ಉಡುಪಿ ಸಂಪೂರ್ಣ ಸಾಕ್ಷರತಾ ಜಿಲ್ಲೆಯಾಗಿ ಘೋಷಣೆ
ಕರ್ನಾಟಕ ಕಡಲ ಜೈವಿಕ ತಂತ್ರಜ್ಞಾನ ನೀತಿಗೆ ಅನುಮೋದನೆ: ಸಚಿವ ರಿಜ್ವಾನ್
ಉಡುಪಿ: ಕಡಲು ನಮ್ಮ ನಿಜವಾದ ಮತ್ತು ಅತಿದೊಡ್ಡ ಸಂಪತ್ತು. ಇದರ ಸದ್ಬಳಕೆಗಾಗಿ ಕರ್ನಾಟಕ ಕಡಲ ಜೈವಿಕ ತಂತ್ರಜ್ಞಾನ ನೀತಿಗೆ ಸರಕಾರ ಅನುಮೋದನೆ ನೀಡಿದೆ ಎಂದು ರಾಜ್ಯ ಆಹಾರ, ನಾಗರಿಕ ಸರಬರಾಜು ಇಲಾಖೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್ ಹೇಳಿದ್ದಾರೆ.
ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾದ ಜಿಲ್ಲಾ ಮಟ್ಟದ ಕರ್ನಾಟಕ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶ ನೀಡಿ ಅವರು ಮಾತನಾಡುತಿದ್ದರು.
ಈ ನೀತಿಯ ಅಡಿಯಲ್ಲಿ ಸರಕಾರಿ ಮೀನುಗಾರಿಕಾ ಕಾಲೇಜಿನಲ್ಲಿ ಕರ್ನಾಟಕ ಮರೈನ್ ಟೆಕ್ನಾಲಜಿ ಮತ್ತು ಬ್ಲೂ ಎಕಾನಮಿ ಸಂಸ್ಥೆಯನ್ನು ಸ್ಥಾಪಸಲು ಕ್ರಮಕೈಗೊಳ್ಳಲಾಗಿದೆ. ಅಲ್ಲದೇ ಮೀನುಗಾರಿಕಾ ಕಾಲೇಜಿನ ವಿದ್ಯಾರ್ಥಿಗಳ ಸಂಖ್ಯೆಯನ್ನು 60ರಿಂದ 200ಕ್ಕೆ ಏರಿಸಲು ನಿರ್ಧರಿಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಸಚಿವರು ಶೇ.95.53 ಸಾಕ್ಷರತಾ ಪ್ರಮಾಣದೊಂದಿಗೆ ಉಡುಪಿ ಜಿಲ್ಲೆಯನ್ನು ರಾಜ್ಯದ ಮೊದಲ ಸಂಪೂರ್ಣ ಸಾಕ್ಷರತಾ ಜಿಲ್ಲೆಯಾಗಿ ಘೋಷಿಸಿದರು.
ಕಾರ್ಯಕ್ರಮದಲ್ಲಿ ಶಾಸಕ ಯಶಪಾಲ್ ಸುವರ್ಣ, ವಿವಿಧ ಮಂಡಳಿಗಳ ಅಧ್ಯಕ್ಷರಾದ ಎಂ.ಎ.ಗಫೂರ್, ಮಂಜುನಾಥ ಪೂಜಾರಿ ಮುದ್ರಾಡಿ, ದಿನಕರ ಹೇರೂರು, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ನ ಮುಖ್ಯ ಕಾರ್ಯನಿರ್ವಾಹಣ ಅಧಿಕಾರಿಗಳು ಉಪಸ್ಥಿತರಿದ್ದರು.