ಸಲೀಂ ಅಹ್ಮದ್ ರನ್ನು ಸಚಿವರನ್ನಾಗಿ ನೇಮಿಸಬೇಕು: ಅಬ್ದುಲ್ ಮಜೀದ್ ಶೇಖ್ ಆಗ್ರಹ
ಅಬ್ದುಲ್ ಮಜೀದ್ ಶೇಖ್
ಭಟ್ಕಳ: ಕಾಂಗ್ರೆಸ್‌ನ ಕಲ್ಯಾಣ ಕರ್ನಾಟಕ ಭಾಗದ ಹಿರಿಯ ಮುಖಂಡ ಹಾಗೂ ವಿಧಾನಪರಿಷತ್ತಿನ ಮುಖ್ಯ ಸಚೇತಕರಾಗಿರುವ ಸಲೀಂ ಅಹ್ಮದ್ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗೊಳಿಸಬೇಕು ಎಂದು ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ಅಬ್ದುಲ್ ಮಜೀದ್ ಶೇಖ್ ಆಗ್ರಹಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಸಲೀಂ ಅಹ್ಮದ್ ಅವರು ಕಳೆದ 45 ವರ್ಷಗಳಿಂದ ಕಾಂಗ್ರೆಸ್ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿ, ಪಕ್ಷ ಸಂಘಟನೆ ಬಲಪಡಿಸುವಲ್ಲಿ ಮಹತ್ವದ ಕೊಡುಗೆ ನೀಡಿದ್ದಾರೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಪಕ್ಷವನ್ನು ಸದೃಢಗೊಳಿಸಲು ಅವರು ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟದ ವಿಸ್ತರಣೆಯ ವೇಳೆ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಳೆದ 25 ವರ್ಷಗಳಿಂದ ಅಲ್ಪಸಂಖ್ಯಾತ ಸಮುದಾಯದ ಮುಖಂಡರಿಗೆ ಸಚಿವ ಸ್ಥಾನ ದೊರೆತಿಲ್ಲ. ಈ ಹಿನ್ನೆಲೆಯಲ್ಲಿ ಸಲೀಂ ಅಹ್ಮದ್ ಅವರಿಗೆ ಸಚಿವ ಸ್ಥಾನ ನೀಡುವುದರಿಂದ ಕಲ್ಯಾಣ ಕರ್ನಾಟಕದ ಸರ್ವ ಸಮಾಜದ ಅಭಿವೃದ್ಧಿಗೆ ಉತ್ತೇಜನ ದೊರೆಯಲಿದ್ದು, ಅಲ್ಪಸಂಖ್ಯಾತ ಸಮುದಾಯಕ್ಕೂ ಸಮರ್ಪಕ ರಾಜಕೀಯ ಪ್ರಾತಿನಿಧ್ಯ ಸಿಗಲಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ವೇಳೆ ಸಲೀಂ ಅಹ್ಮದ್ ಅವರ ಅನುಭವ, ಸಂಘಟನಾ ಸಾಮರ್ಥ್ಯ ಹಾಗೂ ಪಕ್ಷಕ್ಕೆ ಸಲ್ಲಿಸಿರುವ ಸೇವೆಯನ್ನು ಪರಿಗಣಿಸಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಕಾಂಗ್ರೆಸ್ ವರಿಷ್ಠರನ್ನು ಅಬ್ದುಲ್ ಮಜೀದ್ ಶೇಖ್ ಮನವಿ ಮಾಡಿದ್ದಾರೆ.