ ಯೋಜನೆಗಳಡಿ ನೋಂದಾಯಿಸಲು ಜನವರಿ 15ರಿಂದ ಮಾರ್ಚ್ 15ರವರೆಗೆ ವಿಶೇಷ ನೋಂದಣಿ ಅಭಿಯಾನ ಕಾರ್ಯಕ್ರಮವನ್ನು ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ತಿಳಿಸಿದ್ದಾರೆ.

ಗುರುವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ಕೇಂದ್ರ ಸರಕಾರದ ಪ್ರಧಾನಮಂತ್ರಿ ಶ್ರಮಯೋಗಿ ಮಾನ್‌ಧನ್ ಯೋಜನೆ ಹಾಗೂ ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ರಾಷ್ಟ್ರೀಯ ಪಿಂಚಣಿ ಯೋಜನೆಗಳಡಿ ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸಲು ವಿಶೇಷ ನೋಂದಣಿ ಅಭಿಯಾನ ಹಮ್ಮಿಕೊಳ್ಳುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ಜಿಲ್ಲೆಯ ಅಸಂಘಟಿತ ವಲಯದ ಕಾರ್ಮಿಕರನ್ನು, ವ್ಯಾಪಾರಿಗಳನ್ನು ಹಾಗೂ ಸ್ವಯಂ ಉದ್ಯೋಗಿಗಳು ಅವರ ವಯಸ್ಸಿಗನುಗುಣವಾಗಿ ಮಾಸಿಕ 55 ರೂ.ಗಳಿಂದ 200 ರೂ.ವರೆಗೆ ವಂತಿಕೆ ಪಾವತಿಸಿದ್ದಲ್ಲಿ 60 ವರ್ಷದ ನಂತರ ತಿಂಗಳಿಗೆ 3000 ರೂ. ಪಿಂಚಣಿ ಸೌಲಭ್ಯ ಪಡೆಯಬಹುದಾಗಿದೆ ಎಂದು ಜಿಲ್ಲಾದಿಕಾರಿ ವಿವರಿಸಿದರು.

ಆದಾಯ ತೆರಿಗೆ ಪಾವತಿದಾರರು, ಇ.ಎಸ್.ಐ, ಇ.ಪಿ.ಎಫ್, ಎನ್.ಪಿ.ಎಸ್ ಯೋಜನೆಯ ಫಲಾನುಭವಿಗಳಿಗೆ ಈ ಯೋಜನೆಯಡಿ ನೋಂದಾಯಿಸಿಕೊಳ್ಳಲು ಅವಕಾಶರುವುದಿಲ್ಲ ಎಂದೂ ಸ್ವರೂಪ ಟಿ.ಕೆ. ತಿಳಿಸಿದರು.

ಅಸಂಘಟಿತ ವಲಯದ ಕಾರ್ಮಿಕರು, ವ್ಯಾಪಾರಿಗಳು ಹಾಗೂ ಸ್ವಯಂ ಉದ್ಯೋಗಿಗಳಿಗೆ ವೃದ್ಧಾಪ್ಯದಲ್ಲಿ ಆರ್ಥಿಕ ಹಾಗೂ ಸಾಮಾಜಿಕ ಭದ್ರತೆ ಒದಗಿಸಲು ಕೇಂದ್ರ ಸರಕಾರ ಪ್ರಧಾನಮಂತ್ರಿ ಶ್ರಮಯೋಗಿ ಮಾನ್ ಧನ್ ಯೋಜನೆ ಹಾಗೂ ಎನ್‌ಪಿಎಸ್ ಟ್ರೇಡರ್ಸ್ ಎಂಬ ಮಹತ್ವಾಕಾಂಕ್ಷಿ ಪಿಂಚಣಿ ಯೋಜನೆಗಳನ್ನು ಜಾರಿಗೊಳಿಸಿದೆಯ ಎಲ್ಲಾ ವರ್ಗಗಳ ಅಸಂಘಟಿತ ಕಾರ್ಮಿಕರು ಈ ಯೋಜನೆಗಳಡಿ ನೋಂದಾಯಿಸಿಕೊಳ್ಳಲು ಅವಕಾಶಗಳಿವೆ ಎಂದೂ ಅವರು ಹೇಳಿದರು.

