×
Ad

ಭಟ್ಕಳ: 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ, ಸವಿತಾ ಮಹರ್ಷಿ ಜಯಂತಿ ಆಚರಣೆ

Update: 2026-01-25 19:10 IST

ಭಟ್ಕಳ: ತಾಲೂಕು ಆಡಳಿತ ಹಾಗೂ ಭಾರತ ಚುನಾವಣಾ ಆಯೋಗದ ಸಂಯುಕ್ತ ಆಶ್ರಯದಲ್ಲಿ 16ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಹಾಗೂ ಸವಿತಾ ಮಹರ್ಷಿ ಜಯಂತಿ ಕಾರ್ಯಕ್ರಮವನ್ನು ಭಟ್ಕಳ ತಾಲೂಕಿನ ಆಡಳಿತ ಸೌಧದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿ ಸವಿತಾ ಮಹರ್ಷಿಯ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಹಿರಿಯ ಸಿವಿಲ್ ನ್ಯಾಯಾಧೀಶ ಕಾಂತ ಕುರಣಿ ಅವರು ಮಾತನಾಡಿ, ಮತದಾನ ಪ್ರತಿಯೊಬ್ಬ ಭಾರತೀಯ ನಾಗರಿಕನಿಗೂ ಸಂವಿಧಾನ ನೀಡಿದ ಅಮೂಲ್ಯ ಹಕ್ಕಾಗಿದ್ದು, ಪ್ರತಿಯೊಬ್ಬರೂ ಕಡ್ಡಾಯವಾಗಿ ಮತದಾನ ಮಾಡುವ ಮೂಲಕ ತಮ್ಮ ಹಕ್ಕನ್ನು ಚಲಾಯಿಸಬೇಕು ಎಂದು ಕರೆ ನೀಡಿದರು. ಯುವ ಪೀಳಿಗೆಯೇ ರಾಷ್ಟ್ರದ ಭವಿಷ್ಯವಾಗಿರುವುದರಿಂದ ಮತದಾನದ ಮಹತ್ವವನ್ನು ಅರಿತು ಜವಾಬ್ದಾರಿಯುತ ಪ್ರಜೆಗಳಾಗಿ ಬೆಳೆಯಬೇಕು ಎಂದರು.

ಮತದಾನ ಒಂದು ಪವಿತ್ರ ಪ್ರಕ್ರಿಯೆಯಾಗಿದ್ದು, ಸಾಮಾನ್ಯ ನಾಗರಿಕನಿಗೂ ಸಮಾನ ಮತದ ಹಕ್ಕು ಇರುವುದೇ ಪ್ರಜಾಪ್ರಭುತ್ವದ ಶಕ್ತಿ. ದೇಶದಲ್ಲಿ ಇಂದಿಗೂ ಶೇ.60ರಿಂದ 70ರಷ್ಟು ಮಾತ್ರ ಮತದಾನವಾಗುತ್ತಿರುವುದು ಪ್ರಜಾ ಪ್ರಭುತ್ವಕ್ಕೆ ಹಾನಿಕಾರಕವಾಗಿದೆ. ಶೇ.100ರಷ್ಟು ಮತದಾನವಾದಾಗ ಮಾತ್ರ ಪ್ರಜಾಪ್ರಭುತ್ವ ಇನ್ನಷ್ಟು ಬಲಿಷ್ಠವಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ತಹಶೀಲ್ದಾರ್ ನಾಗೇಂದ್ರ ಕೊಳ್ಳಶೆಟ್ಟಿ ಅವರು ಮಾತನಾಡಿ, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕಳೆದ 16 ವರ್ಷಗಳಿಂದ ರಾಷ್ಟ್ರೀಯ ಮತದಾರರ ದಿನಾಚರಣೆಯನ್ನು ಆಚರಿಸಿಕೊಂಡು ಬರಲಾಗುತ್ತಿದ್ದು, ಮತದಾರರಲ್ಲಿ ಜಾಗೃತಿ ಮೂಡಿಸುವುದು ಹಾಗೂ ಮತದಾನದ ಮಹತ್ವವನ್ನು ತಿಳಿಸುವುದೇ ಇದರ ಪ್ರಮುಖ ಉದ್ದೇಶವಾಗಿದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬೂತ್ ಮಟ್ಟದ ಅಧಿಕಾರಿಗಳಿಗೆ (ಬಿಎಲ್ಒ) ಕಿಟ್‌ಗಳನ್ನು ವಿತರಿಸಲಾಯಿತು. ಜೊತೆಗೆ ರಾಷ್ಟ್ರೀಯ ಮತದಾರರ ದಿನಾಚರಣೆಯ ಅಂಗವಾಗಿ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಪ್ರಮಾಣ ಪತ್ರಗಳನ್ನು ವಿತರಿಸಿ ಗೌರವಿಸಲಾಯಿತು. ದಿ ನ್ಯೂ ಇಂಗ್ಲಿಷ್ ಪಿ.ಯು. ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಶ್ಯಾಮಲಾ ಕಾಮತ್ ಅವರು ಮತದಾರರ ದಿನಾಚರಣೆಯ ಮಹತ್ವ ಹಾಗೂ ಮತದಾನದ ಅಗತ್ಯತೆಯ ಕುರಿತು ಉಪನ್ಯಾಸ ನೀಡಿದರು.

ಈ ಸಂದರ್ಭದಲ್ಲಿ ವಕೀಲರ ಸಂಘದ ಈಶ್ವರ ನಾಯ್ಕ, ಕಾರ್ಯನಿರ್ವಹಣಾಧಿಕಾರಿ ಸುನೀಲ್ ಎಂ., ಪುರಸಭೆ ಮುಖ್ಯಾಧಿಕಾರಿ ವೆಂಕಟೇಶ ನಾವುಡ್, ನಗರ ಠಾಣೆಯ ಪಿಎಸ್ಐ ನವೀನ ನಾಯ್ಕ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News