ಉಡುಪಿ| ಶಾಲಾ ಬಾಲಕ ಮೃತ್ಯು ಪ್ರಕರಣ: 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕ ಸೆರೆ
ವಿಲಾಸ್ ಶಿಂಧೆ
ಉಡುಪಿ: 2002ರಲ್ಲಿ ಪಡುಬಿದ್ರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ರಸ್ತೆ ಅಪಘಾತ ಪ್ರಕರಣದಲ್ಲಿ ನ್ಯಾಯಾಲಯದಿಂದ ಶಿಕ್ಷೆಗೊಳಪಟ್ಟು ಕಳೆದ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಲಾರಿ ಚಾಲಕನನ್ನು ಉಡುಪಿ ಜಿಲ್ಲೆಯ ಪಡುಬಿದ್ರಿ ಪೊಲೀಸರು ಮಹಾರಾಷ್ಟ್ರದ ಪುಣೆಯಲ್ಲಿ ಬಂಧಿಸಿದ್ದಾರೆ.
ಮಹಾರಾಷ್ಟ್ರದ ಪುಣೆಯ ಬೋರ್ ಉತ್ರಳ್ಳಿ ನಿವಾಸಿ ವಿಲಾಸ್ ಶಿಂಧೆ ಬಂಧಿತ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ.
ಘಟನೆ ಹಿನ್ನೆಲೆ: 2002ರ ಸೆಪ್ಟೆಂಬರ್ 7ರಂದು ಬೆಳಗ್ಗೆ ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರಿ ಠಾಣಾ ವ್ಯಾಪ್ತಿಯ ಬಡಾ ಗ್ರಾಮದ ಮೂಳೂರು ಮಸೀದಿ ಬಳಿ ಮಂಗಳೂರಿನಿಂದ ಉಡುಪಿ ಕಡೆಗೆ ಅತೀ ವೇಗ ಹಾಗೂ ಅಜಾಗರೂಕತೆಯಿಂದ ಮಿನಿ ಗೂಡ್ಸ್ ಲಾರಿ ಚಲಾಯಿಸಿಕೊಂಡು ಬಂದಿದ್ದ ವಿಲಾಸ್ ಶಿಂಧೆ, ರಸ್ತೆ ಬದಿಯಲ್ಲಿ ನಡೆದು ಹೋಗುತ್ತಿದ್ದ ಶಾಲಾ ಬಾಲಕನಿಗೆ ಡಿಕ್ಕಿ ಹೊಡೆದಿದ್ದ. ಅಪಘಾತದ ತೀವ್ರತೆಗೆ ಬಾಲಕ ಸ್ಥಳದಲ್ಲೇ ಮೃತಪಟ್ಟಿದ್ದ.
ಈ ಕುರಿತು ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ, ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಚಾಲಕನಿಗೆ 3 ತಿಂಗಳ ಜೈಲು ಶಿಕ್ಷೆ ಹಾಗೂ 1,000 ರೂ. ದಂಡ ವಿಧಿಸಿ ತೀರ್ಪು ನೀಡಿತ್ತು.
ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶಂಕರ್ ಅವರ ನಿರ್ದೇಶನದಂತೆ ವಿಶೇಷ ಕಾರ್ಯಾಚರಣೆ ನಡೆಸಿದ್ದು, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ ಎಸ್. ನಾಯಕ್, ಕಾರ್ಕಳ ಉಪ ವಿಭಾಗದ ಪೊಲೀಸ್ ಉಪಾಧೀಕ್ಷಕ ಎಸ್. ವಿಜಯಪ್ರಸಾದ್, ಕಾಪು ವೃತ್ತ ನಿರೀಕ್ಷಕ ಅಜ್ಮತ್ ಆಲಿ ಮಾರ್ಗದರ್ಶನದಂತೆ ಪಡುಬಿದ್ರಿ ಪೊಲೀಸ್ ಠಾಣಾ ಪಿಎಸ್‌ಐ ಸಕ್ತಿವೇಲು, ಅನಿಲ್‌ಕುಮಾರ್ ಟಿ. ನಾಯಕ್, ಸಿಬ್ಬಂದಿಗಳಾದ ರಾಜೇಶ್ ಪಿ, ಕೃಷ್ಣಪ್ರಸಾದ್, ಸಂದೇಶ್ ಭಂಡಾರಿ ಮೊದಲಾದವರು ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.
23 ವರ್ಷಗಳಿಂದ ಪುಣೆಯಲ್ಲಿ ಚಾಲಕನಾಗಿದ್ದ ಆರೋಪಿ
ನ್ಯಾಯಾಲಯ ತೀರ್ಪು ನೀಡಿದ ಬಳಿಕ ವಿಲಾಸ್ ಶಿಂಧೆ 23 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಮಾನ್ಯ ನ್ಯಾಯಾಲಯವು ಆತನ ವಿರುದ್ಧ ಎಲ್ಪಿಸಿ ವಾರಂಟ್ ಹೊರಡಿಸಿತ್ತು. ಆರೋಪಿ ಮಹಾರಾಷ್ಟ್ರದ ಪುಣೆಯಲ್ಲಿ ಲಾರಿ ಚಾಲಕನಾಗಿ ಕೆಲಸ ಮಾಡುತ್ತಿರುವ ಮಾಹಿತಿ ಪಡೆದ ಪೊಲೀಸರ ತಂಡ ಆರೋಪಿಯನ್ನು ಬಂಧಿಸಿ, ನ್ಯಾಯಾಲಯಕ್ಕೆ ಹಾಜರುಪಡಿಸಿದೆ.