ಭೂಕುಸಿತ, ಕಡಲ್ಕೊರೆತ ತಡೆಗೆ 800 ಕೋಟಿ ರೂ. ಅನುದಾನ : ಸಚಿವ ಕೃಷ್ಣ ಬೈರೇಗೌಡ
ಕಾರವಾರ : ರಾಜ್ಯದಲ್ಲಿ ಭೂಕುಸಿತ ಮತ್ತು ಕಡಲ್ಕೊರೆತದಿಂದ ಬಾಧಿತವಾಗಿರುವ ಜಿಲ್ಲೆಗಳಲ್ಲಿ ತುರ್ತು ಕಾಮಗಾರಿಗಳಿಗೆ 800 ಕೋಟಿ ರೂ. ಅನುದಾನವನ್ನು ಶೀಘ್ರದಲ್ಲೇ ಅನುಮೋದಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಮಂಗಳವಾರ ಘೋಷಿಸಿದ್ದಾರೆ.
ಸಚಿವ ಕೃಷ್ಣ ಬೈರೇಗೌಡ ಅವರು ಶಿರಸಿ ತಾಲ್ಲೂಕಿನ ಬೆಣ್ಣೆಹೊಳೆ ಸೇತುವೆ ಮತ್ತು ಭೂಕುಸಿತ ಸಂಭವಿಸಿರುವ ಕುಮಟಾ ತಾಲ್ಲೂಕಿನ ದೇವಿಮನೆ ಘಟ್ಟ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ರಾಜ್ಯದ ಆರು ಜಿಲ್ಲೆಗಳಲ್ಲಿ ಭೂಕುಸಿತ ಸಮಸ್ಯೆ ಗಂಭೀರವಾಗಿದ್ದು, ತಡೆಗೋಡೆ ನಿರ್ಮಾಣ ಕಾರ್ಯ ತುರ್ತಾಗಿ ಆಗಬೇಕಿದೆ. ಇದಕ್ಕಾಗಿ 500 ಕೋಟಿ ರೂ. ಮೀಸಲಿಡಲಾಗುತ್ತಿದೆ. ಅದೇ ರೀತಿ, ಕರಾವಳಿ ತೀರದ ಮೂರು ಜಿಲ್ಲೆಗಳಲ್ಲಿ ಕಡಲ್ಕೊರೆತ ತಡೆಯಲು 300 ಕೋಟಿ ರೂ. ಒದಗಿಸಲಾಗುವುದು" ಎಂದು ತಿಳಿಸಿದರು.
ಪ್ರಕೃತಿ ವಿಕೋಪ ತಡೆಗೆ ಕೇಂದ್ರ ಸರಕಾರದ ಹಣಕಾಸು ಇಲಾಖೆಯಿಂದ ಅನುದಾನ ಬಿಡುಗಡೆ ವಿಳಂಬವಾಗಿದ್ದು, ಈ ಕುರಿತು ಕೇಂದ್ರಕ್ಕೆ ಪತ್ರ ಬರೆಯಲಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.
"ಸಾರ್ವಜನಿಕರಿಗೆ ಕಂದಾಯ ದಾಖಲೆಗಳು ಸುಲಭವಾಗಿ ದೊರೆಯುವಂತೆ ಮಾಡಲು ಅವುಗಳನ್ನು ಗಣಕೀಕರಣಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ. ಮುಂದಿನ ಆರು ತಿಂಗಳೊಳಗೆ ಎಲ್ಲಾ ಕಂದಾಯ ದಾಖಲೆಗಳನ್ನು ಗಣಕೀಕರಣ ಮಾಡುವ ಗುರಿಯನ್ನು ಹೊಂದಿದ್ದೇವೆ" ಎಂದು ಕುಮಟಾದ ತಹಶೀಲ್ದಾರ್ ಕಚೇರಿಯಲ್ಲಿ ಗಣಕೀಕರಣ ಪ್ರಕ್ರಿಯೆಯನ್ನು ಪರಿಶೀಲಿಸಿದರು.
ಕುಮಟಾದ ದೇವಿಮನೆ ಘಟ್ಟದಲ್ಲಿ ತಡೆಗೋಡೆ ನಿರ್ಮಿಸದೆ ಹೆದ್ದಾರಿ ಕಾಮಗಾರಿ ಕೈಗೆತ್ತಿಕೊಂಡಿದ್ದಕ್ಕಾಗಿ ಆರ್.ಎನ್.ಎಸ್. ಇನ್ಫ್ರಾಸ್ಟ್ರಕ್ಚರ್ ಕಂಪನಿಯ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು.
ಈ ಸಂದರ್ಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ, ಶಾಸಕರಾದ ಭೀಮಣ್ಣ ನಾಯ್ಕ ಮತ್ತು ದಿನಕರ ಶೆಟ್ಟಿ ಉಪಸ್ಥಿತರಿದ್ದರು.