Udupi | ತಮಿಳುನಾಡು ಸಿಎಂ ವಿಜಯ್‌ಗೆ ಕಪ್ಪು ಬಾವುಟ ಪ್ರದರ್ಶಿಸಲು ಯತ್ನ: ಕರವೇ ಕಾರ್ಯಕರ್ತರು ಪೊಲೀಸ್ ವಶಕ್ಕೆ
ಉಡುಪಿ: ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ವಿರೋಧ ವ್ಯಕ್ತಪಡಿಸುತ್ತಿರುವುದನ್ನು ಖಂಡಿಸಿ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಲು ಮುಂದಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ ಕುಮಾರ್ ಶೆಟ್ಟಿ ಬಣ) ಕಾರ್ಯಕರ್ತರನ್ನು ಪೊಲೀಸರು ಶನಿವಾರ ವಶಕ್ಕೆ ಪಡೆದರು.
ರಾಷ್ಟ್ರೀಯ ಹೆದ್ದಾರಿ 66ರ ಉದ್ಯಾವರ ಬಲಾಯಿಪಾದೆಯಲ್ಲಿ ಕರವೇ ಉಡುಪಿ ಜಿಲ್ಲಾ ಘಟಕದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಕಪ್ಪು ಬಾವುಟ ಪ್ರದರ್ಶನಕ್ಕೆ ಸಿದ್ಧತೆ ನಡೆಸಿದ್ದರು. ಆದರೆ ಮುಖ್ಯಮಂತ್ರಿ ವಿಜಯ್ ಅವರ ವಾಹನ ಸಂಚಾರಕ್ಕೂ ಮುನ್ನವೇ ಪೊಲೀಸರು ಕಾರ್ಯಕರ್ತರನ್ನು ವಶಕ್ಕೆ ಪಡೆದು ಪ್ರತಿಭಟನೆಗೆ ಅವಕಾಶ ನೀಡಲಿಲ್ಲ.
ತಮಿಳುನಾಡು ಮುಖ್ಯಮಂತ್ರಿ ಸಂಚರಿಸುವ ಮಾರ್ಗದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಕರವೇ ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಯಿತು. ಕರವೇ ಉಡುಪಿ ಜಿಲ್ಲಾ ಗೌರವಾಧ್ಯಕ್ಷ ಅನ್ಸಾರ್ ಅಹಮದ್ ಸೇರಿದಂತೆ ಹಲವು ಪದಾಧಿಕಾರಿಗಳು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದು ನಂತರ ಬಿಡುಗಡೆಗೊಳಿಸಿದರು.