18ರಿಂದ 40 ವರ್ಷದೊಳಗಿನ ಅಸಂಘಟಿತ ಕಾರ್ಮಿಕರು ತಮ್ಮ ಆಧಾರ್ ಕಾರ್ಡ್, ಆಧಾರ್‌ಗೆ ಲಿಂಕ್ ಆಗಿರುವ ಮೊಬೈಲ್ ಸಂಖ್ಯೆ, ಬ್ಯಾಂಕ್ ಪಾಸ್ ಪುಸ್ತಕ ಹಾಗೂ ಮೊದಲ ತಿಂಗಳ ವಂತಿಕೆಯೊಂದಿಗೆ ಸಮೀಪದ ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ನೋಂದಣಿಯಾಗುವುದರೊಂದಿಗೆ ಯೋಜನೆಯ ಪ್ರಯೋಜನ ಪಡೆಯಬಹುದು ಎಂದೂ ಅವರು ವಿವರಿಸಿದರು.

ಹೆಚ್ಚು ಅಸಂಘಟಿತ ಕಾರ್ಮಿಕರು ವಾಸಿಸುವ ಸ್ಥಳಗಳಲ್ಲಿ, ಕಾರ್ಮಿಕರು ಸೇರಿವಂತಹ ವಿವಿಧ ಸಮಾರಂಭಗಳಲ್ಲಿ ಶಿಬಿರಗಳನ್ನು ಆಯೋಜಿಸಿ, ಯೋಜನೆಯ ಕುರಿತು ಅರಿವು ಮೂಡಿಸುವುದರೊಂದಿಗೆ ವಿಶೇಷ ನೋಂದಣಿ ಅಭಿಯಾನದಡಿ ಹೆಚ್ಚಿನ ಸಂಖ್ಯೆಯ ಕಾರ್ಮಿಕರನ್ನು ನೋಂದಾಯಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ಕಾರ್ಮಿಕ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಯೋಜನೆಯಡಿ ಜಿಲ್ಲೆಯಲ್ಲಿ 7275 ಅಸಂಘಟಿತ ಕಾರ್ಮಿಕರನ್ನು ನೋಂದಾಯಿಸುವಗುರಿಯನ್ನು ನಿಗದಿ ಪಡಿಸಲಾಗಿದೆ. ನರೇಗಾ ಕಾರ್ಮಿಕರು, ಎಸ್‌ಹೆಚ್‌ಜಿ ಸದಸ್ಯರು, ಕೃಷಿ ಕಾರ್ಮಿಕರು, ಅಂಗನವಾಡಿ ಕಾರ್ಮಿಕರು, ಮಧ್ಯಾಹ್ನದ ಬಿಸಿ ಊಟದ ಕಾರ್ಮಿಕರು, ಆಶಾ ಕಾರ್ಯಕರ್ತೆಯರು, ಬೀದಿ ಬದಿ ವ್ಯಾಪಾರಿಗಳು, ಗೃಹ ಕಾರ್ಮಿಕರು, ಮನೆ ಕೆಲಸದವರು, ಕೃಷಿ ಕಾರ್ಮಿಕರು, ಮೀನುಗಾರರು ಸೇರಿದಂತೆ ವಿವಿಧ ಅಸಂಘಟಿತ ಕಾರ್ಮಿಕರು ಹೆಚ್ಚಿನ ಸಂಖ್ಯೆಯಲ್ಲಿ ನೋಂದಣಿ ಮಾಡಿಕೊಳ್ಳುವುದರೊಂದಿಗೆ ಇದರ ಸದುಪಯೋಗ ಪಡೆಬಹುದಾ ಗಿದೆ ಎಂದೂ ಜಿಲ್ಲಾಧಿಕಾರಿ ತಿಳಿಸಿದರು.

ಚಂದಾದಾರರು 10 ವರ್ಷದ ಒಳಗೆ ಯೋಜನೆಯಿಂದ ನಿರ್ಗಮಿಸಿದ್ದಲ್ಲಿ ಅವರು ಪಾವತಿಸಿದ ವಂತಿಗೆಯನ್ನು ಮಾತ್ರ ಆ ಅವಧಿಗೆ ಉಳಿತಾಯ ಖಾತೆಗೆ ಪಾವತಿಸಲಾಗುವ ಬಡ್ಡಿಯೊಂದಿಗೆ ಹಿಂದಿರುಗಿಸಲಾಗುತ್ತದೆ. 10 ವರ್ಷಕ್ಕಿಂತ ಹೆಚ್ಚು ಅವಧಿಯ ನಂತರ ನಿರ್ಗಮಿಸಿದ್ದಲ್ಲಿ ಅವರು ಪಾವತಿಸಿದ ವಂತಿಗೆ ಯೊಂದಿಗೆ ಪಿಂಚಣಿ ಖಾತೆಗೆ ಜಮೆಯಾಗಿ ರುವ ಬಡ್ಡಿ ಅಥವಾ ಉಳಿತಾಯ ಖಾತೆಗೆ ಪಾವತಿಸಲಾಗುವ ಬಡ್ಡಿ ಇವುಗಳಲ್ಲಿ ಯಾವ ಮೊತ್ತ ಹೆಚ್ಚಿರುತ್ತದೋ ಅದನ್ನು ಪಾವತಿಸಲಾಗುವುದು ಎಂದೂ ಸ್ವರೂಪ ಟಿ.ಕೆ. ತಿಳಿಸಿದರು.

ಫಲಾನುಭವಿಯು ನಿರಂತರವಾಗಿ ವಂತಿಗೆಯನ್ನು ಪಾವತಿಸುತ್ತಿದ್ದು, 60 ವರ್ಷದ ಒಳಗೆ ಮೃತರಾದರೆ ಅಥವಾ ಶಾಶ್ವತ ಅಂಗ ನ್ಯೂನ್ಯತೆಯಿಂದ ವಂತಿಗೆಯನ್ನು ಪಾವತಿಸಲು ಸಾಧ್ಯವಾಗದಿದ್ದರೆ, ಫಲಾನುಭವಿಯ ಸಂಗಾತಿ ಯೋಜನೆಯಡಿ ಸೇರಲು ಅವಕಾಶವಿದ್ದು, ವಂತಿಗೆಯನ್ನು ಪಾವತಿಸಿ ಯೋಜನೆಯಡಿ ಮುಂದುವರಿಯಬಹುದು ಅಥವಾ ಅವರ ವಂತಿಗೆಯನ್ನು ಬಡ್ಡಿಯೊಂದಿಗೆ ಪಡೆದುಕೊಳ್ಳಬಹುದು ಎಂದರು.

ಅಸಂಘಟಿತ ವಲಯದ ಕಾರ್ಮಿಕರಿಗೆ ಈ ಎರಡೂ ಯೋಜನೆಗಳ ಕುರಿತು ಆಶಾ, ಅಂಗನವಾಡಿ ಕಾರ್ಯಕರ್ತೆ ಯರು, ಪಶು ಸಖಿಯರು, ಕೃಷಿ ಸಖಿ ಯರು ಯೋಜನೆಯ ಕುರಿತಂತೆ ಅರಿವು ಮೂಡಿಸಿ ಯೋಜನೆಯ ಫಲಾನುಭವಿ ಗಳನ್ನಾಗಿಸಬೇಕು ಎಂದೂ ಜಿಲ್ಲಾಧಿಕಾರಿಗಳು ಸಲಹೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಕಾರ್ಮಿಕ ಅಧಿಕಾರಿ, ಜಿಲ್ಲಾ ಕಾರ್ಮಿಕ ಅಧಿಕಾರಿ ಕಮಲ್ ಷಾ ಅಲ್ತಾಫ್ ಅಹಮದ್, ಪೌರಾಯುಕ್ತ ಮಹಾಂತೇಶ್ ಹಂಗರಗಿ, ಕೈಗಾರಿಕಾ ಇಲಾಖೆಯ ಜಂಟಿ ನಿರ್ದೇಶಕ ನಾಗರಾಜ್ ನಾಯಕ್, ವಿವಿಧ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.



 


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News