×
Ad

ಉಡುಪಿ: ಕ್ರೈಸ್ತರಿಂದ ಹೊಸ ವರ್ಷಕ್ಕೆ ಸ್ವಾಗತ

Update: 2025-12-31 21:28 IST

ಉಡುಪಿ, ಡಿ.31: ಪ್ರಾರ್ಥನೆ ಹಾಗೂ ಧನ್ಯವಾದ ಸಮರ್ಪಣೆಯೊಂದಿಗೆ ಜಿಲ್ಲೆಯ ಕ್ರೈಸ್ತ ಬಾಂಧವರು 2026ನೇ ಹೊಸ ವರ್ಷವನ್ನು ಹಾರ್ದಿಕವಾಗಿ ಸ್ವಾಗತಿಸಿದರು.

ಬುಧವಾರ ಸಂಜೆ ಚರ್ಚ್‌ಗಳಿಗೆ ತೆರಳಿದ ಕ್ರೈಸ್ತರು ದೇವರಿಗೆ ಕೃತಜ್ಞತೆ ಸಲ್ಲಿಸುವುದೊರಂದಿಗೆ ನೂತನ ವರ್ಷ ಪ್ರತಿಯೊಬ್ಬರ ಜೀವನದಲ್ಲಿ ಸುಖ, ಶಾಂತಿ, ನೆಮ್ಮದಿಯನ್ನು ಕರುಣಿಸಲಿ ಎಂದು ಪ್ರಾರ್ಥಿಸಿದರು.

ಉಡುಪಿ ಧರ್ಮಪ್ರಾಂತದ ಧರ್ಮಾಧ್ಯಕ್ಷ ಡಾ.ಜೆರಾಲ್ಡ್‌ಐಸಾಕ್ ಲೋಬೊ ಅವರು ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್‌ನಲ್ಲಿ ಬುಧವಾರ ರಾತ್ರಿ ಪವಿತ್ರ ಬಲಿಪೂಜೆಯನ್ನು ಅರ್ಪಿಸಿದರು.

ನೂತನ ವರ್ಷದಲ್ಲಿ ದೇವರು ತೋರಿದ ಹಾದಿಯಲ್ಲಿ ನಡೆದು ವಿಶ್ವ ಶಾಂತಿಗಾಗಿ ಪ್ರತಿಯೊಬ್ಬರು ಪ್ರಾರ್ಥನೆ ಸಲ್ಲಿಸುವಂತೆ ಸಲಹೆ ನೀಡುವುದರೊಂದಿಗೆ ವಿಶ್ವಶಾಂತಿಗಾಗಿ ನಮ್ಮಿಂದಾಗುವ ಪ್ರಯತ್ನವನ್ನು ಮಾಡುವಂತೆ ಕ್ರೈಸ್ತ ಸಮುದಾಯಕ್ಕೆ ಕರೆ ನೀಡಿದರು.

ಮಿಲಾಗ್ರಿಸ್ ಕ್ಯಾಥೆಡ್ರಲ್‌ನ ಪ್ರಧಾನ ಧರ್ಮಗುರು ಮೊನ್ಷಿಂಜ್ಞೊರ್ ಫರ್ಡಿನಾಂಡ್ ಗೊನ್ಸಾಲ್ವಿಸ್, ಸಹಾಯಕ ಧರ್ಮಗುರುಗಳಾದ ಪ್ರದೀಪ್ ಕಾರ್ಡೋಜಾ ಹಾಗೂ ಅತಿಥಿ ಧರ್ಮಗುರುಗಳು ಉಪಸ್ಥಿತರಿದ್ದರು.

ಉಡುಪಿ ಶೋಕಮಾತಾ ಇಗರ್ಜಿಯಲ್ಲಿ ಧರ್ಮಗುರು ಚಾರ್ಲ್ಸ್ ಮಿನೇಜಸ್, ಶಿರ್ವ ಆರೋಗ್ಯ ಮಾತಾ ಚರ್ಚಿನಲ್ಲಿ ವಂ. ಲೆಸ್ಲಿ ಡಿಸೋಜಾ, ತೊಟ್ಟಂ ಸಂತ ಅನ್ನಮ್ಮ ಚರ್ಚ್‌ನಲ್ಲಿ ವಂ.ಡೆನಿಸ್ ಡೆಸಾ ಅವರ ನೇತೃತ್ವದಲ್ಲಿ ಹಾಗೂ ಜಿಲ್ಲೆಯ ಎಲ್ಲಾ ಚರ್ಚುಗಳಲ್ಲಿ ಹೊಸ ವರ್ಷ ಆಚರಣೆಯ ಪ್ರಯುಕ್ತ ಬಲಿಪೂಜೆಗಳು ನಡೆದವು.

ಹೊಸ ವರ್ಷಾಚರಣೆ ಸ್ವಾಗತಿಸುವ ಅಂಗವಾಗಿ ಚರ್ಚ್‌ಗಳಲ್ಲಿ ಯುವ ಸಂಘಟನೆಯ ಸದಸ್ಯರಿಂದ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮ, ಕೇಕ್ ವಿತರಣೆ ಕೂಡ ನಡೆಯಿತು. ಬಲಿಪೂಜೆಯ ಬಳಿಕ ಪರಸ್ಪರ ಹೊಸ ವರ್ಷದ ಶುಭಾಶಯ ವಿನಿಮಯ ಮಾಡಿಕೊಳ್ಳಲಾಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News