×
Ad

Bhatkal | ಯುವಕನ ಮೇಲೆ ಹಲ್ಲೆ ಆರೋಪ; ಸಂಘಪರಿವಾರದ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು

Update: 2026-06-18 11:48 IST

ಭಟ್ಕಳ: ಯುವತಿಯೊಬ್ಬಳನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದ ಎಂದು ಯುವಕನನ್ನು ತಡೆದು ಹಲ್ಲೆ ನಡೆಸಿದ ಆರೋಪದಡಿ ಸಂಘಪರಿವಾರದ ಕಾರ್ಯಕರ್ತರ ವಿರುದ್ಧ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೊಲೀಸರ ಮಾಹಿತಿ ಪ್ರಕಾರ, ಯುವತಿಯೊಂದಿಗೆ ಕಾರಿನಲ್ಲಿ ತೆರಳುತ್ತಿದ್ದ ಯುವಕನನ್ನು ಕೆಲವರು ತಡೆದು ಪ್ರಶ್ನಿಸಿ, ಬಳಿಕ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಯುವಕ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ.

ಪ್ರಕರಣ ದಾಖಲಾದ ವಿಷಯ ತಿಳಿಯುತ್ತಿದ್ದಂತೆ ಸಂಘಪರಿವಾರದ ಕಾರ್ಯಕರ್ತರು ಹಾಗೂ ಬಿಜೆಪಿ ಮುಖಂಡರು ಠಾಣೆ ಎದುರು ಜಮಾಯಿಸಿ ಧರಣಿ ನಡೆಸಿದರು. ಯುವತಿಯ ಕುಟುಂಬದವರ ಮನವಿಯ ಮೇರೆಗೆ ಯುವಕನನ್ನು ಪ್ರಶ್ನಿಸಲಾಗಿದ್ದು, ಯಾವುದೇ ದುರುದ್ದೇಶದಿಂದ ನಡೆದುಕೊಂಡಿಲ್ಲ ಎಂದು ಪ್ರತಿಭಟನಾಕಾರರು ವಾದಿಸಿದರು.

ಪ್ರಕರಣವನ್ನು ಹಿಂಪಡೆಯುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದು, ಪೊಲೀಸ್ ಅಧಿಕಾರಿಗಳೊಂದಿಗೆ ಮಾತುಕತೆ ನಡೆಸಿದರು. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು ಎಂದು ತಿಳಿದು ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೂ ಕಡೆಯ ಹೇಳಿಕೆಗಳನ್ನು ದಾಖಲಿಸಿಕೊಳ್ಳಲಾಗುತ್ತಿದ್ದು, ತನಿಖೆಯ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು‌ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಘಟನೆಯ ಹಿನ್ನೆಲೆಯಲ್ಲಿ ಕೆಲಕಾಲ ಠಾಣೆಯ ಆವರಣದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು, ನಂತರ ಪರಿಸ್ಥಿತಿ ಶಾಂತಗೊಂಡಿತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News