ಭಟ್ಕಳ: ಸಾರ್ವಜನಿಕರ ಸಮಸ್ಯೆಗಳನ್ನು ನೇರವಾಗಿ ಆಲಿಸಿ, ವಿವಿಧ ಇಲಾಖೆಗಳ ಮೂಲಕ ಪರಿಹಾರ ಒದಗಿಸುವ ಉದ್ದೇಶದಿಂದ ಭಟ್ಕಳ-ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ವಿಧಾನಸಭಾ ಉಪಸಭಾಧ್ಯಕ್ಷ ಮಂಕಾಳ ಎಸ್. ವೈದ್ಯ ಅವರ ಅಧ್ಯಕ್ಷತೆಯಲ್ಲಿ ನ.14ರಂದು ಪ್ರಜಾಸೇವೆ ಆಂದೋಲನ ಸಭೆ ಆಯೋಜಿಸಲಾಗಿದೆ.

ಬೆಳಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾನಮದ್ಲು ಬೆಳಕೆಯ ಬೋಮ್ಮನಕೇರಿ ದೇವಸ್ಥಾನದ ಸಭಾಭವನದಲ್ಲಿ ಅಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ಸಭೆ ನಡೆಯಲಿದೆ.

ಉತ್ತರ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿ ಭೂಯರ್ ಹರ್ಷಲ್ ನಾರಾಯಣ ರಾವ್ ಅವರು ಸಭೆಯಲ್ಲಿ ಪಾಲ್ಗೊಳ್ಳಲಿದ್ದು, ಜಿಲ್ಲೆಯ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಕೂಡ ಉಪಸ್ಥಿತರಿರಲಿದ್ದಾರೆ. ಇದರಿಂದಾಗಿ ಸಾರ್ವಜನಿಕರು ತಮ್ಮ ಸಮಸ್ಯೆಗಳನ್ನು ನೇರವಾಗಿ ಜಿಲ್ಲಾಡಳಿತ ಹಾಗೂ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳ ಗಮನಕ್ಕೆ ತರುವುದಕ್ಕೆ ಅವಕಾಶ ದೊರೆಯಲಿದೆ.

ವಿವಿಧ ಸಮಸ್ಯೆಗಳ ಕುರಿತು ಅರ್ಜಿ ಸಲ್ಲಿಸಲು ಅವಕಾಶ

ಗ್ರಾಮೀಣ ಭಾಗದ ಜನರು ದೈನಂದಿನ ಜೀವನದಲ್ಲಿ ಎದುರಿಸುತ್ತಿರುವ ರಸ್ತೆ ಸಂಪರ್ಕ, ಕುಡಿಯುವ ನೀರು, ಚರಂಡಿ ವ್ಯವಸ್ಥೆ, ವಿದ್ಯುತ್, ಆರೋಗ್ಯ, ಶಿಕ್ಷಣ, ಸಾರಿಗೆ, ಕಂದಾಯ, ಪಿಂಚಣಿ, ವಸತಿ ಸೇರಿದಂತೆ ವಿವಿಧ ಸರ್ಕಾರಿ ಸೌಲಭ್ಯ ಗಳಿಗೆ ಸಂಬಂಧಿಸಿದ ಸಮಸ್ಯೆಗಳ ಕುರಿತು ಸಭೆಯಲ್ಲಿ ಅಹವಾಲು ಸಲ್ಲಿಸಬಹುದಾಗಿದೆ.

ಸಾರ್ವಜನಿಕರು ತಮ್ಮ ಸಮಸ್ಯೆಗಳಿಗೆ ಸಂಬಂಧಿಸಿದ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸುವ ಮೂಲಕ ಸಂಬಂಧ ಪಟ್ಟ ಅಧಿಕಾರಿಗಳಿಂದ ಮಾಹಿತಿ ಹಾಗೂ ಪರಿಹಾರ ಪಡೆದುಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ವಿವಿಧ ಇಲಾಖೆ ಗಳ ಅಧಿಕಾರಿಗಳು ಒಂದೇ ವೇದಿಕೆಯಲ್ಲಿ ಲಭ್ಯವಿರುವುದರಿಂದ ಸಾರ್ವಜನಿಕರ ಅಹವಾಲುಗಳಿಗೆ ಸೂಕ್ತ ಸ್ಪಂದನೆ ದೊರೆಯುವ ನಿರೀಕ್ಷೆಯಿದೆ.

ಆದ್ದರಿಂದ ಬೆಳಕೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು ಮಾತ್ರವಲ್ಲದೆ ಸುತ್ತಮುತ್ತಲಿನ ಗ್ರಾಮಗಳ ನಿವಾಸಿಗಳು ಕೂಡ ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಭಾಗವಹಿಸಿ ತಮ್ಮ ಕುಂದುಕೊರತೆಗಳನ್ನು ಸಲ್ಲಿಸುವಂತೆ ತಹಶೀಲ್ದಾರರು ಉಷಾ ಪಾವಸ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor