ಬೀದರ್: ಅನುದಾನಿತ ಶಾಲೆಗಳ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವುದು, ಅನುದಾನರಹಿತ ಶಿಕ್ಷಣ ಸಂಸ್ಥೆಗಳಿಗೆ ಮೂಲಸೌಕರ್ಯ ಅನುದಾನ, ಖಾಸಗಿ ಶಾಲಾ ಶಿಕ್ಷಕರಿಗೆ ಆರೋಗ್ಯ ವಿಮೆ ಹಾಗೂ ವಿದ್ಯಾರ್ಥಿವೇತನ ಮೊತ್ತ ಹೆಚ್ಚಿಸುವುದು ಸೇರಿದಂತೆ ಶಿಕ್ಷಣ ಸಂಸ್ಥೆಗಳು ಮತ್ತು ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಫೆಡರೇಶನ್ ಆಫ್ ಮೈನಾರಿಟೀಸ್ ಎಜುಕೇಷನಲ್ ಇನ್‌ಸ್ಟಿಟ್ಯೂಷನ್ಸ್ (FMEI) ಕರ್ನಾಟಕ ಘಟಕ ಸರ್ಕಾರವನ್ನು ಒತ್ತಾಯಿಸಿದೆ.

ಬೀದರ್‌ನ ವಿಸ್ಡಮ್ ಶಾಲೆ ಮತ್ತು ಕಾಲೇಜಿಗೆ ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಖಂಡ್ರೆ, ಶಾಸಕ ಹಾಗೂ ಮಾಜಿ ಸಚಿವ ರಹೀಂ ಖಾನ್ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಮನ್ನಾನ್ ಭೇಟಿ ನೀಡಿದ ಸಂದರ್ಭದಲ್ಲಿ, ವಿಸ್ಡಮ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಹಾಗೂ FMEI ಕರ್ನಾಟಕ ಘಟಕದ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಆಸಿಫುದ್ದೀನ್ ಅವರು 15 ಅಂಶಗಳ ಮನವಿ ಪತ್ರ ಸಲ್ಲಿಸಿದರು.

ಪ್ರಮುಖ ಬೇಡಿಕೆಗಳು...

ಅನುದಾನಿತ ಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಬೇಕು. ಶಾಲೆಗಳ ಮಾನ್ಯತೆ ನವೀಕರಣದ ಸಂದರ್ಭದಲ್ಲಿ ಅಗ್ನಿ ಸುರಕ್ಷತಾ ನಿಯಮಗಳಿಗೆ ಸಂಬಂಧಿಸಿದಂತೆ ಅಗತ್ಯ ಸಡಿಲಿಕೆ ನೀಡಬೇಕು. ಅನುದಾನರಹಿತ ಶಾಲೆಗಳಿಗೆ ಎರಡರಿಂದ ನಾಲ್ಕು ಎಕರೆ ಜಮೀನು ಮಂಜೂರು ಮಾಡಬೇಕು ಹಾಗೂ ಈಶಾನ್ಯ ಕರ್ನಾಟಕದಲ್ಲಿ ಕಾರ್ಯನಿರ್ವಹಿಸುತ್ತಿರುವ ಅನುದಾನಿತ ಶಾಲೆಗಳ ಶಿಕ್ಷಕರಿಗೆ ವಸತಿ ನಿವೇಶನ ಒದಗಿಸಬೇಕು ಎಂದು ಮನವಿಯಲ್ಲಿ ಕೋರಲಾಗಿದೆ.

ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗಳ ಮೂಲಸೌಕರ್ಯ ಅಭಿವೃದ್ಧಿಗೆ, ವಿಶೇಷವಾಗಿ ಅನುದಾನರಹಿತ ಶಾಲೆಗಳಿಗೆ, ಪ್ರತ್ಯೇಕ ಅನುದಾನ ನೀಡಬೇಕು. ಸರ್ಕಾರಿ ಶಿಕ್ಷಕರಿಗೆ ಲಭ್ಯವಿರುವ ಆರೋಗ್ಯ ವಿಮೆ ಮತ್ತು ಆರೋಗ್ಯ ಸೌಲಭ್ಯಗಳನ್ನು ಖಾಸಗಿ ಅನುದಾನರಹಿತ ಶಾಲೆಗಳ ಶಿಕ್ಷಕರಿಗೂ ವಿಸ್ತರಿಸಬೇಕು ಎಂದು ಒತ್ತಾಯಿಸಲಾಗಿದೆ.

ಪೂರ್ವ-ಮೆಟ್ರಿಕ್ ವಿದ್ಯಾರ್ಥಿವೇತನ ಯೋಜನೆಗೆ 1,000 ಕೋಟಿ ಅನುದಾನ ಒದಗಿಸಬೇಕು. 2027–28ರ ಬಜೆಟ್‌ನಲ್ಲಿ ಈ ಮೊತ್ತವನ್ನು 2,000 ಕೋಟಿಗೆ ಹೆಚ್ಚಿಸಿ, ಅನುದಾನರಹಿತ ಶಾಲೆಗಳ ವಿದ್ಯಾರ್ಥಿಗಳಿಗೂ ವಿದ್ಯಾರ್ಥಿವೇತನ ಸೌಲಭ್ಯ ಕಲ್ಪಿಸಬೇಕು ಎಂದು ಮನವಿ ಮಾಡಲಾಗಿದೆ.

