×
Ad

Bhatkal | ಚಿಪ್ಪು ಸಂಗ್ರಹಿಸಲು ನದಿಗೆ ಇಳಿದಿದ್ದ 8 ಮಂದಿ ಮೃತ್ಯು; ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಸಿದ್ದರಾಮಯ್ಯ

Update: 2026-05-24 17:38 IST

ಭಟ್ಕಳ: ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಚಿಪ್ಪು ತೆಗೆಯಲು ನೀರಿಗೆ ಇಳಿದ ಎಂಟು ಮಂದಿ ಮೃತಪಟ್ಟ ಘಟನೆ ನಡೆದಿದೆ. ಘಟನೆಯಲ್ಲಿ ಇಬ್ಬರು ನಾಪತ್ತೆಯಾಗಿದ್ದಾರೆ ಎನ್ನಲಾಗಿದ್ದು, ಅವರಿಗಾಗಿ ಶೋಧ ಕಾರ್ಯಾಚರಣೆ ಮುಂದುವರಿದಿದೆ.

ಘಟನೆ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, "ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ ಸುದ್ದಿ ತಿಳಿದು ಸಂಕಟವಾಯಿತು" ಎಂದು ಹೇಳಿದ್ದಾರೆ.

ಮೃತರ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ತಲಾ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ.

"ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಸಮೀಪದ ತಟ್ಟೆಹಕ್ಕಲು ಕಡಲ ತೀರದಲ್ಲಿ ಕಪ್ಪೆಚಿಪ್ಪು ತರಲು ಹೋದವರ ಪೈಕಿ ಒಂದೇ ಕುಟುಂಬದ ಎಂಟು ಮಂದಿ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಇದೊಂದು ಅತ್ಯಂತ ದುರದೃಷ್ಟಕರ ಮತ್ತು ನೋವಿನ ಘಟನೆ. ದುರಂತದಲ್ಲಿ ಮಡಿದವರ ಕುಟುಂಬಕ್ಕೆ ಮಾನವೀಯ ನೆಲೆಯಲ್ಲಿ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು.ಇನ್ನೂ ಕೆಲವರು ಈ ದುರ್ಘಟನೆಯಲ್ಲಿ ಕಾಣೆಯಾಗಿರುವ ಮಾಹಿತಿಯಿದ್ದು, ಅವರಿಗಾಗಿ ತೀವ್ರ ಹುಡುಕಾಟ ನಡೆಸಲಾಗುತ್ತಿದೆ. ಕಾಣೆಯಾದವರು ಬದುಕಿಬಂದು ತಮ್ಮವರನ್ನು ಕೂಡಿಕೊಳ್ಳಲಿ‌ ಎಂದು ನಾವೆಲ್ಲರೂ ದೇವರಲ್ಲಿ ಪ್ರಾರ್ಥಿಸೋಣ." ಎಂದು ಸಿಎಂ ಸಿದ್ದರಾಮಯ್ಯ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಘಟನೆ ವಿವರ:

ಒಂದೇ ಕುಟುಂಬದ 13 ಮಂದಿ ರವಿವಾರ ರಜೆಯ ಹಿನ್ನೆಲೆಯಲ್ಲಿ ಅಳ್ವೇಕೋಡಿ ಸಮುದ್ರ ತೀರಕ್ಕೆ ವಿಹಾರಕ್ಕೆ ತೆರಳಿದ್ದರು. ಈ ವೇಳೆ ಸಮುದ್ರದ ಬಳಿಯ ನದಿಯಲ್ಲಿ ಕೆಲವರು ಚಿಪ್ಪು ಸಂಗ್ರಹಿಸಲು ನೀರಿಗೆ ಇಳಿದಾಗ, ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ ಎಂದು ತಿಳಿದುಬಂದಿದೆ.

ಮೃತಪಟ್ಟ ಎಂಟು ಮಂದಿಯ ಪೈಕಿ ಆರು ಮೃತದೇಹಗಳನ್ನು ಭಟ್ಕಳ ಸರಕಾರಿ ಆಸ್ಪತ್ರೆಗೆ ಹಾಗೂ ಉಳಿದ ಎರಡು ಮೃತದೇಹಗಳನ್ನು ಆರ್‌.ಎನ್‌.ಎಸ್‌. ಆಸ್ಪತ್ರೆಗೆ ರವಾನಿಸಲಾಗಿದೆ. 

ಪೊಲೀಸ್ ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದು, ನಾಪತ್ತೆಯಾದ ಮೂವರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News