ಉತ್ತರ ಕನ್ನಡ ಎಪಿಸಿಆರ್ ಜಿಲ್ಲಾ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ
ಭಟ್ಕಳ: ಅಸೋಸಿಯೇಷನ್ ಫಾರ್ ಪ್ರೊಟೆಕ್ಷನ್ ಆಫ್ ಸಿವಿಲ್ ರೈಟ್ಸ್ (ಎಪಿಸಿಆರ್) ಉತ್ತರ ಕನ್ನಡ ಜಿಲ್ಲಾ ಘಟಕದ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಇಲ್ಲಿನ ರಾಬಿತಾ ಸೊಸೈಟಿಯ ಸಭಾಂಗಣದಲ್ಲಿ ಶನಿವಾರ ನಡೆದ ಸಭೆಯಲ್ಲಿ ಎಪಿಸಿಆರ್ ರಾಜ್ಯ ಪ್ರಧಾನ ಕಾರ್ಯ ದರ್ಶಿ ಹಾಗೂ ಹೈಕೋರ್ಟ್ ವಕೀಲ ಅಕ್ಮಲ್ ರಿಝ್ವಿ ಅವರ ಅಧ್ಯಕ್ಷತೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಯಿತು.
ಆಯ್ಕೆಗೊಂಡ ಪದಾಧಿಕಾರಿಗಳಲ್ಲಿ ಕಮರುದ್ದೀನ್ ಮಶಾಯಿಖ್ ಅಧ್ಯಕ್ಷರಾಗಿ, ಅನಮ್ ಅಲಾ ಉಪಾಧ್ಯಕ್ಷರಾಗಿ, ಇಸ್ಮಾಯಿಲ್ ರಾಜಾ ಪ್ರಧಾನ ಕಾರ್ಯದರ್ಶಿಯಾಗಿ, ಇಮ್ದಾದುಲ್ಲಾ ಬಂಗಾಲಿ ಜಂಟಿ ಕಾರ್ಯದರ್ಶಿಯಾಗಿ ಹಾಗೂ ಅಬೂದ್ ಎಸ್.ಎಂ. ಖಜಾಂಚಿಯಾಗಿ ಆಯ್ಕೆಯಾದರು.
ಈ ಸಂದರ್ಭದಲ್ಲಿ ಸಂಘಟನೆಯ ಉದ್ದೇಶಗಳು, ನಾಗರಿಕ ಹಕ್ಕುಗಳ ಸಂರಕ್ಷಣೆ, ಕಾನೂನು ಅರಿವು ಮೂಡಿಸುವ ಕಾರ್ಯಕ್ರಮಗಳು ಹಾಗೂ ಸಾರ್ವಜನಿಕ ಸೇವಾ ಚಟುವಟಿಕೆಗಳನ್ನು ಜಿಲ್ಲೆಯಲ್ಲಿ ಇನ್ನಷ್ಟು ಪರಿಣಾಮಕಾರಿಯಾಗಿ ವಿಸ್ತರಿಸುವ ಕುರಿತು ಚರ್ಚೆ ನಡೆಯಿತು.
ಸಭೆಯಲ್ಲಿ ನೂತನ ಪದಾಧಿಕಾರಿಗಳನ್ನು ಅಭಿನಂದಿಸಿದ ಅಕ್ಮಲ್ ರಿಝ್ವಿ, ಸಂವಿಧಾನಬದ್ಧ ಹಕ್ಕುಗಳ ರಕ್ಷಣೆ, ಕಾನೂನು ನೆರವು ಮತ್ತು ಸಾಮಾಜಿಕ ನ್ಯಾಯದ ಪರವಾಗಿ ಎಪಿಸಿಆರ್ ಇನ್ನಷ್ಟು ಸಕ್ರಿಯವಾಗಿ ಕಾರ್ಯನಿರ್ವಹಿಸ ಬೇಕೆಂದು ಕರೆ ನೀಡಿದರು.
ಸಭೆಯಲ್ಲಿ ಎಪಿಸಿಆರ್ ಸದಸ್ಯರು, ವಿವಿಧ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.