×
Ad

ವಿದ್ಯಾರ್ಥಿಗಳನ್ನು ಉತ್ತಮ ನಾಗರಿಕರನ್ನಾಗಿಸುವಲ್ಲಿ ಶಿಕ್ಷಕರ ಪಾತ್ರ ಮುಖ್ಯ: ಯಶ್ಪಾಲ್ ಸುವರ್ಣ

Update: 2026-05-09 15:09 IST

ಉಡುಪಿ, ಮೇ 9: ವಿದ್ಯಾರ್ಥಿಗಳಲ್ಲಿ ಜೀವನ ಮೌಲ್ಯ, ಕಲೆ ಮತ್ತು ಸಂಸ್ಕೃತಿಗಳ ವಿಚಾರಗಳನ್ನು ಬೆಳೆಸಿ ಭವಿಷ್ಯದಲ್ಲಿ ಉತ್ತಮ ನಾಗರಿಕರನ್ನಾಗಿ ಮಾಡುವಲ್ಲಿ ಶಿಕ್ಷಕರ ಪಾತ್ರ ಮುಖ್ಯವಾದುದು ಎಂದು ಉಡುಪಿ ಶಾಸಕ ಯಶ್‌ಪಾಲ್ ಎ.ಸುವರ್ಣ ಹೇಳಿದ್ದಾರೆ.

ಉಡುಪಿ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನಡೆದ ಉಡುಪಿ ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ವಾರ್ಷಿಕೋತ್ಸವ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತಿದ್ದರು.

ಗುಣಮಟ್ಟದ ಶಿಕ್ಷಣ ವಿದ್ಯಾರ್ಥಿಗಳಿಗೆ ಸಿಗಬೇಕಾದರೆ ತರಗತಿ ಒಳಗಿನ ಪಾಠಗಳ ಜತೆಗೆ ಅವರನ್ನು ಸಾಂಸ್ಕೃತಿಕ ಮತ್ತು ಕ್ರೀಡಾಕ್ಷೇತ್ರಗಳಲ್ಲಿ ಭಾಗವಹಿಸುವಂತೆ ಹುರಿದುಂಬಿಸಬೇಕು. ವಿದ್ಯಾರ್ಥಿ ಜೀವನದಲ್ಲಿಯೇ ಮಾನವೀಯತೆ, ಸಮಾಜ ಸೇವೆ ಮತ್ತು ರಾಷ್ಟ್ರೀಯತೆಯ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು ಎಂದರು.

ಅದಾನಿ ಗ್ರೂಪ್‌ನ ಅಧ್ಯಕ್ಷ ಮತ್ತು ಕಾರ್ಯ ನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ಮಾತನಾಡಿ, ಸೃಜನಶೀಲತೆಯಂತಹ ಗುಣವನ್ನು ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ, ಸಾಂಸ್ಕೃತಿಕ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಅನ್ವುಸಿಕೊಳ್ಳುವುದರಿಂದ ವಿಶೇಷ ಸಾಧನೆಯನ್ನು ಮಾಡಲು ಸಾಧ್ಯ. ಸ್ಪರ್ಧಾತ್ಮಕ ಈ ಯುಗದಲ್ಲಿ ಮುಂದುವರಿಯಲು ಪ್ರತಿಯೊಂದು ಕೆಲಸದಲ್ಲಿಯೂ ಸೃಜನಶೀರಾಗಿರುವುದು ಬಹಳ ಮುಖ್ಯ ಎಂದು ತಿಳಿಸಿದರು.

ಮುಖ್ಯ ಅತಿಥಿಯಾಗಿ ಶ್ಯಾಮಿಲಿ ನವೀನ್ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ.ಸೋಜನ್ ಕೆ.ಜಿ. ಕಾಲೇಜಿನ ರ್ವಾಕ ವರದಿ ಯನ್ನು ಮಂಡಿಸಿದರು. ಈ ಸಂದರ್ಭದಲ್ಲಿ ಕ್ರೀಡೆ, ರೇಂಜರ್ಸ್‌ ಮತ್ತು ಎನ್‌ಸಿಸಿಯಲ್ಲಿ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿನಿಯರನ್ನು ಸಮ್ಮಾನಿಸಲಾಯಿತು.

ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಕೃಷ್ಣ ಭಟ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ.ನಿಕೇತನ, ಐಕ್ಯೂಎಸಿ ಸಂಚಾಲಕಿ ಡಾ.ಶ್ರೀಮತಿ ಅಡಿಗ, ದೈಹಿಕ ಶಿಕ್ಷಣ ನಿರ್ದೇಶಕ ಡಾ.ರಾಮಚಂದ್ರ ಪಾಟ್ಕರ್, ವಿದ್ಯಾರ್ಥಿ ಸಂಘದ ಪ್ರತಿನಿಧಿಗಳಾದ ಕೀರ್ತಿ ಶೆಟ್ಟಿ, ಸುಮನ, ಸ್ವೀಕೃತಿ ರಾವ್, ಶರಣ್ಯ, ಉಷಾ ಮತ್ತು ಸುಚಿತ ಉಪಸ್ಥಿತರಿದ್ದರು.

ಕಾಲೇಜಿನ ಸಾಂಸ್ಕೃತಿಕ ಸಮಿತಿಯ ಸಂಚಾಲಕ ಡಾ.ರಾಜೇಂದ್ರ ಕೆ ಸ್ವಾಗತಿಸಿದರು. ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಮಂಜುನಾಥ್ ವಂದಿಸಿದರು. ವಾಣಿಜ್ಯಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಶರತ್ ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News