ನಾನು ಮುಖ್ಯಮಂತ್ರಿಯಾಗಿದ್ದರೆ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿರಲಿಲ್ಲ: ಶಾಸಕ ಆರ್.ವಿ. ದೇಶಪಾಂಡೆ
ಕಾರವಾರ: ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿರುವ ಬಗ್ಗೆ ಕಾಂಗ್ರೆಸ್ ಹಿರಿಯ ನಾಯಕ, ಹಳಿಯಾಳ ಶಾಸಕ ಆರ್.ವಿ. ದೇಶಪಾಂಡೆ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ರವಿವಾರ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಬ್ಲಾಕ್ ಕಾಂಗ್ರೆಸ್ ಆಯೋಜಿಸಿದ್ದ ʼಮತಗಳ್ಳತನ ನಿಲ್ಲಿಸಿʼ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಆಗಿದ್ದರೆ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿರಲಿಲ್ಲ ಎಂದು ಹೇಳಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಮೇಲೆ ಆರ್ಥಿಕ ಹೊರೆ ಹೆಚ್ಚಿದೆ. ಜನರಿಗೆ ಇದರಿಂದ ಅನುಕೂಲ ಆಗಿರುವುದು ನಿಜ, ಆದರೆ ಮತ್ತೊಂದೆಡೆ ಸರ್ಕಾರ ನಡೆಸಲು ಕಷ್ಟವಾಗಿದೆ, ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಮಹಿಳೆಯರು ಎಲ್ಲಾ ಸೌಲಭ್ಯಗಳನ್ನು ಪಡೆಯುತ್ತಿದ್ದಾರೆ, ಆದರೆ ಪುರುಷರಿಗೆ ಯಾವುದೇ ಯೋಜನೆಗಳು ಇಲ್ಲ. ಈ ಯೋಜನೆಗಳನ್ನು ಜನರಿಗೆ ತಲುಪಿಸಲು ಅನೇಕ ಸಮಿತಿಗಳನ್ನು ರಚಿಸಲಾಗಿದ್ದು, ಅವುಗಳನ್ನು ನಿಭಾಯಿಸುವುದೇ ದೊಡ್ಡ ಕೆಲಸವಾಗಿದೆ. ಇದರಿಂದಾಗಿ ರಾಜ್ಯದ ಅಭಿವೃದ್ಧಿ ವೇಗವು ಕುಂಠಿತವಾಗಿದೆ ಎಂದು ದೇಶಪಾಂಡೆ ಆತಂಕ ವ್ಯಕ್ತಪಡಿಸಿದ್ದಾರೆ.