×
Ad

ಉಡುಪಿ: ಕ್ರೈಸ್ತರಿಂದ ಸಂಭ್ರಮದ ಮೊಂತಿ ಫೆಸ್ಟ್ ಆಚರಣೆ

Update: 2023-09-08 12:28 IST

ಉಡುಪಿ, ಸೆ.8: ಜಿಲ್ಲಾದ್ಯಂತ ಕನ್ಯಾಮರಿಯಮ್ಮನವರ ಜನ್ಮದಿನವಾದ ಮೊಂತಿ ಫೆಸ್ಟ್ ಅನ್ನು ಕ್ರೆಸ್ತರು ಶುಕ್ರವಾರ ಸಂಭ್ರಮದಿಂದ ಆಚರಿಸಿದರು.

ಧರ್ಮಗುರುಗಳು ಸಾರ್ವಜನಿಕ ಸ್ಥಳಗಳಲ್ಲಿ ಆಯಾ ಊರಿನ ಗುರಿಕಾರರು ತಮ್ಮ ಹೊಲಗಳಿಂದ ಆರಿಸಿ ತಂದ ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿದರು. ಪುಟ್ಟ ಮಕ್ಕಳು ಕನ್ಯಾ ಮರಿಯಮ್ಮನವರ ಮೂರ್ತಿಗೆ ಹೂಗಳನ್ನು ಸಮರ್ಪಿಸಿದ ಬಳಿಕ ಜಿಲ್ಲೆಯ ಎಲ್ಲ ಚರ್ಚುಗಳಲ್ಲಿ ಧರ್ಮಗುರುಗಳು ಭತ್ತದ ತೆನೆಯನ್ನು ಆಶೀರ್ವದಿಸಿ ಪವಿತ್ರ ಬಲಿಪೂಜೆಯಲ್ಲಿ ಪಾಲ್ಗೊಂಡರು. ಪವಿತ್ರ ಬಲಿಪೂಜೆಯಲ್ಲಿ ಧರ್ಮಗುರುಗಳು ಕುಟುಂಬ ಜೀವನ ಹಾಗೂ ಸಮಾಜದಲ್ಲಿ ಮಹಿಳೆಯ ಸ್ಥಾನಮಾನದ ಕುರಿತು ಪ್ರವಚನ ನೀಡಿದರು.

ಉಡುಪಿ ಕ್ರೆಸ್ತ ಧರ್ಮಪ್ರಾಂತದ ಧರ್ಮಾಧ್ಯಕ್ಷ ಅತಿ ವಂದನೀಯ ಜೆರಾಲ್ಡ್ ಐಸಾಕ್ ಲೋಬೊ ಕಲ್ಮಾಡಿ ಸ್ಟೆಲ್ಲಾ ಮೇರಿಸ್ ಚರ್ಚಿನಲ್ಲಿ ಹಬ್ಬದ ಬಲಿಪೂಜೆ ಅರ್ಪಿಸಿ ಹೊಸ ತೆನೆಗಳನ್ನು ಆಶೀರ್ವದಿಸಿ ಹಬ್ಬದ ಸಂದೇಶ ನೀಡಿದರು.

ಉಡುಪಿಯ ಶೋಕ ಮಾತಾ ಇಗರ್ಜಿಯಲ್ಲಿ ಜರುಗಿದ ಧಾರ್ಮಿಕ ಕಾರ್ಯಕ್ರಮದಲ್ಲಿ ಚರ್ಚಿನ ಪ್ರಧಾನ ಧರ್ಮಗುರು ವಂ.ಚಾರ್ಲ್ಸ್ ಮಿನೇಜಸ್ ಹೊಸ ಭತ್ತದ ತೆನೆಯನ್ನು ಆಶೀರ್ವದಿಸಿದರು. ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ ವಂ.ವಲೇರಿಯನ್ ಮೆಂಡೊನ್ಸಾ, ಶಿರ್ವ ಆರೋಗ್ಯ ಮಾತಾ ಇಗರ್ಜಿಯಲ್ಲಿ ವಂ.ಲೆಸ್ಲಿ ಡಿಸೋಜ, ಕುಂದಾಪುರ ಹೋಲಿ ರೋಸರಿ ಚರ್ಚಿನಲ್ಲಿ ವಂ.ಸ್ಟ್ಯಾನಿ ತಾವ್ರೋ, ಕಾರ್ಕಳದ ಅತ್ತೂರು ಸಂತ ಲಾರೆನ್ಸ್ ಬಾಸಿಲಿಕಾದಲ್ಲಿ ವಂ.ಆಲ್ಬನ್ ಡಿಸೋಜ, ಸಾಸ್ತಾನ ಸಂತ ಅಂತೋನಿ ದೇವಾಲಯದಲ್ಲಿ ವಂ.ಸುನೀಲ್ ಡಿಸಿಲ್ವ ಹಾಗೂ ಉಡುಪಿ ಧರ್ಮಪ್ರಾಂತದ ಯುವ ನಿರ್ದೇಶಕ ವಂ.ಸ್ಟೀವನ್ ಡಿಸೋಜ ನೇತೃತ್ವದಲ್ಲಿ ಹಬ್ಬದ ಪ್ರಯುಕ್ತ ಬಲಿಪೂಜೆ ನಡೆದವು. ಇದಲ್ಲದೆ ಜಿಲ್ಲೆಯ ಎಲ್ಲಾ ಚರ್ಚುಗಳಲ್ಲಿ ಸಹ ಹಬ್ಬದ ಬಲಿಪೂಜೆಯನ್ನು ಆಯಾಚರ್ಚುಗಳ ಧರ್ಮಗುರುಗಳ ನೇತೃತ್ವದಲ್ಲಿ ನಡೆದವು.

ಬಲಿಪೂಜೆಯ ಬಳಿಕ ಧರ್ಮಗುರುಗಳು ಪ್ರತಿ ಕುಟುಂಬಕ್ಕೆ ಆಶೀರ್ವದಿಸಿದ ಹೊಸ ಭತ್ತದ ತೆನೆಯನ್ನು ನೀಡಿ ಹರಸಿದರು. ಇದೇ ವೇಳೆ ಚಿಕ್ಕ ಮಕ್ಕಳಿಗೆ ಸಿಹಿತಿಂಡಿ, ಕಬ್ಬುಗಳನ್ನು ಸಹ ವಿತರಿಸಲಾಯಿತು. ಇಗರ್ಜಿಯಿಂದ ಭಕ್ತಿಯಿಂದ ಕೊಂಡು ಬಂದ ಭತ್ತದ ತೆನೆಯನ್ನು ಕುಟುಂಬದ ಹಿರಿಯರು ಮನೆಗೆ ತಂದು ದೇವರ ಪೀಠದ ಮೇಲಿಟ್ಟು ಪ್ರಾರ್ಥನೆ ಸಲ್ಲಿಸಿ, ಹೊಸ ಭತ್ತದ ತೆನೆಗಳನ್ನು ಸುಲಿದು ಕುಟುಂಬದ ಸದಸ್ಯರೊಂದಿಗೆ ಪಾಯಸ ಅಥವಾ ಹಾಲಿನೊಂದಿಗೆ ಸೇವಿಸಿದರು. ಅಲ್ಲದೆ ಮನೆಗಳಲ್ಲಿ ಸಂಪೂರ್ಣ ಸಸ್ಯಹಾರದ ಭೋಜನವನ್ನು ತಯಾರಿಸಿ ಕುಟುಂಬದ ಎಲ್ಲಾ ಸದಸ್ಯರು ನೆಲದ ಮೇಲೆ ಕುಳಿತು ಬಾಳೆ ಎಲೆಯಲ್ಲಿ ಸೇವಿಸಿದರು.

 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News