ರಾಜ್ಯದಲ್ಲಿ 2010ಕ್ಕೂ ಮೊದಲು ಸ್ಥಾಪನೆಯಾದ ಶಾಲೆಗಳನ್ನು ಆರ್ಥಿಕ ನೆರವು ಮತ್ತು ಅನುದಾನದ ವ್ಯಾಪ್ತಿಗೆ ತರಬೇಕು. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ (KMDC) ಮೂಲಕ ‘ಮೈನಾರಿಟೀಸ್ ಎಲಿವೇಟ್–2026’ ಯೋಜನೆಯನ್ನು ತ್ವರಿತವಾಗಿ ಜಾರಿಗೊಳಿಸಬೇಕು. ಅರ್ಹ ಅಲ್ಪಸಂಖ್ಯಾತ ಉದ್ಯಮಗಳಿಗೆ ಆರ್ಥಿಕ ನೆರವು ವಿತರಣೆಯಲ್ಲಿ ವಿಳಂಬ ಮತ್ತು ತಾರತಮ್ಯ ಇರಬಾರದು. ಯೋಜನೆಗೆ ಹೆಚ್ಚುವರಿಯಾಗಿ 100 ಕೋಟಿ ಅನುದಾನ ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದೂ ಒತ್ತಾಯಿಸಲಾಗಿದೆ.

ಹತ್ತು ವರ್ಷಗಳಿಗೂ ಹೆಚ್ಚು ಕಾಲದಿಂದ ಮಾನ್ಯತೆ ಹೊಂದಿರುವ ಶಿಕ್ಷಣ ಸಂಸ್ಥೆಗಳ ಮಾನ್ಯತೆಯನ್ನು ಮುಂದಿನ ಹತ್ತು ವರ್ಷಗಳಿಗೆ ನವೀಕರಿಸುವಾಗ, ಅನುಮೋದಿತ ಕಟ್ಟಡ ನಕ್ಷೆ ಮತ್ತು ಅಗ್ನಿ ಸುರಕ್ಷತಾ ಪ್ರಮಾಣಪತ್ರಕ್ಕೆ ಸಂಬಂಧಿಸಿದ ನಿಯಮಗಳನ್ನು ಪರಿಶೀಲಿಸಿ ಅಗತ್ಯ ಸಡಿಲಿಕೆ ನೀಡಬೇಕು ಎಂದು ಮನವಿಯಲ್ಲಿ ತಿಳಿಸಲಾಗಿದೆ.

ಈಶಾನ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯಲ್ಲಿ ಶರಣಪ್ಪ ಮಟ್ಟೂರು ಅವರಿಗೆ ಬೆಂಬಲ ನೀಡುವಂತೆ ಮನವಿ ಮಾಡಲಾಗಿದೆ. ಇದಕ್ಕೂ ಮುನ್ನ ಬೆಂಗಳೂರಿನ FMEI ಕರ್ನಾಟಕ ಘಟಕದ ಕಚೇರಿಗೆ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಭೇಟಿ ನೀಡಿ, ಶಿಕ್ಷಕರು ಮತ್ತು ಶಿಕ್ಷಣ ಕ್ಷೇತ್ರದ ಸಮಸ್ಯೆಗಳ ಕುರಿತು ಮುಹಮ್ಮದ್ ಆಸಿಫುದ್ದೀನ್ ಅವರೊಂದಿಗೆ ಚರ್ಚಿಸಿದ್ದರು. ಈ ಸಂದರ್ಭದಲ್ಲಿ FMEI ರಾಜ್ಯ ಪೋಷಕರಾದ ಡಾ. ಮುಹಮ್ಮದ್ ಸಾದ್ ಬೆಲ್ಗಾಮಿ ಸೇರಿದಂತೆ ಐಟಾ, ಎಸ್‌ಐಒ ಮತ್ತು ಸಾಲಿಡಾರಿಟಿ ಯೂತ್ ಮೂವ್‌ಮೆಂಟ್‌ನ ರಾಜ್ಯ ಪದಾಧಿ ಕಾರಿಗಳು ಉಪಸ್ಥಿತರಿದ್ದರು. ಸಭೆಯಲ್ಲಿ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಪುಟ್ಟಣ್ಣ ಅವರಿಗೆ ಬೆಂಬಲ ನೀಡುವ ನಿರ್ಧಾರ ಕೈಗೊಳ್ಳಲಾಯಿತು.

ವಿಸ್ಡಮ್ ಗ್ರೂಪ್ ಆಫ್ ಇನ್‌ಸ್ಟಿಟ್ಯೂಷನ್ಸ್‌ನ ಟ್ರಸ್ಟಿ ಬುಶ್ರಾ ಜಮಾಲ್ ಸಾಹಿಬಾ, ಕಾರ್ಯದರ್ಶಿ ಮುಹಮ್ಮದ್ ಸಲಾಹುದ್ದೀನ್ ಫರ್ಹಾನ್ ಸೇರಿದಂತೆ ವಿವಿಧ ಶಾಲಾ-ಕಾಲೇಜುಗಳ ಮುಖ್ಯಸ್ಥರು, ಶಿಕ್ಷಕರು ಹಾಗೂ ಆಡಳಿತ ವಿಭಾಗದ ಪ್ರತಿನಿಧಿಗಳು ಮನವಿಗೆ ಸಹಿ ಹಾಕಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಮನ್ನಾನ್, ಮಾಜಿ ವಿಧಾನ ಪರಿಷತ್ ಸದಸ್ಯ ಅರವಿಂದ ಅರಳಿ, ಬಿಯುಡಿಎ ಅಧ್ಯಕ್ಷ ವಿನೋದ್ ಕುಮಾರ್‍ ಅಪ್ಪೆ, ಕೆಆರ್‌ಇ ಸೊಸೈಟಿ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ, ಮೊಹಮ್ಮದ್ ಶಫೀಉದ್ದೀನ್ ರೋಷನ್ ಮತ್ತು ಶಾಕಿರ್ ಖಾನ್ ಸೇರಿದಂತೆ ವಿವಿಧ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor