×
Ad

ನ.2-4ರವರೆಗೆ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟ: ಉಡುಪಿ ಡಿಸಿ ಡಾ. ವಿದ್ಯಾಕುಮಾರಿ

Update: 2023-09-30 21:47 IST

ಉಡುಪಿ, ಸೆ.30: ರಾಜ್ಯ ಮಟ್ಟದ 14 ವರ್ಷ ಒಳಗಿನ ವಯೋಮಾನದ ಬಾಲಕ ಹಾಗೂ ಬಾಲಕಿಯರ ಅಥ್ಲೆಟಿಕ್ಸ್ ಕ್ರಿಡಾಕೂಟವು ನವೆಂಬರ್ 2ರಿಂದ 4ರವರೆಗೆ ಉಡುಪಿ ಅಜ್ಜರಕಾಡಿನ ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ತಿಳಿಸಿದ್ದಾರೆ.

ಶನಿವಾರ ಮಣಿಪಾಲದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಾಜ್ಯ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದ ಆಯೋಜನೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.

ರಾಜ್ಯಮಟ್ಟದ 14 ವರ್ಷ ಒಳಗಿನ ವಯೋಮಾನದವರಿಗೆ ಅಥ್ಲೆಟಿಕ್ಸ್ ಕ್ರೀಡಾಕೂಟವು ನವೆಂಬರ್ 2ರಿಂದ ಮೂರು ದಿನಗಳ ಕಾಲ ನಡೆಯಲಿದ್ದು, ಇದರಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ 3000ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ ಎಂದರು.

ಕ್ರೀಡಾಕೂಟಕ್ಕೆ ಆಗಮಿಸುವ ಎಲ್ಲಾ ಕ್ರೀಡಾಪಟುಗಳು ಸೇರಿದಂತೆ ಅವರುಗಳೊಂದಿಗೆ ಆಗಮಿಸುವ ಶಿಕ್ಷಕರಿಗೆ ತಂಗಲು ವಸತಿ ವ್ಯವಸ್ಥೆ, ಊಟೋಪಚಾರ, ವಾಹನದ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಈಗಿನಿಂದಲೇ ಪೂರ್ವ ತಯಾರಿ ಮಾಡಿಕೊಳ್ಳುವಂತೆ ಹಾಗೂ ವ್ಯವಸ್ಥೆಯಲ್ಲಿ ಯಾವುದೇ ಕೊರತೆಗಳು ಉಂಟಾಗದಂತೆ ನೋಡಿಕೊಳ್ಳಬೇಕು ಎಂದರು.

ವಿವಿಧ ಜಿಲ್ಲೆಗಳನ್ನು ಪ್ರತಿನಿಧಿಸಲು ಅರ್ಹತೆ ಪಡೆದಿರುವ ಕ್ರೀಡಾಪಟುಗಳ ಪ್ರವೇಶ ಪತ್ರ ಹಾಗೂ ಪೂರಕ ಮಾಹಿತಿಯನ್ನು ನವೆಂಬರ್ 1ರ ಒಳಗಾಗಿ ಪಡೆದುಕೊಳ್ಳುವುದರೊಂದಿಗೆ ನವೆಂಬರ್ 2ರಂದು ಆಗಮಿಸುವ ಕ್ರೀಡಾಪಟು ಗಳ ನೊಂದಣಿ ಮಾಡಿಕೊಳ್ಳಲು ಸೈಂಟ್ ಸಿಸಿಲೀಸ್ ಪ್ರೌಢಶಾಲೆಯಲ್ಲಿ ಅಗತ್ಯ ವ್ಯವಸ್ಥೆಯನ್ನು ಮಾಡಿಕೊಳ್ಳಬೇಕು ಎಂದರು.

ಕ್ರೀಡಾಕೂಟಕ್ಕೆ ಹೆಚ್ಚು ಜನರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಅವರಿಗೆ ಅಗತ್ಯವಿರುವ ಕುಡಿಯುವ ನೀರು, ನೈರ್ಮಲ್ಯದ ವ್ಯವಸ್ಥೆಯನ್ನು ಸ್ಥಳೀಯ ನಗರಸಭೆ ವತಿಯಿಂದ ಹಾಗೂ ತುರ್ತು ಚಿಕಿತ್ಸೆಗೆ ವೈದ್ಯಕೀಯ ವ್ಯವಸ್ಥೆಯನ್ನು ಜಿಲ್ಲಾ ಆರೋಗ್ಯ ಇಲಾಖೆಯ ಅಧಿಕಾರಿಗಳು ಮಾಡಬೇಕೆಂದು ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಗಣಪತಿ, ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ, ನಗರಸಭೆ ಪೌರಾಯುಕ್ತ ರಾಯಪ್ಪ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ ಕುಮಾರ್ ಶೆಟ್ಟಿ, ನಗರಸಭಾ ಸದಸ್ಯರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News