ಉಡುಪಿ: ಬಾಳೆ ಮುಹೂರ್ತ- ಬಾಳೆ ಮೇಳಕ್ಕೆ ಭರದ ಸಿದ್ಧತೆ
ಉಡುಪಿ, ನ.27: ಸೋದೆ ಶ್ರೀವಾದಿರಾಜ ಮಠದ 2028ರ ಪರ್ಯಾಯದ ಅಂಗವಾಗಿ ಬಾಳೆ ಮುಹೂರ್ತದೊಂದಿಗೆ ನ.29ರಿಂದ ಡಿ.1ರವರೆಗೆ ಉಡುಪಿಯ ಶ್ರೀಕೃಷ್ಣ ಮಠದ ಪಾರ್ಕಿಂಗ್ ಪ್ರದೇಶದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ ರಾಷ್ಟ್ರಮಟ್ಟದ ಕದಳೀ ವಿಶ್ವದರ್ಶನ’ ಬಾಳೆ ಮೇಳದ ಪೂರ್ವಭಾವಿ ಸಮನ್ವಯ ಸಭೆ ಸೋದೆ ವಾದಿರಾಜ ಮಠದಲ್ಲಿ ಜರಗಿತು.
ಸೋದೆ ಶ್ರೀವಿಶ್ವವಲ್ಲಭ ತೀರ್ಥ ಸ್ವಾಮೀಜಿ ಅಧ್ಯಕ್ಷತೆಯಲ್ಲಿ ಹಾಗೂ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಉಪಸ್ಥಿತಿ ಯಲ್ಲಿ ಜಿಲ್ಲಾಡಳಿತ ಮತ್ತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅಗತ್ಯವಿರುವ ಸ್ವಚ್ಛತಾ ವ್ಯವಸ್ಥೆ, ಸುಗಮ ಸಂಚಾರ ನಿರ್ವಹಣೆ, ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ಆರೋಗ್ಯ ಸೇವೆ, ಅಗ್ನಿಶಾಮಕ ಸುರಕ್ಷತೆ ಸೇರಿದಂತೆ ವಿವಿಧ ಮೂಲಸೌಕರ್ಯ ಹಾಗೂ ಸಾರ್ವಜನಿಕ ಸೌಲಭ್ಯಗಳ ಕುರಿತು ಸವಿಸ್ತಾರವಾಗಿ ಚರ್ಚಿಸಲಾಯಿತು.
ಮೇಳಕ್ಕೆ ಆಗಮಿಸುವ ಸಾರ್ವಜನಿಕರು, ರೈತರು, ಉದ್ಯಮಿಗಳು ಹಾಗೂ ಸಂದರ್ಶಕರಿಗೆ ಯಾವುದೇ ತೊಂದರೆ ಯಾಗದಂತೆ ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡು, ವಿವಿಧ ಇಲಾಖೆಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
ಸಭೆಯಲ್ಲಿ ಉಡುಪಿ ಅಪರ ಜಿಲ್ಲಾಧಿಕಾರಿ ಅಬೀದ್ ಗದ್ಯಾಳ, ನಗರಸಭೆ ಪೌರಾಯುಕ್ತ ಮಹಾಂತೇಶ್ ಹಂಗರಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಸವರಾಜ ಜಿ.ಹುಬ್ಬಳ್ಳಿ, ತೋಟಗಾರಿಕಾ ಇಲಾಖೆಯ ಜಂಟಿ ನಿರ್ದೇಶಕಿ ಕ್ಷಮಾ ಪಾಟೀಲ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ವಿನಾಯಕ ಉ. ಕಲ್ಗುಟಕರ್, ಉಡುಪಿ ನಗರ ಠಾಣೆಯ ಉಪನಿರೀಕ್ಷಕ ಭರತೇಶ್ ಕಂಕಣವಾಡಿ ಹಾಗೂ ಸಂಚಾರ ಠಾಣೆಯ ಉಪನಿರೀಕ್ಷಕ ಮಹೇಶ್ ಟಿ., ಮಾಜಿ ಶಾಸಕ ಕೆ.ರಘುಪತಿ ಭಟ್, ಕಾಂಗ್ರೆಸ್ ಮುಖಂಡ ಪ್ರಸಾದ್ ರಾಜ್ ಕಾಂಚನ್, ಉಡುಪಿ ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಹಾಗೂ ಮಾಜಿ ನಗರಸಭಾ ಸದಸ್ಯ ಗಿರೀಶ್ ಅಂಚನ್ ಉಪಸ್ಥಿತರಿದ್ದರು.