×
Ad

ಉಡುಪಿ | ಗೃಹರಕ್ಷಕರ ಸಾಧನೆ ಇತರರಿಗೆ ಮಾದರಿಯಾಗಲಿ: ಎಎಸ್ಪಿ ಸುಧಾಕರ್ ನಾಯ್ಕ್

ಅಖಿಲ ಭಾರತ ಗೃಹರಕ್ಷಕ ದಿನಾಚರಣೆ

Update: 2025-12-06 22:25 IST

ಉಡುಪಿ, ಡಿ.6: ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗೃಹರಕ್ಷಕರು ಸಮಾಜಕ್ಕೆ ಅತ್ಯುತ್ತಮ ಸೇವೆ ನೀಡುತ್ತಿದ್ದು, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಪೊಲೀಸ್ ಇಲಾಖೆಯಲ್ಲಿಯೂ ಗೃಹರಕ್ಷಕರು ಪೊಲೀಸರಷ್ಟೇ ಸಮರ್ಥರಾಗಿ ಹಗಲು ರಾತ್ರಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸಮಾಜದ ವಿವಿಧ ಕ್ಷೇತ್ರಗಳಲ್ಲಿ ದುಡಿಯುವ ಜೊತೆಗೆ ವೈಯಕ್ತಿಕವಾಗಿಯೂ ಸಾಧನೆ ಮಾಡುತ್ತಿದ್ದಾರೆ. ಇವರ ಸಾಧನೆ ಇತರರಿಗೂ ಮಾದರಿಯಾಗಲಿ ಎಂದು ಉಡುಪಿ ಜಿಲ್ಲಾ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಸುಧಾಕರ್ ಎಸ್.ನಾಯ್ಕ್ ಹೇಳಿದ್ದಾರೆ.

ಶನಿವಾರ ಜಿಲ್ಲಾ ಗೃಹರಕ್ಷಕ ದಳ ಕಚೇರಿಯಲ್ಲಿ ನಡೆದ ಅಖಿಲ ಭಾರತ ಗೃಹರಕ್ಷಕ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಗೃಹರಕ್ಷಕರು ಪೊಲೀಸ್, ಎನ್ಸಿಸಿ, ಪ್ರವಾಸೋದ್ಯಮ, ಸಾರಿಗೆ, ಪುರಾತತ್ವ ಇಲಾಖೆ ಸೇರಿದಂತೆ ಇನ್ನಿತರ ಇಲಾಖೆಗಳಲ್ಲಿ ತಮ್ಮ ಸೇವೆ ನೀಡುವ ಜೊತೆಗೆ ಪ್ರಾಕೃತಿಕ ವಿಕೋಪ ಮತ್ತು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಸುರಕ್ಷತಾ ವ್ಯವಸ್ಥೆಯನ್ನೂ ನಿರ್ವಹಿಸುತ್ತಿರುತ್ತಾರೆ. ತಮ್ಮ ಕಾರ್ಯಕ್ಷೇತ್ರಗಳಲ್ಲಿ ದಕ್ಷತೆ ಮತ್ತು ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸುವ ಜೊತೆಗೆ ವೈಯಕ್ತಿಕವಾಗಿಯೂ ಸಾಧನೆ ಮಾಡಿ ಜಿಲ್ಲೆಗೆ ಕೀರ್ತಿ ತರುತ್ತಿದ್ದಾರೆ. ಇವರಿಂದ ಇತರರೂ ಪ್ರೇರಣೆ ಪಡೆದು ಸಾಧನೆ ಮಾಡಬೇಕು ಎಂದು ಅವರು ಹೇಳಿದರು.

ಆದರ್ಶ ಆಸ್ಪತ್ರೆ ಆಡಳಿತ ನಿರ್ದೇಶಕ ಡಾ.ಜಿ.ಎಸ್.ಚಂದ್ರಶೇಖರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಸ್ವಯಂಸೇವಕರಾಗಿ ವಿವಿಧ ಕ್ಷೇತ್ರಗಳಲ್ಲಿ ಸೇವೆ ನೀಡುತ್ತಿರುವ ಗೃಹರಕ್ಷಕರ ಕಾರ್ಯವೈಖರಿ ಶ್ಲಾಘನೀಯ. ಬಹುತೇಕ ಗ್ರಾಮೀಣ ಭಾಗಗಳಿಂದ ಬರುವ ಗೃಹರಕ್ಷಕರು ಸುರಕ್ಷಿತ ಸಮಾಜ ಕಟ್ಟುವಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತಿದ್ದಾರೆ. ಇಂದಿನ ಕಾಲಘಟ್ಟದಲ್ಲಿ ಸಮಾಜದಲ್ಲಿ ನಡೆಯುವ ಅಸಾಮಾಜಿಕ ಕೃತ್ಯಗಳನ್ನು ತಡೆಗಟ್ಟುವಲ್ಲೂ ಮಹತ್ವದ ಪಾತ್ರ ವಹಿಸುತ್ತಿರುವ ಗೃಹರಕ್ಷಕರು ಸಮಾಜದ ಲೋಪದೋಷಗಳನ್ನು ತಿದ್ದುವ ನಿಟ್ಟಿನಲ್ಲಿಯೂ ಕಾರ್ಯೋನ್ಮುಖರಾಗಬೇಕು ಎಂದರು.

ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗೃಹರಕ್ಷಕರಾದ ಶಶಿಕಿರಣ್, ಅನಿಲ್ ಥೋಮಸ್, ಜಯಂತಿ, ಸಂಧ್ಯಾ, ಲತಾ ಮತ್ತು ದಿನೇಶ್ ಇವರನ್ನು ಸನ್ಮಾನಿಸಲಾಯಿತು.

ಉಡುಪಿ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟ ಡಾ.ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಪ್ರತಿಜ್ಞಾ ವಿಧಿ ಬೋಧಿಸಿ ವಾರ್ಷಿಕ ವರದಿ ವಾಚಿಸಿದರು. ಜಿಲ್ಲಾ ಗೃಹರಕ್ಷಕ ದಳದ ಅಧೀಕ್ಷಕ ರತ್ನಾಕರ್ ಸನ್ಮಾನಿತರನ್ನು ಪರಿಚಯಿಸಿದರು. ಬ್ರಹ್ಮಾವರ ಘಟಕ ಪ್ಲಟೂನ್ ಕಮಾಂಡರ್ ಸ್ಟೀವನ್ ಪ್ರಕಾಶ್ ಲೂವಿಸ್ ಕಾರ್ಯಕ್ರಮ ನಿರೂಪಿಸಿ, ಪ್ರಭಾಕರ್ ಸುವರ್ಣ ವಂದಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News