×
Ad

ಉಡುಪಿ | ಸಫಾಯಿ ಕರ್ಮಚಾರಿಗಳಿಗೆ ಪುನರ್ವಸತಿ ಯೋಜನೆ ಕಲ್ಪಿಸಿ: ಡಿಸಿ

Update: 2025-12-12 20:02 IST

ಉಡುಪಿ, ಡಿ.12: ಸಫಾಯಿ ಕರ್ಮಚಾರಿಗಳು, ಗುರುತಿಸಲ್ಪಟ್ಟ ಮಾನ್ಯುಯಲ್ ಸ್ಕ್ಯಾವೆಂಜರ್ ಗಳು ಹಾಗೂ ಮೃತಪಟ್ಟ ಮಾನ್ಯುಯಲ್ ಸ್ಕ್ಯಾವೆಂಜರ್ ಗಳ ಕುಟುಂಬದ ಅವಲಂಬಿತರಿಗೆ ಗುರುತಿನ ಚೀಟಿ ನೀಡುವ ಜೊತೆಗೆ ಪುನರ್ವಸತಿ ಯೋಜನೆಗಳೊಂದಿಗೆ ಸರಕಾರದ ವಿವಿಧ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಅಧಿಕಾರಿಗಳಿಗೆ ಸೂಚನೆಗಳನ್ನು ನೀಡಿದ್ದಾರೆ.

ಶುಕ್ರವಾರ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣ ದಲ್ಲಿ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿಯ ನಾಲ್ಕನೇ ತ್ರೈಮಾಸಿಕ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ನಗರ ಹಾಗೂ ಗ್ರಾಮೀಣ ಪ್ರದೇಶಗಳ ಸ್ಥಳೀಯ ಸಂಸ್ಥೆಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ ಅವರ ತಿಂಗಳ ವೇತನ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ವಿಳಂಬಲ್ಲದೇ ಪ್ರತಿ ತಿಂಗಳು ಪಾವತಿಸಬೇಕು ಎಂದು ಅವರು ನಿರ್ದೇಶನ ನೀಡಿದರು.

ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೌರ ಕಾರ್ಮಿಕರು, ಲೋಡರ್, ಕ್ಲೀನರ್ಸ್ ಹಾಗೂ ವಾಹನ ಚಾಲಕರಿಗೆ ಪ್ರತಿ ತಿಂಗಳ ವೇತನವನ್ನು ಕಾಲಕಾಲಕ್ಕೆ ಸರಿಯಾಗಿ ಪಾವತಿಸಬೇಕು. ಹಾಗೂ ಅವರ ಪಿ.ಎಫ್ ಹಾಗೂ ಇ.ಎಸ್.ಐ ಕಟಾವಣೆ ಆಗುತ್ತಿರುವ ಬಗ್ಗೆ ಖಾತ್ರಿ ಪಡಿಸಿಕೊಂಡು ಹೊರ ಗುತ್ತಿಗೆದಾರರಿಗೆ ಮಾಸಿಕ ಬಿಲ್ ಗಳನ್ನು ಪಾವತಿಸಬೇಕು ಎಂದು ಸೂಚಿಸಿದರು.

ಮಾನ್ಯುಯಲ್ ಸ್ಕ್ಯಾವೆಂಜರ್ಸ್ ಪದ್ಧತಿಗೆ ಈಗಾಗಲೇ ದೇಶಾದ್ಯಂತ ನಿಷೇಧ ವಿಧಿಸಲಾಗಿದೆ. ನಗರ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಮಾನ್ಯುಯಲ್ ಸ್ಕ್ಯಾವೆಂಜರ್ ಗಳನ್ನು ನೇಮಿಸಿಕೊಂಡು ಅವರಿಂದ ಕೆಲಸ ಮಾಡಿಸಿಕೊಂಡಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದರು.

ಮಾನ್ಯುಯಲ್ ಸ್ಕ್ಯಾವೆಂಜರ್ ವೃತ್ತಿ ನಿಷೇಧದ ಹಿನ್ನೆಲೆಯಲ್ಲಿ ನಗರ ಹಾಗೂ ಗ್ರಾಮೀಣ ಪ್ರದೇಶ ವ್ಯಾಪ್ತಿಗಳಲ್ಲಿ ಕಡ್ಡಾಯವಾಗಿ ಸಕ್ಕಿಂಗ್ ಹಾಗೂ ಜೆಟ್ಟಿಂಗ್ ಯಂತ್ರಗಳ ಬಳಕೆಯೊಂದಿಗೆ ಸ್ವಚ್ಛತಾ ಕಾರ್ಯಗಳನ್ನು ಕೈಗೊಳ್ಳಬೇಕು. ಮಲತ್ಯಾಜ್ಯ ನಿರ್ವಹಣೆಯನ್ನು ವೈಜ್ಞಾನಿಕ ರೀತಿಯಲ್ಲಿ ಎಫ್ಎಸ್ಎಂಎಸ್ ಘಟಕಗಳಲ್ಲಿ ವಿಲೇವಾರಿ ಮಾಡಬೇಕು. ಇವುಗಳೊಂದಿಗೆ ಜಿಲ್ಲೆಯಲ್ಲಿ ಕೈಗೊಂಡಿರುವ ಎಫ್ಎಸ್ಎಂಎಸ್ ಘಟಕ ಯೋಜನೆಗಳ ಕಾಮಗಾರಿಗಳನ್ನು ಪೂರ್ಣಗೊಳಿಸಿ ಅವುಗಳ ಬಳಕೆಗೆ ಸ್ಥಳೀಯ ಸಂಸ್ಥೆಗಳು ಕ್ರಮವಹಿಸಬೇಕು ಎಂದರು.

ಗುಣಮಟ್ಟದ ಆಹಾರ :

ಪೌರ ಕಾರ್ಮಿಕರಿಗೆ ಉತ್ತಮ ಗುಣಮಟ್ಟದ ಆಹಾರವನ್ನು ಒದಗಿಸಬೇಕು ಎಂದ ಜಿಲ್ಲಾಧಿಕಾರಿ, ದೈನಂದಿನ ಸ್ವಚ್ಛತಾ ಕಾರ್ಯದ ಕರ್ತವ್ಯ ನಿರ್ವಹಿಸುವಾಗ ಸುರಕ್ಷತಾ ಪರಿಕರಗಳನ್ನು ತಪ್ಪದೇ ಬಳಸಿ ಕರ್ತವ್ಯವನ್ನು ನಿರ್ವಹಿಸಬೇಕು. ಇದರಿಂದ ಉತ್ತಮ ಆರೋಗ್ಯವನ್ನು ಹೊಂದಲು ಸಾಧ್ಯವಿದೆ. ಇದರ ಮೇಲುಸ್ತುವಾರಿಯನ್ನು ಅಧಿಕಾರಿಗಳು ನೋಡಿಕೊಳ್ಳಬೇಕು ಎಂದರು.

ಸಫಾಯಿ ಕರ್ಮಚಾರಿಗಳಿಗೆ ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ತಪಾಸಣೆ ಹಾಗೂ ಮಾಸ್ಟರ್ ಹೆಲ್ತ್ ಚೆಕ್ಅಪ್ ನ ಆಗಾಗ್ಗೆ ಮಾಡಿಸಬೇಕು. ಅಗತ್ಯವಿದ್ದಲ್ಲಿ ಉನ್ನತ ಚಿಕಿತ್ಸೆಯನ್ನು ಸಹ ಕೊಡಿಸಬೇಕು ಎಂದ ಸ್ವರೂಪ ಟಿ.ಕೆ., ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಅಧೀನದಲ್ಲಿ ಕಾರ್ಯ ನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಮಾನ್ಯುಯಲ್ ಸ್ಕ್ಯಾವೆಂಜರ್ ಹಾಗೂ ಪೌರ ಕಾರ್ಮಿಕರ ಮಕ್ಕಳಿಗೆ ಶೇ.5ರಷ್ಟು ಪ್ರವೇಶ ಕಲ್ಪಿಸಲು ಮುಂದಾಗಬೇಕು ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎಸ್.ಎಸ್.ಕಾದ್ರೋಳ್ಳಿ, ಸಹಾಯಕ ಕಮಿಷನರ್ ರಶ್ಮಿ ಎಸ್.ಆರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ನಾರಾಯಣ ಸ್ವಾಮಿ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುಬ್ರಹ್ಮಣ್ಯ ಮತ್ತಿತರರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News