Bhatkal : ಗಣೇಶ ಮೆರವಣಿಗೆ ವೇಳೆ ಮಸೀದಿಗೆ ಕಲ್ಲು ತೂರಾಟ ಆರೋಪ; ಪ್ರಕರಣ ದಾಖಲು
ಭಟ್ಕಳ: ಗಣೇಶ ಮೂರ್ತಿ ವಿಸರ್ಜನೆ ಮೆರವಣಿಗೆ ಸಾಗುತ್ತಿದ್ದ ವೇಳೆ ಗುಲ್ಮಿ ಪ್ರದೇಶದ ಮಸೀದಿಯೊಂದರ ಮೇಲೆ ಕಲ್ಲು ತೂರಾಟ ನಡೆದಿದೆ ಎನ್ನಲಾದ ಘಟನೆ ಬುಧವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ.
ಘಟನೆಯಲ್ಲಿ ಮಸೀದಿಯ ಕಿಟಕಿಗಳ ಗಾಜುಗಳು ಒಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಭಟ್ಕಳ ನಗರ ಠಾಣೆಯಲ್ಲಿ ಅಪರಿಚಿತರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.
ತಾಲಾಂದ್ ಪ್ರದೇಶದಿಂದ ರಾತ್ರಿ 10 ಗಂಟೆ ಸುಮಾರಿಗೆ ಗಣೇಶ ಮೂರ್ತಿ ವಿಸರ್ಜನೆಗಾಗಿ ಮೆರವಣಿಗೆ ಆರಂಭವಾಗಿದ್ದು, ರೈಲು ನಿಲ್ದಾಣದ ರಸ್ತೆಯ ಮೂಲಕ ಕಾಲುವೆ ಸಮೀಪದ ಪ್ರದೇಶದತ್ತ ಸಾಗುತ್ತಿತ್ತು. ಈ ಸಂದರ್ಭದಲ್ಲಿ ಮಾರ್ಗದಲ್ಲಿರುವ ಮಸೀದಿ-ಎ-ಇಸ್ಮಾಯಿಲ್ ಮೇಲೆ ಕೆಲವರು ಕಲ್ಲು ತೂರಿದ್ದಾರೆ ಎನ್ನಲಾಗಿದೆ. ಕಲ್ಲು ತೂರಾಟದಿಂದ ಮಸೀದಿಯ ಕಿಟಕಿಗಳ ಗಾಜುಗಳು ಹಾನಿಗೊಳಗಾಗಿವೆ ಎಂದು ತಿಳಿದುಬಂದಿದೆ.
ಮಾಹಿತಿ ತಿಳಿದ ತಕ್ಷಣ ಪೊಲೀಸರು ಸ್ಥಳಕ್ಕೆ ತೆರಳಿ ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಘಟನೆಗೆ ಸಂಬಂಧಿಸಿದಂತೆ ಕೆಲವರನ್ನು ಠಾಣೆಗೆ ಕರೆಸಿ ವಿಚಾರಣೆ ನಡೆಸಲಾಗಿದೆ. ಕಲ್ಲು ತೂರಾಟಕ್ಕೆ ಸಂಬಂಧಿಸಿದ ವಿಡಿಯೊ ದೃಶ್ಯಗಳು ಪೊಲೀಸರ ಬಳಿ ಇವೆ ಎಂದು ಮಸೀದಿ ಸಮಿತಿ ಸದಸ್ಯರೊಬ್ಬರು ತಿಳಿಸಿದ್ದಾರೆ.
ಘಟನೆಯ ಸುದ್ದಿ ಹರಡುತ್ತಿದ್ದಂತೆ ನೂರಾರು ಮಂದಿ ಭಟ್ಕಳ ನಗರ ಪೊಲೀಸ್ ಠಾಣೆ ಎದುರು ಜಮಾಯಿಸಿ, ಕಲ್ಲು ತೂರಾಟಕ್ಕೆ ಕಾರಣರಾದವರ ವಿರುದ್ಧ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಯಾವುದೇ ರೀತಿಯ ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಶಾಂತಿ ಕಾಪಾಡುವಂತೆ ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಘಟನೆ ಕುರಿತು ಮಾಹಿತಿ ಪಡೆದ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್. ಅವರು ಕಾರವಾರದಿಂದ ಭಟ್ಕಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ತಪ್ಪಿತಸ್ಥರ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಹಾಗೂ ಸಾರ್ವಜನಿಕರು ಶಾಂತಿ ಕಾಪಾಡಬೇಕು ಎಂದು ಅವರು ಮನವಿ ಮಾಡಿದರು. ಭಟ್ಕಳ ಸಹಾಯಕ ಪೊಲೀಸ್ ವರಿಷ್ಠಾಧಿಕಾರಿ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದರು.
ಸದ್ಯ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಘಟನೆ ನಡೆದ ಸ್ಥಳ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಪೊಲೀಸರು ತನಿಖೆ ಮುಂದುವರಿಸಿದ್ದಾರೆ.