Udupi | ಸೈಬರ್ ಜಾಗೃತಿ ಸೈಕಲ್ ಜಾಥಾ ಅಭಿಯಾನ
ಉಡುಪಿ : ಸೈಬರ್ ಅಪರಾಧಗಳ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಉಡುಪಿ ಜಿಲ್ಲಾ ಪೊಲೀಸ್ ವತಿಯಿಂದ ಇಂದು ಸೈಬರ್ ಜಾಗೃತಿ ಸೈಕಲ್ ಜಾಥಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿತ್ತು.
ಮಣಿಪಾಲದ ಟೈಗರ್ ಸರ್ಕಲ್‌ನಲ್ಲಿ ನಡೆದ ಕಾರ್ಯಕ್ರಮಕ್ಕೆ ಉಡುಪಿ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ನಾಯಕ್ ಧ್ವಜಾರೋಹಣ ಮಾಡುವ ಮೂಲಕ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಸೈಬರ್ ಅಪರಾಧಗಳ ಬಗ್ಗೆ ಸಾರ್ವಜನಿಕರು ಹೆಚ್ಚಿನ ಜಾಗೃತೆ ವಹಿಸಬೇಕು. ಅಪರಿಚಿತ ವ್ಯಕ್ತಿಗಳಿಗೆ ಓಟಿಪಿ, ಪಾಸ್‌ವರ್ಡ್, ಪಿನ್ ಹಾಗೂ ಯಾವುದೇ ರೀತಿಯ ರಹಸ್ಯ ಕೋಡ್‌ಗಳನ್ನು ಹಂಚಿಕೊಳ್ಳಬಾರದು. ಸೈಬರ್ ವಂಚನೆಗೆ ಒಳಗಾಗದಂತೆ ಎಚ್ಚರಿಕೆ ವಹಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ತಿಳಿಸಿದರು.
ನಂತರ ಟೈಗರ್ ಸರ್ಕಲ್‌ನಿಂದ ಕಡಿಯಾಳಿ ಮೂಲಕ ಉಡುಪಿಯ ಬೋರ್ಡ್ ಹೈಸ್ಕೂಲ್ ವರೆಗೆ ಸೈಕಲ್ ಜಾಥಾ ನಡೆಸುವ ಮೂಲಕ ಸಾರ್ವಜನಿಕರಲ್ಲಿ ಸೈಬರ್ ಅಪರಾಧಗಳ ಬಗ್ಗೆ ಜಾಗೃತಿ ಮೂಡಿಸಲಾಯಿತು.
ಕಾರ್ಯಕ್ರಮದಲ್ಲಿ ಮಣಿಪಾಲ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಮಹೇಶ್ ಪ್ರಸಾದ್, ಸೈಬರ್ ಅಪರಾಧ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ನೀಲೇಶ್ ಜಿ.ಚವ್ಹಾಣ್, ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ರಾಘವೇಂದ್ರ ಹಾಗೂ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳ ಪೊಲೀಸ್ ಉಪ ನಿರೀಕ್ಷಕರು ಮತ್ತು ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸೈಬರ್ ಅಪರಾಧಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು ಹಾಗೂ ಸುರಕ್ಷಿತ ಡಿಜಿಟಲ್ ವ್ಯವಹಾರಗಳ ಕುರಿತು ಜಾಗೃತಿ ಮೂಡಿಸುವ ಉದ್ದೇಶದಿಂದ ಈ ಸೈಕಲ್ ಜಾಥಾ ಅಭಿಯಾನವನ್ನು ನಡೆಸಲಾಯಿತು.