×
Ad

ಉಡುಪಿ ಜಿಲ್ಲಾ ರಾಜ್ಯ ಸರಕಾರಿ ನೌಕರರ ಕ್ರೀಡಾಕೂಟ ಉದ್ಘಾಟನೆ

Update: 2026-01-19 21:02 IST

ಉಡುಪಿ, ಜ.19: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಜಿಲ್ಲಾ ಶಾಖೆ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಎರಡು ದಿನಗಳ ರಾಜ್ಯ ಸರಕಾರಿ ನೌಕರರ ಉಡುಪಿ ಜಿಲ್ಲಾ ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ಇಂದು ನಗರದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಂಡಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಉಡುಪಿ ಶಾಸಕ ಯಶಪಾಲ್ ಸುವರ್ಣ, ಸರಕಾರಿ ನೌಕರರು ಸಮಯದ ಚೌಕಟ್ಟಿನಲ್ಲಿ ದುಡಿಯುವ ಸಂದರ್ಭದಲ್ಲಿ ಹೆಚ್ಚಿನ ಒತ್ತಡವನ್ನು ಅನುಭವಿಸುತಿದ್ದು, ದೈಹಿಕ ಹಾಗೂ ಮಾನಸಿಕ ಒತ್ತಡವನ್ನು ಪರಿಣಾಮಕಾರಿಯಾಗಿ ನಿಭಾಯಿಸಲು ನಿಯಮಿತವಾದ ವ್ಯಾಯಾಮ ಹಾಗೂ ಕ್ರೀಡಾ ಚಟುವಟಿಕೆಗಳು ಸಹಕಾರಿಯಾಗುತ್ತವೆ ಎಂದರು.

ಕೆಲಸ-ಕಾರ್ಯಗಳಲ್ಲಿ ಸಹಜ ಒತ್ತಡವಿದ್ದಾಗ ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯದಲ್ಲಿ ಏರುಪೇರಾಗುತ್ತದೆ. ಆಗಾಗ ಕ್ರೀಡೆ ಅಥವಾ ಸಾಂಸ್ಕೃತಿಕ ಚಟುವಟಿಕೆಗಳಿಂದ ಮನಸ್ಸು ಚೇತೋಹಾರಿಯಾಗಿರುತ್ತದೆ. ಸರಕಾರಿ ನೌಕರರ ಸಂಘ ಸದಸ್ಯರ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು. ಇದಕ್ಕಾಗಿ ಆಗಾಗ ಇಂಥ ಕಾರ್ಯಕ್ರಮಗಳನ್ನು ಆಯೋಜಿಸಬೇಕು ಎಂದರು.

ಕರಾವಳಿ ಅಭಿವೃದ್ದಿ ಮಂಡಳಿಯ ಅಧ್ಯಕ್ಷ ಎಂ.ಎ.ಗಫೂರ್ ಮಾತನಾಡಿ, ಜಿಲ್ಲೆಯಲ್ಲಿ ಸುಮಾರು ನಾಲ್ಕು ಸಾವಿರಕ್ಕೂ ಅಧಿಕ ಸರಕಾರಿ ನೌಕರರು ದುಡಿಯುತಿದ್ದಾರೆ. ಇವರು ತಮ್ಮ ದಿನನಿತ್ಯದ ಜಂಜಾಟಗಳ ಮಧ್ಯೆಯೂ ಆಟೋಟ ಗಳಲ್ಲಿ ತೊಡಗಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು. ಕ್ರೀಡೆ ಮೂಲಕ ಸಮಾಜವನ್ನು ಕಟ್ಟುವ ಕೆಲಸ ಮಾಡಬೇಕು ಎಂದರು.

ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ ಮಾತನಾಡಿ, ಸರಕಾರಿ ಕಚೇರಿ ಗಳಲ್ಲಿ ಸಿಬ್ಬಂದಿ ಕೊರತೆ ಇದ್ದರೂ ಸರಕಾರಿ ನೌಕರರು ನೂರು ಪ್ರತಿಶತದಷ್ಟು ಕಾರ್ಯದಕ್ಷತೆಯಿಂದ ಕರ್ತವ್ಯ ನಿರ್ವಹಿಸುತ್ತಾರೆ. ಈ ಸಂದರ್ಭದಲ್ಲಿ ಒತ್ತಡಕ್ಕೊಳ ಗಾಗುವುದು ಸಹಜ. ಒತ್ತಡವನ್ನು ನಿಭಾಯಿಸಲು ಕಡ್ಡಾಯವಾಗಿ ದಿನನಿತ್ಯ ಒಂದು ಗಂಟೆ ಕ್ರೀಡೆ ಅಥವಾ ವ್ಯಾಯಾಮ ದಲ್ಲಿ ತೊಡಗಿಸಿಕೊಳ್ಳಬೇಕು. ಇದರಿಂದ ದೇಹದ ಆರೋಗ್ಯದ ಜೊತೆಗೆ ಮಾನಸಿಕವಾಗಿಯೂ ಸದೃಢರಾಗಿರಲು ಸಾಧ್ಯ ಎಂದರು.

ಸಂಘದ ಕ್ರೀಡಾ ಕಾರ್ಯದರ್ಶಿ ದಿನಕರ್ ನಾಯ್ಕ್ ಹಾಗೂ ದೀಪಾ ಕ್ರೀಡಾ ಪ್ರತಿಜ್ಷಾ ವಿಧಿ ಬೋಧಿಸಿದರು.

ಕಾರ್ಯಕ್ರಮದಲ್ಲಿ ಸರಕಾರಿ ನೌಕರರ ಸಂಘದ ರಾಜ್ಯ ಪರಿಷತ್ ಸದಸ್ಯ ಆನಂದ ಜತ್ತಣ್ಣ, ಜಿಲ್ಲಾ ಖಜಾಂಜಿ ದಯಾನಂದ ಬೆನ್ನೂರು, ಪ್ರಧಾನ ಕಾರ್ಯದರ್ಶಿ ರಾಜೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ದಿನಕರ ಶೆಟ್ಟಿ ಅಂಪಾರು ಸ್ವಾಗತಿಸಿ, ಸತೀಶ್ಚಂದ್ರ ಶೆಟ್ಟಿ ಚಿತ್ರಪಾಡಿ ಹಾಗೂ ಎಳ್ಳಂಪಳ್ಳಿ ಸಂತೋಷ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News