×
Ad

ಮಕ್ಕಳ ಪ್ರತಿಭೆಗೆ ಸೂಕ್ತ ವೇದಿಕೆ ಕಲ್ಪಿಸಿದ್ದಲ್ಲಿ ಪ್ರತಿಭೆ ಅನಾವರಣ : ದಿನಕರ ಹೇರೂರು

ಮಕ್ಕಳ ವಿವಿಧ ಸ್ಪರ್ಧೆಗಳ ಉದ್ಘಾಟನೆ

Update: 2025-11-11 21:29 IST

ಉಡುಪಿ, ನ.11: ಪ್ರತಿಯೊಂದು ಮಗುವಿನಲ್ಲೂ ಒಂದಲ್ಲಾ ಒಂದು ರೀತಿಯ ಪ್ರತಿಭೆ ಅಡಕವಾಗಿರುತ್ತದೆ. ಪೋಷಕರು ಹಾಗೂ ಗುರು- ಹಿರಿಯರು ಮಗುವಿನಲ್ಲಿರುವ ಸುಪ್ತ ಪ್ರತಿಭೆಯನ್ನು ಗುರುತಿಸಿ, ಮಾರ್ಗದರ್ಶನ ನೀಡಿ ಸೂಕ್ತ ವೇದಿಕೆ ಕಲ್ಪಿಸಿದ್ದಲ್ಲಿ ಪ್ರತಿಭೆ ಅನಾವರಣಕ್ಕೆ ದಾರಿದೀಪವಾಗಲಿದೆ ಎಂದು ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಹೇಳಿದ್ದಾರೆ.

ಬ್ರಹ್ಮಗಿರಿಯಲ್ಲಿರುವ ಜಿಲ್ಲಾ ಬಾಲಭವನದಲ್ಲಿ ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾ ಬಾಲಭವನ ಸಮಿತಿ ಉಡುಪಿ, ಶಾಲಾ ಶಿಕ್ಷಣ ಇಲಾಖೆ ಉಡುಪಿ ಹಾಗೂ ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಪ್ರಸಕ್ತ ಸಾಲಿನ ಮಕ್ಕಳ ದಿನಾಚರಣೆ ಪ್ರಯುಕ್ತ ಮಕ್ಕಳಿಗೆ ಆಯೋಜಿಸಲಾದ ವಿವಿಧ ಸ್ಪರ್ಧೆಗಳನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ವಿದ್ಯಾರ್ಥಿಗಳು ಶಿಕ್ಷಣದ ಜೊತೆ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ವ್ಯಕ್ತಿತ್ವ ವಿಕಸನಕ್ಕೆ ದಾರಿಯಾಗುತ್ತದೆ. ವಿದ್ಯಾರ್ಥಿಗಳು ಗುರು-ಹಿರಿಯರು, ಪೋಷಕರನ್ನು ಗೌರವ ಮನೋಭಾವದಿಂದ ಕಾಣಬೇಕು. ಸುಶಿಕ್ಷಿತರಾಗಿ ಸತ್ಪ್ರಜೆಗಳಾಗಿ ಬಾಳಬೇಕು ಎಂದು ಮಕ್ಕಳಿಗೆ ಕಿವಿಮಾತು ಹೇಳಿದರು.

ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್ ಮಾತನಾಡಿ, ಮಕ್ಕಳಿಗೆ ಸ್ವಾತಂತ್ರ್ಯ ಹೋರಾಟಗಾರರು, ಮೇಧಾವಿಗಳ ಬಗ್ಗೆ ಬಾಲ್ಯದಿಂದಲೇ ತಿಳಿಸಿದಲ್ಲಿ ಅವರುಗಳಲ್ಲಿ ದೇಶಪ್ರೇಮದ ಬಗ್ಗೆ ಆಸಕ್ತಿ ಮೂಡುತ್ತದೆ. ಸಮಾಜವನ್ನು ಒಟ್ಟುಗೂಡಿಸುವ, ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವ ಶಕ್ತಿ ಮಕ್ಕಳಲ್ಲಿದೆ ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಲೋಕೇಶ್ ಸಿ. ಮಾತನಾಡಿ, ಮ್ಕಕಳು ತಮ್ಮಲ್ಲಿರುವ ಪ್ರತಿಭೆಗಳ ಮೂಲಕ ಸಾಧನೆ ಮಾಡಿ, ಕಲೆ, ಸಂಸ್ಕೃತಿ, ಸಂಪ್ರದಾಯ ಉಳಿಸುವುದರೊಂದಿಗೆ ಸಾಂಸ್ಕೃತಿಕ ರಾಯಭಾರಿಗಳಾಗಿ ಹೊರಹೊಮ್ಮಬೇಕು ಎಂದರು.

ಇದೇ ಸಂದರ್ಭದಲ್ಲಿ ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆ ಯಡಿ ಅಸಾಧಾರಣ ಸಾಧನೆ ಮಾಡಿದ 5-18 ವರ್ಷದ 8 ಮಂದಿ ಮಕ್ಕಳನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್, ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿ ಡಾ.ಎಲ್ಲಮ್ಮ, ಉಡುಪಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ವಿಜಯನಾರಾಯಣ ನಾಯಕ್ ಉಪಸ್ಥಿತರಿದ್ದರು.

ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ, ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರೆ, ದೀಪಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.



ಮಕ್ಕಳಿಗೆ ವಿವಿಧ ಸ್ಪರ್ಧೆಗಳು

ಕಾರ್ಯಕ್ರಮದಲ್ಲಿ 9ರಿಂದ 16 ವರ್ಷದ ಒಳಗಿನ ಮಕ್ಕಳಿಗೆ ಸೃಜನಾತ್ಮಕ ಪ್ರದರ್ಶನ ಕಲೆಗಳಾದ ಶಾಸ್ತ್ರೀಯ ನೃತ್ಯ, ಜಾನಪದ ನೃತ್ಯ, ಕರ್ನಾಟಕ ಶಾಸ್ತ್ರೀಯ ಸಂಗೀತ, ಹಿಂದುಸ್ಥಾನಿ ಶಾಸ್ತ್ರೀಯ ಸಂಗೀತ, ವಾದ್ಯ ಸಂಗೀತ, ಯಕ್ಷಗಾನ, ಯಕ್ಷಿಣಿ ಪ್ರದರ್ಶನ, ಸುಗಮ ಸಂಗೀತ ಮತ್ತು ಏಕಪಾತ್ರಾಭಿನಯ, ವಿಜ್ಞಾನದಲ್ಲಿ ನೂತನ ಆವಿಷ್ಕಾರ, ಸೃಜನಾತ್ಮಕ ಕಲೆ - ಚಿತ್ರಕಲೆ, ಕರಕುಶಲ, ಜೇಡಿಮಣ್ಣಿನ ಕಲೆ ಹಾಗೂ ಸೃಜನಾತ್ಮಕ ಬರವಣಿಗೆ -ಕಥೆ, ಪ್ರಬಂಧ, ಕವನ ಬರೆಯುವ ಸ್ಪರ್ಧೆಗಳು ನಡೆದವು.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News