×
Ad

ಉಡುಪಿ | ಡಿ.13ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ

Update: 2025-12-11 19:23 IST

ಉಡುಪಿ, ಡಿ.11: ಆಳ್ವಾಸ್ ನುಡಿಸಿರಿ ವಿರಾಸತ್ ಉಡುಪಿ ಘಟಕದ ಆಶ್ರಯದಲ್ಲಿ ಉಡುಪಿಯ ಶ್ರೀಕೃಷ್ಣ ಮಠದ ರಾಜಾಂಗಣ ಸಮೀಪದ ವಾಹನ ನಿಲುಗಡೆ ಆವರಣದ ಶ್ರೀವಿಶ್ವೇಶತೀರ್ಥ ಶ್ರೀಪಾದ ವೇದಿಕೆಯಲ್ಲಿ ಡಿ.13ರ ಶನಿವಾರ ಸಂಜೆ 5:45ಕ್ಕೆ ಆಳ್ವಾಸ್ ಸಾಂಸ್ಕೃತಿಕ ವೈಭವ ಪ್ರದರ್ಶನಗೊಳ್ಳಲಿದೆ ಎಂದು ಉಡುಪಿ ಘಟಕದ ಜೊತೆ ಕಾರ್ಯದರ್ಶಿ ಹಾಗೂ ಸಂಘಟನಾ ಕಾರ್ಯದರ್ಶಿ ಮುರುಳಿ ಕಡೆಕಾರ್ ತಿಳಿಸಿದ್ದಾರೆ.

ಉಡುಪಿ ಪತ್ರಿಕಾ ಭವನದಲ್ಲಿ ಇಂದು ಕರೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಪ್ರಾರಂಭಿಕ 45 ನಿಮಿಷಗಳ ಕಾಲ ನಡೆಯುವ ಸಭಾ ಕಾರ್ಯಕ್ರಮವನ್ನು ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರತೀರ್ಥ ಶ್ರೀಪಾದರು ಉದ್ಘಾಟಿಸಲಿದ್ದು, ಕಿರಿಯ ಯತಿಗಳಾದ ಶ್ರೀಸುಶ್ರೀಂದ್ರತೀರ್ಥ ಶ್ರೀಪಾದರು ಉಪಸ್ಥಿತರಿರುವರು ಎಂದರು.

ಉಡುಪಿ ಶಾಸಕ ಯಶಪಾಲ್ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ. ಸಮಾಜದ ಎಲ್ಲಾ ಸ್ತರಗಳ ಪ್ರಮುಖರು, ಗಣ್ಯರ ಗೌರವ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದೆ. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ಮಾಜಿ ಸಚಿವ ಡಾ.ವಿ.ಎಸ್.ಆಚಾರ್ಯರಿಗೆ ಅರ್ಪಿಸಲಾಗಿದೆ ಎಂದು ಮುರಳಿ ಕಡೆಕಾರ್ ತಿಳಿಸಿದರು.

ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ 500ಕ್ಕೂ ಅಧಿಕ ವಿದ್ಯಾರ್ಥಿ ಕಲಾವಿದರಿಂದ ಭಾರತೀಯ ಕಲಾಪ್ರಕಾರಗಳಾದ ಯೋಗ ದೀಪಿಕಾ, ಶಾಸ್ತ್ರೀಯ ನೃತ್ಯ- ಅಷ್ಟಲಕ್ಷ್ಮಿ, ಬಡಗುತಿಟ್ಟು ಯಕ್ಷಗಾನ, ಶಂಕರಾರ್ಧ ಶರೀರಿಣಿ, ಗುಜರಾತಿನ ದಾಂಡಿಯ ನೃತ್ಯ, ಮಣಿಪುರಿ ಸ್ಟಿಕ್ ಡಾನ್ಸ್, ಮಲ್ಲಕಂಬ ಹಾಗೂ ಕಸರತ್ತು, ಸೃಜನಾತ್ಮಕ ನೃತ್ಯ, ಡೊಳ್ಳು ಕುಣಿತ, ಕಥಕ್ ವರ್ಷಧಾರೆ, ಪುರುಲಿಯಾ ಸಿಂಹ ನೃತ್ಯ, ತೆಂಕುತಿಟ್ಟು ಯಕ್ಷಗಾನ ಹಿರಣ್ಯಾಕ್ಷ ವಧೆ, ಬೊಂಬೆ ವಿನೋದಾವಳಿಯ ಪ್ರದರ್ಶನ ನಡೆಯಲಿದೆ.

ಸಭಾ ಕಾರ್ಯಕ್ರಮಕ್ಕೂ ಮುನ್ನ ಆಳ್ವಾಸ್ ವಿದ್ಯಾರ್ಥಿಗಳಿಂದ ಸಿಂಗಾರಿ ಮೇಳ ಫ್ಯೂಷನ್ ನಡೆಯಲಿದೆ. ಬೊಂಬೆ ವಿನೋದಾವಳಿಯೊಂದಿಗೆ ಆಕರ್ಷಕ ಸಿಡಿಮದ್ದಿನ ಪ್ರದರ್ಶನವಿರಲಿದೆ. ಪ್ರೇಕ್ಷಕರಿಗಾಗಿ 15,000ಕ್ಕೂ ಅಧಿಕ ಆಸನದ ವ್ಯವಸ್ಥೆ ಮಾಡಲಾಗಿದ್ದು, ಎಲ್ಲರಿಗೂ ಉಚಿತ ಪ್ರವೇಶವಿರಲಿದೆ. ಎಲ್ಲಾ ಕಾರ್ಯಕ್ರಮಗಳು ಕ್ಲಪ್ತ ಸಮಯಕ್ಕೆ ಆರಂಭವಾಗಿ ನಿಗದಿತ ಸಮಯಕ್ಕೆ ಮುಕ್ತಾಯ ಗೊಳ್ಳಲಿದೆ ಎಂದು ಅವರು ಹೇಳಿದರು.

ಪತ್ರಿಕಾಗೋಷ್ಟಿಯಲ್ಲಿ ಆಳ್ವಾಸ್ ನುಡಿಸಿರಿ ವಿರಾಸತ್ ಉಡುಪಿ ಘಟಕದ ಗೌರವಾಧ್ಯಕ್ಷ ವಿ.ಜಿ.ಶೆಟ್ಟಿ, ಕಾರ್ಯದರ್ಶಿ ಭುವನಪ್ರಸಾದ್ ಹೆಗ್ಡೆ, ಕಾರ್ಯಕ್ರಮ ಸಂಘಟಕರಾದ ನಿದೀಶ್ ತೋಳಾರ್, ಅಂಬರೀಷ್, ಆಳ್ವಾಸ್ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಪ್ರಸಾದ ಶೆಟ್ಟಿ, ಸುಪ್ರಸಾದ್ ಶೆಟ್ಟಿ ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News