ಭಟ್ಕಳ| ಪತ್ರಕರ್ತರ ರಕ್ಷಣೆ ಸರ್ಕಾರದ ಹೊಣೆ: ಸೈಯದ್ ಝಮಿರುಲ್ಲಾ ಶರೀಫ್
ಭಟ್ಕಳ: ಸಾಮಾಜಿಕ ನ್ಯಾಯಕ್ಕಾಗಿ ಹೋರಾಟ ನಡೆಸುವ ಪತ್ರಕರ್ತರಿಗೆ ಅಗತ್ಯ ಭದ್ರತೆ ಒದಗಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಹಿರಿಯ ಸಾಹಿತಿ ಸೈಯದ್ ಝಮಿರುಲ್ಲಾ ಶರೀಫ್ ಹೇಳಿದರು.
ನಗರದ ನ್ಯೂ ಇಂಗ್ಲಿಷ್ ಪಿಯು ಕಾಲೇಜಿನಲ್ಲಿ ಬುಧವಾರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪತ್ರಿಕೆಗಳು ಸಮಾಜದ ಆಗುಹೋಗುಗಳು, ನ್ಯಾಯ–ಅನ್ಯಾಯಗಳನ್ನು ಜನರಿಗೆ ತಲುಪಿಸುವ ಮಹತ್ವದ ಹೊಣೆಗಾರಿಕೆಯನ್ನು ನಿರ್ವಹಿಸುತ್ತಿವೆ. ಪತ್ರಿಕೆ ಓದುವ ಹವ್ಯಾಸದಿಂದ ಜ್ಞಾನ ವೃದ್ಧಿಯಾಗುವುದರ ಜೊತೆಗೆ ಸಮಕಾಲೀನ ವಿದ್ಯಮಾನಗಳ ಕುರಿತು ಅರಿವು ಮೂಡುತ್ತದೆ. ವಿದ್ಯಾರ್ಥಿಗಳು ಪತ್ರಿಕೆ ಓದುವ ಅಭ್ಯಾಸವನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು.
ಭಟ್ಕಳದಂತಹ ಸೂಕ್ಷ್ಮ ಪ್ರದೇಶಗಳಲ್ಲಿ ಪತ್ರಕರ್ತರು ವೃತ್ತಿನಿಷ್ಠೆ ಹಾಗೂ ಜವಾಬ್ದಾರಿಯೊಂದಿಗೆ ಕಾರ್ಯನಿರ್ವಹಿಸು ತ್ತಿದ್ದು, ಶಾಂತಿ ಮತ್ತು ಸೌಹಾರ್ದ ಕಾಪಾಡುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ ಎಂದು ಶ್ಲಾಘಿಸಿದರು.
ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಮಾರುತಿ ನಾಯ್ಕ ಮಾತನಾಡಿ, ಸುಮಾರು 183 ವರ್ಷ ಗಳ ಇತಿಹಾಸ ಹೊಂದಿರುವ ಪತ್ರಿಕಾ ಕ್ಷೇತ್ರವು ಡಿಜಿಟಲ್ ಮಾಧ್ಯಮಗಳ ತೀವ್ರ ಪೈಪೋಟಿಯ ನಡುವೆಯೂ ತನ್ನ ಪ್ರಾಮುಖ್ಯತೆಯನ್ನು ಉಳಿಸಿಕೊಂಡಿದೆ ಎಂದು ಹೇಳಿದರು.
ಕಾಲೇಜಿನ ಪ್ರಾಂಶುಪಾಲ ವೀರೇಂದ್ರ ಶ್ಯಾನಭಾಗ ಮಾತನಾಡಿ, ಜಾಗೃತ ಸಮಾಜ ನಿರ್ಮಾಣದಲ್ಲಿ ಪತ್ರಿಕೆಗಳ ಪಾತ್ರ ಮಹತ್ವದ್ದಾಗಿದೆ ಎಂದು ಅಭಿಪ್ರಾಯಪಟ್ಟರು. ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೋಹನ ನಾಯ್ಕ ಅಧ್ಯಕ್ಷತೆ ವಹಿಸಿದ್ದರು.
ಕಾರ್ಯಕ್ರಮದಲ್ಲಿ ಪತ್ರಿಕೆ ವಿತರಕ ಮಂಜುನಾಥ ದೇವಾಡಿಗ ಹಾಗೂ ಹಿರಿಯ ಯೋಗಗುರು ಗೋವಿಂದ ಗುರೂಜಿ ಅವರನ್ನು ಸನ್ಮಾನಿಸಲಾಯಿತು.
ಪತ್ರಕರ್ತರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ರಾಘವೇಂದ್ರ ಹೆಬ್ಬಾರ ಮಾತನಾಡಿದರು. ಪತ್ರಕರ್ತ ಮನಮೋಹನ ನಾಯ್ಕ ಸ್ವಾಗತಿಸಿದರು. ರಾಧಾಕೃಷ್ಣ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಮಚಂದ್ರ ಕಿಣಿ ವಂದಿಸಿದರು. ಈಶ್ವರ ನಾಯ್ಕ ಕಾರ್ಯಕ್ರಮ ನಿರೂಪಿಸಿದರು.