ಗೋಕರ್ಣ | ಬೋಟ್ನ ಮೀನು ಸಂಗ್ರಹದ ಕೋಣೆ ಸ್ವಚ್ಛಗೊಳಿಸುವಾಗ ದುರಂತ: ಉಸಿರುಗಟ್ಟಿ ಮೂವರು ಮೃತ್ಯು
ಗೋಕರ್ಣ: ಮೀನು ಸಂಗ್ರಹಿಸುವ ಕೋಣೆಯನ್ನು ಸ್ವಚ್ಛಗೊಳಿಸಲು ಬೋಟ್ನೊಳಗೆ ಇಳಿದ ಮೂವರು ಮೀನುಗಾರರು ಉಸಿರುಗಟ್ಟಿ ಮೃತಪಟ್ಟ ಘಟನೆ ಮಂಗಳವಾರ ಸಂಜೆ ಗೋಕರ್ಣ ಸಮೀಪದ ತದಡಿ ಬಂದರಿನಲ್ಲಿ ನಡೆದಿದೆ. ಘಟನೆಯಲ್ಲಿ ಇಬ್ಬರನ್ನು ರಕ್ಷಿಸಲಾಗಿದ್ದು, ಅವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ತದಡಿಯ ಕುಚೈಮಾ ಬೋಟ್ನಲ್ಲಿ ಕೆಲಸ ಮಾಡುತ್ತಿದ್ದ ನೌಶಾದ್ (48), ಅಮೀನ್ (40) ಹಾಗೂ ಅಮನ್ (26) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಮೀನು ಹಿಡಿದು ಬಂದರಿಗೆ ಮರಳಿದ್ದ ಮೀನುಗಾರರು, ಬೋಟ್ನಲ್ಲಿದ್ದ ಮೀನುಗಳನ್ನು ಖಾಲಿ ಮಾಡಿದ ಬಳಿಕ ಮೀನು ಸಂಗ್ರಹಿಸುವ ಕೋಣೆಯನ್ನು ಸ್ವಚ್ಛಗೊಳಿಸಲು ಮುಂದಾಗಿದ್ದರು. ಈ ವೇಳೆ ಕೋಣೆಯೊಳಗೆ ಇಳಿದ ಮೀನುಗಾರರು ಉಸಿರಾಟದ ತೊಂದರೆಗೆ ಸಿಲುಕಿದ್ದಾರೆ ಎನ್ನಲಾಗಿದೆ. ಕೋಣೆಯೊಳಗೆ ವಿಷಕಾರಿ ಅನಿಲ ಸಂಗ್ರಹವಾಗಿದ್ದರಿಂದ ಅಥವಾ ಆಮ್ಲಜನಕದ ಕೊರತೆಯಿಂದ ಈ ದುರ್ಘಟನೆ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಆದರೆ, ಘಟನೆಯ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.
ಘಟನೆ ಗಮನಕ್ಕೆ ಬರುತ್ತಿದ್ದಂತೆ ತಕ್ಷಣ ರಕ್ಷಣಾ ಕಾರ್ಯ ಕೈಗೊಳ್ಳಲಾಗಿದ್ದು, ಇಬ್ಬರನ್ನು ಹೊರಗೆ ಕರೆತರಲಾಗಿದೆ. ಅವರಲ್ಲಿ ಓರ್ವನ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಒಂದೇ ಬೋಟ್ನಲ್ಲಿ ಕೆಲಸ ಮಾಡುತ್ತಿದ್ದ ಮೂವರು ಮೀನುಗಾರರು ಮೃತಪಟ್ಟಿರುವುದು ಮೀನುಗಾರರಲ್ಲಿ ಆತಂಕ ಮೂಡಿಸಿದೆ. ಈ ಕುರಿತು ಗೋಕರ್ಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.