×
Ad

ಭಟ್ಕಳ: ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ SIR ಬಗ್ಗೆ ಜನಜಾಗೃತಿ ಅಭಿಯಾನ

Update: 2026-07-09 13:59 IST

ಭಟ್ಕಳ: ಸಮಗ್ರ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಅಭಿಯಾನದ ಅಂಗವಾಗಿ ಭಟ್ಕಳ ತಾಲೂಕಿನ ವಿವಿಧ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸಲು ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಯಿತು.

ಹಾಡವಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ಕುಂಟವಾಣಿ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ಬಳಿಕ ಪ್ರೌಢಶಾಲೆಯಿಂದ ಬೀದಿಗಳಲ್ಲಿ ಜಾಗೃತಿ ಮೆರವಣಿಗೆ ನಡೆಸುವ ಮೂಲಕ ಎಸ್‌ಐಆರ್‌ ಅಭಿಯಾನದ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲಾಯಿತು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಯಾದವ ನಾಯ್ಕ, ಕಾರ್ಯದರ್ಶಿ ಮಂಜುನಾಥ ಶೆಟ್ಟಿಮನೆ, ಪ್ರೌಢಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಪಾಲ್ಗೊಂಡಿದ್ದರು.

ಮುಂಡಳ್ಳಿ ಗ್ರಾಮ ಪಂಚಾಯಿತಿ ವತಿಯಿಂದ ನಾಟಿ ಕಾರ್ಯದಲ್ಲಿ ತೊಡಗಿದ್ದ ರೈತರ ಮಧ್ಯೆ ಭಿತ್ತಿಪತ್ರ ಪ್ರದರ್ಶಿಸಿ, ಎಸ್‌ಐಆರ್‌ ಅಭಿಯಾನದ ಮಾಹಿತಿ ನೀಡುವುದರ ಜೊತೆಗೆ ಅರ್ಜಿಗಳನ್ನು ತಪ್ಪಿಲ್ಲದೆ ಭರ್ತಿ ಮಾಡುವ ಕುರಿತು ಅರಿವು ಮೂಡಿಸಲಾಯಿತು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಲೋಕೇಶ್ವರ ಗೊಂಡ ಹಾಗೂ ಪಂಚಾಯಿತಿ ಸಿಬ್ಬಂದಿ ಉಪಸ್ಥಿತರಿದ್ದರು.

ಶಿರಾಲಿ ಗ್ರಾಮ ಪಂಚಾಯಿತಿ ವತಿಯಿಂದ ಬೀದಿಗಳಲ್ಲಿ ಜಾಗೃತಿ ಮೆರವಣಿಗೆ ನಡೆಸಿ, ಸಮಗ್ರ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮದ ಮಹತ್ವವನ್ನು ಸಾರ್ವಜನಿಕರಿಗೆ ತಿಳಿಸಲಾಯಿತು. ದ್ವಿತೀಯ ದರ್ಜೆ ಸಹಾಯಕಿ ಪ್ರತಿಮಾ ದೇವಾಡಿಗ, ಗ್ರಾಮ ಪಂಚಾಯಿತಿ ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

ಹೆಬಳೆ ಗ್ರಾಮ ಪಂಚಾಯಿತಿ ವತಿಯಿಂದ ಸರ್ಕಾರಿ ಕನ್ನಡ ಹಾಗೂ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿದ್ಯಾರ್ಥಿಗಳ ಮೂಲಕ ಪಾಲಕರಲ್ಲಿ ಎಸ್‌ಐಆರ್‌ ಅಭಿಯಾನದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ನಡೆಯಿತು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮಂಜುನಾಥ ಗೊಂಡ, ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

ಬೈಲೂರು ಗ್ರಾಮ ಪಂಚಾಯಿತಿ ವತಿಯಿಂದ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಮಾನವ ಸರಪಳಿ ನಿರ್ಮಿಸಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಜಾಗೃತಿ ಮೂಡಿಸಲಾಯಿತು. ಕಾರ್ಯದರ್ಶಿ ಈರಪ್ಪ ಬೇವಿನಗಿಡ, ದ್ವಿತೀಯ ದರ್ಜೆ ಸಹಾಯಕ ತಿರುಮಲೇಶ ನಾಯ್ಕ ಹಾಗೂ ಶಿಕ್ಷಕರು ಭಾಗವಹಿಸಿದ್ದರು.

ಕಾಯ್ಕಿಣಿ ಗ್ರಾಮ ಪಂಚಾಯಿತಿ ವತಿಯಿಂದ ಅಂಗಡಿ-ಮುಂಗಟ್ಟು ಪ್ರದೇಶಗಳಲ್ಲಿ ವಾಹನದ ಮೂಲಕ ಪ್ರಚಾರ ನಡೆಸಿ, ಎಸ್‌ಐಆರ್‌ ಅಭಿಯಾನದ ಮಾಹಿತಿ ಸಾರ್ವಜನಿಕರಿಗೆ ತಲುಪಿಸಲಾಯಿತು. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಗರಾಜ ವಿ., ದ್ವಿತೀಯ ದರ್ಜೆ ಸಹಾಯಕಿ ನಾಗವೇಣಿ ನಾಯ್ಕ ಹಾಗೂ ಗ್ರಾಮ ಪಂಚಾಯಿತಿ ಸಿಬ್ಬಂದಿ ಪಾಲ್ಗೊಂಡಿದ್ದರು.

ಅಭಿಯಾನದ ಅಂಗವಾಗಿ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ, ತಿದ್ದುಪಡಿ ಹಾಗೂ ಇತರೆ ಪ್ರಕ್ರಿಯೆಗಳನ್ನು ಸಮಯಕ್ಕೆ ಸರಿಯಾಗಿ ಪೂರ್ಣಗೊಳಿಸುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಲಾಯಿತು.

 

 

 

 

 

 

 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News