×
Ad

ಉಡುಪಿ| ಬಾಲಕಿಯ ಅತ್ಯಾಚಾರ ಪ್ರಕರಣ: ಪೋಕ್ಸೋ ಆರೋಪಿಗೆ 20 ವರ್ಷ ಜೈಲುಶಿಕ್ಷೆ

Update: 2025-07-30 20:12 IST

ಉಡುಪಿ: ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಗರ್ಭಿಣಿಯನ್ನಾಗಿಸಿದ ಪ್ರಕರಣದ ಆರೋಪಿಗೆ ಉಡುಪಿ ಹೆಚ್ಚುವರಿ ಜಿಲ್ಲಾ ಪೋಕ್ಸೋ ನ್ಯಾಯಾಲಯ 20ವರ್ಷಗಳ ಕಠಿಣ ಶಿಕ್ಷೆ ವಿಧಿಸಿ ಆದೇಶ ನೀಡಿದೆ.

ಬೈಂದೂರು ತಾಲೂಕಿನ ರಾಘವೇಂದ್ರ(35) ಶಿಕ್ಷೆಗೆ ಗುರಿಯಾಗಿರುವ ಆರೋಪಿ. 15 ವರ್ಷ ಪ್ರಾಯದ ಅಪ್ರಾಪ್ತ ಬಾಲಕಿಯ ಸಂಬಂಧಿಯಾಗಿರುವ ಆರೋಪಿ, ಆಕೆಯನ್ನು ಮನೆ ಸಮೀಪದ ಹಾಡಿಗೆ ಕರೆದೊಯ್ದು ಆಕೆಯ ಇಚ್ಛೆಗೆ ವಿರುದ್ಧವಾಗಿ ಬಲತ್ಕಾರ ಮಾಡಿದ್ದನು. ಈ ವಿಷಯ ತಂದೆ ತಾಯಿಗೆ ತಿಳಿಸಿದಲ್ಲಿ ಜೀವಕ್ಕೆ ತೊಂದರೆ ಮಾಡುವುದಾಗಿ ಬೆದರಿಕೆಯೊಡ್ಡಿ ನಿರಂತರ ದೌರ್ಜನ್ಯ ಎಸಗುತ್ತಿದ್ದನು.

2024ರ ಆಗಸ್ಟ್ ತಿಂಗಳಲ್ಲಿ ನೊಂದ ಬಾಲಕಿಗೆ ಆರೋಗ್ಯದಲ್ಲಿ ಏರುಪೇರು ಆಗಿ ಆಸ್ಪತ್ರೆಗೆ ಕರೆದು ಕೊಂಡು ಹೋದಾಗ ಬಾಲಕಿ ಗರ್ಭಿಣಿಯಾಗಿರುವುದು ತಿಳಿದು ಬಂತು. ಆ ಮೂಲಕ ಪ್ರಕರಣ ಬೆಳಕಿಗೆ ಬಂತು. ಅದರಂತೆ ಪ್ರಕರಣ ದಾಖಲಿಸಿ ತನಿಖೆ ನಡೆಸಿದ ಆಗಿನ ಬೈಂದೂರು ವೃತ್ತ ನಿರೀಕ್ಷಕ ಸವಿತ್ರತೇಜ್ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು,

ನ್ಯಾಯಾಲಯವು ಒಟ್ಟು 27 ಸಾಕ್ಷಿಗಳ ಪೈಕಿ 12 ಸಾಕ್ಷಿಗಳ ವಿಚಾರಣೆ ನಡೆಸಿದ್ದು, ಮುಖ್ಯವಾಗಿ ನೊಂದ ಬಾಲಕಿಯ ಸಾಕ್ಷ್ಯ ಮತ್ತು ಡಿಎನ್‌ಎ ವರದಿ ಆಧರಿಸಿ ಆರೋಪಿ ತಪ್ಪಿತಸ್ಥ ಎಂದು ಮನಗಂಡು ನ್ಯಾಯಾಧೀಶ ಶ್ರೀನಿವಾಸ ಸುವರ್ಣ ಆರೋಪಿಗೆ 20 ವರ್ಷಗಳ ಕಾಲ ಕಠಿಣ ಜೈಲುಶಿಕ್ಷೆ ಮತ್ತು 25,000 ರೂ. ದಂಡ ಮತ್ತು ಸರಕಾರದ ಪರವಾಗಿ ನೊಂದ ಬಾಲಕಿಗೆ 3ಲಕ್ಷ ರೂ. ಪರಿಹಾರ ನೀಡುವಂತೆ ಆದೇಶ ನೀಡಿದರು. ಸರಕಾರದ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ವೈ.ಟಿ.ರಾಘವೇಂದ್ರ ವಾದ ಮಂಡಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News