×
Ad

ಭಟ್ಕಳ: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Update: 2026-01-08 19:33 IST

ಭಟ್ಕಳ: ಮೂರು ದಶಕಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಧಿಸುವಲ್ಲಿ ಭಟ್ಕಳ ಶಹರ ಪೊಲೀಸ್ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಗೀತಾ ನಗರ ನಿವಾಸಿ, ಮೂಲತಃ ಭಟ್ಕಳ ಸುಲ್ತಾನ್ ಸ್ಟ್ರೀಟ್‌ನ ಜಾವೇದ್ ಹಮೀದ್ ಖಾಜಿಯಾ (55) ಬಂಧಿತ ಆರೋಪಿ. ಈತ ಇತ್ತೀಚೆಗೆ ಥಾಣೆಯ ಗ್ಯಾಲಕ್ಸಿ ಅಪಾರ್ಟ್‌ಮೆಂಟ್‌ನಲ್ಲಿ ವಾಸವಾಗಿದ್ದನು ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಕರಣದ ಹಿನ್ನೆಲೆ

1996ರಲ್ಲಿ ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಈತನ ವಿರುದ್ಧ ಶಸ್ತ್ರಾಸ್ತ್ರ ಕಾಯ್ದೆ (Arms Act) ಅಡಿಯಲ್ಲಿ (ಗುನ್ನಾ ನಂ. 74/1996) ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾಗಿದ ನಂತರ ನ್ಯಾಯಾಲಯಕ್ಕೆ ಹಾಜರಾಗದೆ, 30 ವರ್ಷಗಳಿಂದ ಈತ ತಲೆಮರೆಸಿಕೊಂಡಿದ್ದನು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಕಾರ್ಯಾಚರಣೆ ವಿವರ

ಆರೋಪಿಯ ಪತ್ತೆಗೆ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕ ದೀಪನ್ ಎಂ.ಎನ್. ಹಾಗೂ ಹಿರಿಯ ಅಧಿಕಾರಿಗಳ ಮಾರ್ಗದರ್ಶನದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ತಾಂತ್ರಿಕ ಮಾಹಿತಿ ಮತ್ತು ಖಚಿತ ಸುಳಿವುಗಳ ಆಧಾರದಲ್ಲಿ ಜನವರಿ 7, 2026ರಂದು ಮುಂಬೈನಲ್ಲಿ ಆರೋಪಿಯನ್ನು ಬಂಧಿಸಲಾಯಿತು.

ಜನವರಿ 8ರಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಪೊಲೀಸ್ ತಂಡಕ್ಕೆ ಶ್ಲಾಘನೆ

ಭಟ್ಕಳ ಶಹರ ಪೊಲೀಸ್ ನಿರೀಕ್ಷಕ ದಿವಾಕರ ಪಿ.ಎಂ. ಹಾಗೂ ಪಿಎಸ್ಐ ನವೀನ್ ಎಸ್. ನಾಯ್ಕ ಅವರ ನೇತೃತ್ವದ ತಂಡದಲ್ಲಿ ಎಎಸ್ಐ ಅಂತೋನ್ ಫರ್ನಾಂಡಿಸ್, ಸಿಬ್ಬಂದಿಗಳಾದ ಗಿರೀಶ್ ಅಂಕೋಲೆಕರ್, ದೀಪಕ್ ಎಸ್. ನಾಯ್ಕ್ ಮತ್ತು ಮಹಾಂತೇಶ್ ಹಿರೇಮಠ್ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ದೀರ್ಘಕಾಲದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸ್ ತಂಡದ ಕಾರ್ಯಕ್ಷಮತೆಯನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಶಂಸಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News