×
Ad

ಭಟ್ಕಳದಲ್ಲಿ ಬಕ್ರೀದ್ ಸಿದ್ಧತೆ; ಶಾಂತಿ ಕಾಪಾಡಲು ಕಟ್ಟುನಿಟ್ಟಿನ ಕ್ರಮ

Update: 2026-05-22 22:30 IST

ಭಟ್ಕಳ: ಬಕ್ರೀದ್ ಹಬ್ಬದ ಪ್ರಯುಕ್ತ ತಾಲೂಕಿನಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ಕಾಪಾಡಲು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ಎಲ್ಲಾ ಇಲಾಖೆಗಳ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲೇ ಕಾರ್ಯನಿರ್ವಹಿಸುವಂತೆ ಸೂಚನೆ ನೀಡಲಾಗಿದೆ ಎಂದು ಸಹಾಯಕ ಆಯುಕ್ತ ಮಹೇಶ್ ಹೇಳಿದರು.

ನಗರದ ಸಹಾಯಕ ಆಯುಕ್ತರ ಕಚೇರಿಯಲ್ಲಿ ಗುರುವಾರ ನಡೆದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.

ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಹಬ್ಬದ ಅವಧಿಯಲ್ಲಿ ಅನಧಿಕೃತ ಮಾಂಸ ಮಾರಾಟ ಕೇಂದ್ರಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ನಗರ ಪ್ರದೇಶಗಳಲ್ಲಿ ಕಸ ಮತ್ತು ತ್ಯಾಜ್ಯ ವಿಲೇವಾರಿಯನ್ನು ಸಮರ್ಪಕವಾಗಿ ನಿರ್ವಹಿಸು ವಂತೆ ಸ್ಥಳೀಯ ಸಂಸ್ಥೆಗಳಿಗೆ ಸೂಚಿಸಲಾಗಿದೆ ಎಂದರು.

ಸಭೆಯಲ್ಲಿ ಮಾತನಾಡಿದ ಸಿಪಿಐ ದಿವಾಕರ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಹಾಗೂ ಪ್ರಚೋದನಕಾರಿ ಸಂದೇಶ ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದರು.

ಇತ್ತೀಚಿನ ಕೆಲವು ಘಟನೆಗಳಿಗೆ ಸಂಬಂಧಿಸಿ ಆಧಾರರಹಿತ ಮಾಹಿತಿ ಹರಡುವ ಸಾಧ್ಯತೆ ಇರುವುದರಿಂದ ಪೊಲೀಸ್ ಇಲಾಖೆ ವಿಶೇಷ ನಿಗಾ ವಹಿಸಿದೆ. ರಾತ್ರಿ 12 ಗಂಟೆಯ ನಂತರ ಅನಗತ್ಯವಾಗಿ ರಸ್ತೆಗಳಲ್ಲಿ ತಿರುಗಾಡುವವರ ಮೇಲೆ ಪರಿಶೀಲನೆ ನಡೆಸಲಾಗುವುದು ಎಂದು ಹೇಳಿದರು.

ಇದಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ ಬೇಕಾಬಿಟ್ಟಿಯಾಗಿ ಕಸ ಎಸೆಯುವವರ ವಿರುದ್ಧ ದಂಡಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದರು.

ಸಭೆಯಲ್ಲಿ ಹೆಬಳೆ ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಸೈಯದ್ ಅಲಿ ಮಾಲಿಕಿ ಮಾತನಾಡಿ, ಹೆಬಳೆ ಭಾಗದಲ್ಲಿ ಅಕ್ರಮ ಸಾರಾಯಿ ಮಾರಾಟ ನಡೆಯುತ್ತಿರುವ ಬಗ್ಗೆ ಆತಂಕ ವ್ಯಕ್ತಪಡಿಸಿದರು. ಹೊರರಾಜ್ಯಗಳಿಂದ ಬಂದ ಕಾರ್ಮಿಕರು ಗುಂಪುಗೂಡಿ ಮದ್ಯ ಸೇವಿಸುತ್ತಿರುವ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದು ಹೇಳಿದರು.

ಈ ಕುರಿತು ತಕ್ಷಣ ಕ್ರಮ ಕೈಗೊಳ್ಳಲಾಗುವುದು ಎಂದು ಸಹಾಯಕ ಆಯುಕ್ತ ಮಹೇಶ್ ಭರವಸೆ ನೀಡಿದರು.

ಸಭೆಯಲ್ಲಿ ಹೆಚ್ಚುವರಿ ಎಸ್ಪಿ ಕೃಷ್ಣಮೂರ್ತಿ, ಡಿವೈಎಸ್ಪಿ ಮಹೇಶ್, ತಹಸೀಲ್ದಾರ್ ಕೋಳಶೆಟ್ಟಿ, ನಗರಸಭೆ ಆಯುಕ್ತ ಬಾಬಾಸಾಹೇಬ್ ಮಾಣೆ, ಜಾಲಿ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜಪ್ಪ, ಹೆಸ್ಕಾಂ ಅಧಿಕಾರಿ ಮಂಜು ನಾಥ್, ಮುರುಡೇಶ್ವರ ಠಾಣೆ ಸಿಪಿಐ ಜಗದೀಶ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.

ಮಜ್ಲಿಸ್-ಎ-ಇಸ್ಲಾಹ್ ವ ತಂಝೀಮ್ ಅಧ್ಯಕ್ಷ ಇನಾಯತುಲ್ಲಾ ಶಾಬಂದ್ರಿ, ಅಲ್ತಾಫ್ ಖರೂರಿ, ಸಿದ್ದಿಕ್ ಇಸ್ಮಾಯಿಲ್, ಎಸ್.ಜೆ. ಹಾಶೀಮ್, ಮುನೀರ್, ಅಝೀಝುರ್‍ ರೆಹಮಾನ್ ರುಕ್ನುದ್ದೀನ್, ಇಬ್ಬು ಕಲಿ ಹೆಬಳೆ, ಸೈಯದ್ ಅಲಿ ಹೆಬಳೆ, ಇಮ್ಶಾದ್ ಸೇರಿದಂತೆ ಹಲವರು ಸಭೆಯಲ್ಲಿ ಭಾಗವಹಿಸಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News