ಉಡುಪಿ | ಡಿ.3ರಂದು ಜಿಲ್ಲಾ ಮಟ್ಟದ ವಿಕಲಚೇತನರ ದಿನಾಚರಣೆ : ಅಭೀದ್ ಗದ್ಯಾಳ್
ಉಡುಪಿ, ನ.18:ವಿಕಲಚೇತನರ ದಿನಾಚರಣೆಯನ್ನು ಜಿಲ್ಲಾಮಟ್ಟದಲ್ಲಿ ಮುಂದಿನ ಡಿಸೆಂಬರ್ 3ರಂದು ಆಚರಿಸಲಾಗುತ್ತಿದ್ದು, ಕಾರ್ಯಕ್ರಮವನ್ನು ಅರ್ಥ ಪೂರ್ಣವಾಗಿ, ವ್ಯವಸ್ಥಿತ ರೀತಿಯಲ್ಲಿ ಆಚರಿಸಲು ಅಗತ್ಯವಿರುವ ಸಿದ್ಧತೆ ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಮಣಿಪಾಲದ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ವೀಡಿಯೋ ಕಾನ್ಫರೆನ್ಸ್ ಕೊಠಡಿಯಲ್ಲಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು.
ಜಿಲ್ಲಾಮಟ್ಟದಲ್ಲಿ ಡಿ.3ರಂದು ಬೆಳಗ್ಗೆ 10:30ಕ್ಕೆ ನಗರದ ಪುರಭವನದಲ್ಲಿ ಪ್ರಸಕ್ತ ಸಾಲಿನ ವಿಶ್ವ ವಿಕಲಚೇತನರ ದಿನಾಚರಣೆಯನ್ನು ಆಚರಿಸಲಾಗುವುದು. ಇದರೊಂದಿಗೆ ವಿಶೇಷ ಶಾಲಾ ಮಕ್ಕಳು ಸಿದ್ಧಪಡಿಸಿರುವ ಕರಕುಶಲ ವಸ್ತುಗಳ ಪ್ರದರ್ಶನ ನಡೆಯಲಿದೆ ಎಂದ ಅವರು, ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿಶೇಷ ಮಕ್ಕಳನ್ನು ಹಾಗೂ ವಿಕಲಚೇತನರನ್ನು ಕರೆತರುವಲ್ಲಿ ಸ್ವಯಂಸೇವಾ ಸಂಸ್ಥೆಗಳ ಮುಖ್ಯಸ್ಥರು ವಿಶೇಷ ಕ್ರಮಕೈಗೊಳ್ಳಬೇಕು ಎಂದರು.
ನಗರ ಹಾಗೂ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರಿಗೆ ಹಾಗೂ ಇತರೆ ವಿಕಲಚೇತನರಿಗೆ ತಾಲೂಕು ಮಟ್ಟದಲ್ಲಿ ಕ್ರೀಡಾಕೂಟ ಆಯೋಜಿಸುವುದರೊಂದಿಗೆ ವಿಜೇತರಿಗೆ ಜಿಲ್ಲಾ ಮಟ್ಟದ ವಿಶ್ವ ವಿಕಲಚೇತನರ ದಿನಾಚರಣೆ ಸಂದರ್ಭದಲ್ಲಿ ಬಹುಮಾನ ವಿತರಿಸಬೇಕು. ಪ್ರತೀ ತಾಲೂಕಿನಿಂದ ಒಂದು ತಂಡ ಸಾಂಸ್ಕೃತಿಕ ಪ್ರದರ್ಶನ ನೀಡುವಂತೆ ನೋಡಿಕೊಳ್ಳಬೇಕು ಎಂದರು.
ಅಂದು ಆರೋಗ್ಯ ಇಲಾಖೆ ವತಿಯಿಂದ ಆರೋಗ್ಯ ತಪಾಸಣಾ ಶಿಬಿರ ಆಯೋಜಿಸಬೇಕು ಎಂದ ಗದ್ಯಾಳ್ ಅವರು, ಇದೇ ಸಂದರ್ಭದಲ್ಲಿ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ವಿಶೇಷ ಮಕ್ಕಳನ್ನು ಹಾಗೂ ವ್ಯಕ್ತಿಗಳನ್ನು ಗೌರವಿಸಿ ಸನ್ಮಾನಿಸಲಾಗುವುದು ಎಂದರು.
ನ.25ರಿಂದ ಡಿ.1ರವರೆಗೆ 21 ಬಗೆಯ ಅಂಗವಿಕಲತೆಯ ಬಗ್ಗೆ ಅರಿವು ಮೂಡಿಸಲು ಜಿಲ್ಲಾ ಡಿಡಿಆರ್ಸಿ ಕೇಂದ್ರ, ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಯಂಸೇವಾ ಸಂಸ್ಥೆ ಹಾಗೂ ಎಂ.ಆರ್. ಡಬ್ಲ್ಯೂ ಸಹಯೋಗದೊಂದಿಗೆ ವಿಕಲಚೇತನರ ಸಪ್ತಾಹವನ್ನು ಆಚರಿಸಲಾಗುವುದು. ಈ ವೇಳೆ ವಿಶೇಷಚೇತನರಿಗೆ ಸರಕಾರದಿಂದ ಸಿಗುವ ಸೌಲಭ್ಯಗಳ ಕುರಿತು ಹೆಚ್ಚಿನ ಅರಿವು ಮೂಡಿಸಬೇಕು ಎಂದು ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನಾ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಶ್ಯಾಮಲಾ ಸಿ.ಕೆ., ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ ಸೆಟ್ಟಿ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮಾಧಿಕಾರಿ ಡಾ.ಲತಾ ನಾಯಕ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ, ವಿಕಲಚೇತನರ ಸ್ವಯಂಸೇವಾ ಸಂಸ್ಥೆಗಳ ಹಾಗೂ ಪುನರ್ವಸತಿ ಕೇಂದ್ರಗಳ ಮುಖ್ಯಸ್ಥರು ಉಪಸ್ಥಿತರಿದ್ದರು.