ಭಟ್ಕಳ | ಬೈಕ್ ನಿಯಂತ್ರಣ ತಪ್ಪಿ ಅರಣ್ಯ ಇಲಾಖೆಯ ಕಾವಲುಗಾರ ಮೃತ್ಯು
ಭಟ್ಕಳ: ಭಟ್ಕಳ ಅರಣ್ಯ ಇಲಾಖೆಯಲ್ಲಿ ಕಾವಲುಗಾರರಾಗಿ ಸೇವೆ ಸಲ್ಲಿಸುತ್ತಿದ್ದ ಶಂಕರ ಮಾಸ್ತಪ್ಪ ನಾಯ್ಕ (56) ಅವರು ಗುರುವಾರ ಸಂಭವಿಸಿದ ಬೈಕ್ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಭಟ್ಕಳದ ಬೇದ್ರಿಕೇರಿ ಬೆಳಕೆ ನಿವಾಸಿಯಾದ ಶಂಕರ ನಾಯ್ಕ ಅವರು ಅರಣ್ಯ ಪ್ರದೇಶದಲ್ಲಿ ಗಸ್ತು ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ, ಮುಟ್ಟಳ್ಳಿ ಗ್ರಾಮ ವ್ಯಾಪ್ತಿಯ ಕಿರಿದಾದ ಹಾಗೂ ಕಚ್ಚಾ ರಸ್ತೆಯಲ್ಲಿ ಬೈಕ್‌ನಲ್ಲಿ ಸಂಚರಿಸುತ್ತಿದ್ದರು. ಈ ಸಂದರ್ಭ ಇಳಿಜಾರು ಪ್ರದೇಶದಲ್ಲಿ ವಾಹನದ ನಿಯಂತ್ರಣ ತಪ್ಪಿ ನೆಲಕ್ಕೆ ಬಿದ್ದು ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಅಪಘಾತದ ಬಳಿಕ ಗಾಯಾಳುವನ್ನು ಭಟ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಕುಂದಾಪುರ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಘಟನೆಯ ಸುದ್ದಿ ತಿಳಿದ ತಕ್ಷಣ ಅರಣ್ಯ ಇಲಾಖೆಯ ಸಿಬ್ಬಂದಿಗಳು ಆಸ್ಪತ್ರೆಗೆ ಆಗಮಿಸಿ ಮೃತ ಶಂಕರ ನಾಯ್ಕ ಅವರ ಅಂತಿಮ ದರ್ಶನ ಪಡೆದಿದ್ದಾರೆ. ಈ ದುರ್ಘಟನೆ ಅರಣ್ಯ ಇಲಾಖೆ ಸಿಬ್ಬಂದಿಗಳಲ್ಲಿ ತೀವ್ರ ದುಃಖ ಮೂಡಿಸಿದೆ.