×
Ad

ಸಿದ್ದರಾಮಯ್ಯಗೆ ಹೈಕಮಾಂಡ್‌ನ ಬೆಂಬಲವಿದ್ದು, ಅವರೇ 5 ವರ್ಷ ಸಿಎಂ ಆಗಿರುತ್ತಾರೆ : ಆರ್.ವಿ. ದೇಶಪಾಂಡೆ

Update: 2025-06-30 14:48 IST

ಆರ್.ವಿ.ದೇಶಪಾಂಡೆ

ಕಾರವಾರ : ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧಿಕಾರಾವಧಿ ಬಗ್ಗೆ ಹರಿದಾಡುತ್ತಿರುವ ಊಹಾಪೋಹಗಳಿಗೆ ತೆರೆ ಎಳೆದಿರುವ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ.ದೇಶಪಾಂಡೆ, ಸಿದ್ದರಾಮಯ್ಯ ಅವರು ಪೂರ್ಣ ಐದು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ.

ಸೋಮವಾರ ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಇದುವರೆಗೂ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಮುಖ್ಯಮಂತ್ರಿ ಬದಲಾವಣೆಯ ಕುರಿತಾದ ಹೇಳಿಕೆಗಳು ವಿರೋಧ ಪಕ್ಷಗಳಿಂದ ಬರುತ್ತಿವೆ. ವಿರೋಧ ಪಕ್ಷದ ನಾಯಕ ಆರ್.ಅಶೋಕ್‌ ಅವರು ತಮ್ಮ ಸ್ಥಾನ ಉಳಿಸಿಕೊಳ್ಳಲು ಇಂತಹ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಸಿದ್ದರಾಮಯ್ಯ ನೇತೃತ್ವದ ಸರಕಾರದಲ್ಲಿ ಯಾವುದೇ ದೊಡ್ಡ ಸಮಸ್ಯೆಗಳಿಲ್ಲ. ಕೆಲವು ಶಾಸಕರಿಗೆ ತಮ್ಮ ಕ್ಷೇತ್ರದ ಅಭಿವೃದ್ಧಿ ಕೆಲಸಗಳು ನಿಧಾನವಾಗುತ್ತಿವೆ ಎಂಬ ಅಸಮಾಧಾನವಿರಬಹುದು. ಇನ್ನು ಕೆಲವರಿಗೆ ಸಚಿವ ಸ್ಥಾನ ಅಥವಾ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನದ ಆಸೆ ಇರಬಹುದು. ಆದರೆ, ಇಂತಹ ವಿಷಯಗಳನ್ನು ಮಾಧ್ಯಮಗಳ ಮುಂದೆ ಹೇಳಿಕೊಳ್ಳುವುದು ಸರಿಯಲ್ಲ ಎಂದು ಅವರು ಸಲಹೆ ನೀಡಿದರು.

ಸಿದ್ದರಾಮಯ್ಯ ಸರಕಾರಕ್ಕೆ ಕಾಂಗ್ರೆಸ್ ಹೈಕಮಾಂಡ್‌ನ ಸಂಪೂರ್ಣ ಬೆಂಬಲವಿದೆ . ಶಾಸಕರ ಸಮಸ್ಯೆಗಳನ್ನು ಆಲಿಸಲು ಮತ್ತು ಅವುಗಳನ್ನು ಪರಿಹರಿಸಲು ಪಕ್ಷದ ವರಿಷ್ಠರು ಸಭೆಗಳನ್ನು ನಡೆಸುತ್ತಿದ್ದಾರೆ ಎಂದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News