ಆ.28ರಂದು ಉತ್ತರ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು ಕಾಲೇಜಿಗೆ ರಜೆ
ಭಟ್ಕಳ: ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಘೋಷಿಸಿರುವ ರೆಡ್ ಅಲರ್ಟ್‌ನಿಂದಾಗಿ ಆ.27 ರಿಂದ ಆ.28ರವರೆಗೆ ಭಾರೀ ಮಳೆಯ ಮುನ್ಸೂಚನೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಅಂಗನವಾಡಿ, ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಆ.28ರಂದು ರಜೆ ಘೋಷಿಸಲಾಗಿದೆ.
ಈ ಆದೇಶವನ್ನು ಜಿಲ್ಲಾಡಳಿತವು ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 34 (ಎಮ್) ಅಡಿಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜಾರಿಗೊಳಿಸಿದೆ.
ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ಮತ್ತು ದಾಂಡೇಲಿ ತಾಲೂಕುಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ, ತಾಲೂಕಿನ ತಹಶೀಲ್ದಾರರ ಮೌಖಿಕ ಕೋರಿಕೆ (ಉಲ್ಲೇಖ 3 ರಿಂದ 6) ಹಾಗೂ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾರವಾರ ಮತ್ತು ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಕಾರವಾರ/ಶಿರಸಿ ರವರ ಪತ್ರದ ಆಧಾರದ ಮೇಲೆ, ಮಕ್ಕಳ ಸುರಕ್ಷತೆಗಾಗಿ ಈ ರಜೆ ಘೋಷಿಸಲಾಗಿದೆ.
ಈ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳಲು ಶಿಕ್ಷಣ ಇಲಾಖೆ ಮತ್ತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸೂಚಿಸಲಾಗಿದೆ.
ಈ ಆದೇಶವನ್ನು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾರವಾರ ಹಾಗೂ ಉಪನಿರ್ದೇಶಕರು, ಸಾರ್ವಜನಿಕ ಶಿಕ್ಷಣ ಇಲಾಖೆ, ಕಾರವಾರ/ಶಿರಸಿ ರವರು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಡಳಿತವು ಸೂಚಿಸಿದೆ.