ಉಡುಪಿ | ಉದ್ಯಮಿ ಡೇವಿಡ್ ಡಿಸೋಜ ಕೊಲೆ ಪ್ರಕರಣ: 8ನೇ ಆರೋಪಿ ಉತ್ತರಾಖಂಡದಲ್ಲಿ ಬಂಧನ

Update: 2026-08-20 19:03 IST

ಸೂರಜ್‌ ಕುಮಾರ್

ಉಡುಪಿ, ಆ.20: ಕಾಪು ತಾಲೂಕು ಮುದರಂಗಡಿಯ ಸೈಂಟ್ ಕ್ಷೇವಿಯರ್ ಚರ್ಚ್ ಕಾಂಪ್ಲೆಕ್ಸ್ ಎದುರು ಇತ್ತೀಚೆಗೆ ನಡೆದ ಉದ್ಯಮಿ, ಮುದರಂಗಡಿಯ ಮಾಜಿ ಗ್ರಾಪಂ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್ ಡಿಸೋಜಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತಲೆಮರೆಸಿಕೊಂಡಿದ್ದ ಎಂಟನೇ ಆರೋಪಿಯನ್ನು ಉತ್ತರಾಖಂಡ್ ರಾಜ್ಯದ ನೈನಿತಾಲ್ ಜಿಲ್ಲೆಯ ಹಲ್ದ್‌ವಾನಿ ಬಳಿ ಬಂಧಿಸಿದ್ದಾರೆ.

ಬಂಧಿತ ಆರೋಪಿ ಬಿಹಾರದ ಶೇಖಪುರ್ ಜಿಲ್ಲೆಯ ಕಟ್ಟಾರಿಯ ಸೂರಜ್ ಕುಮಾರ್ (31)ನನ್ನು ಆರೋಪಿಗಳ ಪತ್ತೆ ಬಗ್ಗೆ ವಿಶೇಷ ಕರ್ತವ್ಯದಲ್ಲಿ ಮುಂಬಯಿ, ದೆಹಲಿ ಸೇರಿದಂತೆ ವಿವಿಧ ರಾಜ್ಯಗಳಿಗೆ ತೆರಳಿದ್ದ ಕುಂದಾಪುರ ಪೊಲೀಸರು ಹಲ್ದ್‌ವಾನಿ ಬಳಿ ಆರೋಪಿಯನ್ನು ವಶಕ್ಕೆ ಪಡೆದು ಉಡುಪಿಗೆ ಕರೆತಂದಿದ್ದಾರೆ.

ಡೇವಿಡ್ ಕೊಲೆ ಪ್ರಕರಣದಲ್ಲಿ ಈತ ಕೃತ್ಯ ಮಾಡಲು ಇತರ ಆರೋಪಿಗಳೊಂದಿಗೆ ಸೇರಿ ಅಪರಾಧಿಕ ಒಳಸಂಚು ನಡೆಸಿ, ಹಣಕಾಸು ಪೂರೈಕೆ ಮಾಡಿದ ಬಳಿಕ ತಲೆಮರೆಸಿಕೊಂಡಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಡೇವಿಡ್ ಡಿಸೋಜನನ್ನು ಆ.7ರಂದು ಅಪರಾಹ್ನ 3:45ರ ಸುಮಾರಿಗೆ ಮೋಟಾರ್ ಸೈಕಲ್‌ನಲ್ಲಿ ಬಂದ ಇಬ್ಬರು ಆರೋಪಿಗಳ ಪೈಕಿ ಸಹಸವಾರ ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿ ಹತ್ಯೆ ಮಾಡಿದ್ದ. ಈ ಕುರಿತು ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಕೊಲೆ ನಡೆದ 24 ಗಂಟೆಯೊಳಗೆ ಪೊಲೀಸರು ಪ್ರಕರಣದಲ್ಲಿ ನೇರವಾಗಿ ಭಾಗಿಯಾಗಿದ್ದ ಆರೋಪಿಗಳಾದ ಅನ್ನೋಲ್ ರಸ್ತೋಗಿ ಹಾಗೂ ಜಿಯಾಹುಲ್ ವಾಜುಲ್ ಶೇಖ್ ಅಲಿಯಾಸ್ ದೀಪಕ್ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.

ಪ್ರಕರಣದ ಮೊದಲ ಆರೋಪಿಯಾಗಿರುವ ರಾಜು, ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸರ್ಕಾರಿ ನೌಕರರ ಮೇಲೆ ನಡೆದ ಕೊಲೆ ಯತ್ನ ಪ್ರಕರಣದಲ್ಲಿ ಗಾಯಗೊಂಡಿದ್ದು, ಅಜ್ಜರಕಾಡು ಜಿಲ್ಲಾ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಆಸ್ಪತ್ರೆಯಿಂದ ಬಿಡುಗಡೆಯಾದ ಬಳಿಕ ಆತನನ್ನು ವಶಕ್ಕೆ ಪಡೆದು ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಇತರ ಆರೋಪಿಗಳೊಂದಿಗೆ ಸೇರಿ ಅಪರಾಧಿಕ ಒಳಸಂಚು ನಡೆಸಿ ಕೃತ್ಯಕ್ಕೆ ಹಣಕಾಸು ನೆರವು ನೀಡಿದ ಆರೋಪದ ಮೇಲೆ ಮೊಹಮ್ಮದ್ ಇರ್ಷಾದ್, ಚಿರಾಗ್ ಪೂಜಾರಿ, ಸದಾನಂದ ದೇವಾಡಿಗ ಹಾಗೂ ಕಿಶೋರ್ ರಾಮ ಪೂಜಾರಿ ಎಂಬವರನ್ನು ಈಗಾಗಲೇ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ನೈನಿತಾಲ್‌ನಲ್ಲಿ ವಶಕ್ಕೆ ಪಡೆದ ಸೂರಜ್‌ನನ್ನು ಪ್ರಕರಣದ ತನಿಖಾಧಿಕಾರಿ ಮುಂದೆ ಹಾಜರುಪಡಿಸಿ ಬಂಧಿಸಲಾಗಿದ್ದು, ಆತನಿಂದ ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ. ಬಂಧಿತ ಸೂರಜ್ ಕುಮಾರ್‌ ನನ್ನು ಆ.20ರಂದು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ. ವಿಚಾರಣೆ ನಡೆಸಿದ ಉಡುಪಿಯ ಪ್ರಧಾನ ಹಿರಿಯ ಸಿವಿಲ್ ನ್ಯಾಯಾದೀಶ ಹಾಗೂ ಮುಖ್ಯ ನ್ಯಾಯಿಕ ದಂಡಾಧಿಕಾರಿ ಎಂ.ಪುರುಷೋತ್ತಮ್ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಪ್ರಕರಣದ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸೂರಜ್ ಕುಮಾರ್ ಬಂಧನದೊಂದಿಗೆ ಡೇವಿಡ್ ಕೊಲೆ ಪ್ರಕರಣದಲ್ಲಿ ಬಂಧಿತರಾದವರ ಸಂಖ್ಯೆ ಎಂಟಕ್ಕೇರಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News