ಭಟ್ಕಳ: ಇಲ್ಲಿನ ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ತಾಯಿ ಮತ್ತು ಮಕ್ಕಳ ಆರೈಕೆಗಾಗಿ ಪ್ರತ್ಯೇಕ ಚಿಕಿತ್ಸಾ ಘಟಕ (ಮದರ್ ಆಂಡ್ ಚೈಲ್ಡ್ ಕೇರ್ ಬ್ಲಾಕ್) ಸ್ಥಾಪಿಸಲು ಉದ್ದೇಶಿಸಲಾಗಿದೆ ಎಂದು ರಾಜ್ಯ ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ

ಅವರು ರವಿವಾರ ತಂಝೀಮ್ ಸಂಸ್ಥೆ ಆಯೋಜಿಸಿದ್ದ ಸನ್ಮಾನ ಸಮಾರಂಭದಲ್ಲಿ ಭಾಗವಹಿಸಲು ಭಟ್ಕಳಕ್ಕೆ ಆಗಮಿಸಿದ ಸಂದರ್ಭ ಇಲ್ಲಿಂದ ಸರಕಾರಿ ಆಸ್ಪತ್ರೆಗೆ ಭೀಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.

100 ಹಾಸಿಗೆಗಳ ಸಾಮರ್ಥ್ಯ ಹೊಂದಿರುವ ಭಟ್ಕಳ ತಾಲೂಕು ಆಸ್ಪತ್ರೆಯಲ್ಲಿ ಸದ್ಯ 130ಕ್ಕೂ ಅಧಿಕ ಒಳರೋಗಿಗಳು ದಾಖಲಾಗುತ್ತಿದ್ದಾರೆ. ಇದರಿಂದ ಆಸ್ಪತ್ರೆಯಲ್ಲಿ ಸ್ಥಳಾವಕಾಶದ ಕೊರತೆ ಎದುರಾಗಿದೆ. ಹೀಗಾಗಿ ಆಸ್ಪತ್ರೆಯ ಹಾಸಿಗೆಗಳ ಸಾಮರ್ಥ್ಯ ಹೆಚ್ಚಿಸುವುದು ಅಗತ್ಯವಾಗಿದ್ದು, ಈ ಕುರಿತು ಸ್ಥಳೀಯ ಶಾಸಕರು ಪ್ರಮುಖ ಬೇಡಿಕೆ ಮಂಡಿಸಿದ್ದಾರೆ ಎಂದರು.

ಆಸ್ಪತ್ರೆಯಲ್ಲಿ ತಿಂಗಳಿಗೆ 100ಕ್ಕೂ ಹೆಚ್ಚು ಹೆರಿಗೆಗಳು ನಡೆಯುತ್ತಿದ್ದರೆ ತಾಯಿ ಮತ್ತು ಮಕ್ಕಳಿಗಾಗಿ ಪ್ರತ್ಯೇಕ ಘಟಕ ಸ್ಥಾಪಿಸಲು ಸರಕಾರದ ನಿಯಮಗಳಂತೆ ಕ್ರಮ ಕೈಗೊಳ್ಳಲಾಗುವುದು. ವಿಶೇಷವಾಗಿ ಗರ್ಭಿಣಿಯರು ಹಾಗೂ ನವಜಾತ ಶಿಶುಗಳ ಹೈರಿಸ್ಕ್ ಪ್ರಕರಣಗಳ ನಿರ್ವಹಣೆಗೆ ಈ ಘಟಕದಲ್ಲಿ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಸಚಿವರು ಹೇಳಿದರು.

ಪ್ರತ್ಯೇಕ ಘಟಕ ಸ್ಥಾಪನೆಯಿಂದ ತಾಯಿ ಮತ್ತು ಮಕ್ಕಳಿಗೆ ಒಂದೇ ಸೂರಿನಡಿ ಅಗತ್ಯ ಚಿಕಿತ್ಸಾ ಸೌಲಭ್ಯಗಳು ದೊರೆಯಲಿದ್ದು, ಮುಖ್ಯ ಆಸ್ಪತ್ರೆಯ ಮೇಲಿನ ಒತ್ತಡವೂ ಕಡಿಮೆಯಾಗಲಿದೆ. ಇದರಿಂದ ಭಟ್ಕಳ ಮಾತ್ರವಲ್ಲದೆ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳ ಜನರಿಗೂ ಅನುಕೂಲವಾಗಲಿದೆ ಎಂದರು.

ಕುಮಟಾದಿಂದ ಬೈಂದೂರಿನವರೆಗೆ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ಆಸ್ಪತ್ರೆಗಳ ಕೊರತೆ ಇದೆ. ಈ ಭಾಗದ ಜನರಿಗೆ ಭಟ್ಕಳ ತಾಲೂಕು ಆಸ್ಪತ್ರೆ ಪ್ರಮುಖ ಆರೋಗ್ಯ ಕೇಂದ್ರವಾಗಿದೆ. ಹೀಗಾಗಿ ಆಸ್ಪತ್ರೆಯನ್ನು ಅಗತ್ಯ ಮೂಲ ಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಲಾಗುವುದುಎಂದು ಖಾದರ್ ಹೇಳಿದರು.

ತಾಯಿ–ಮಗು ಚಿಕಿತ್ಸಾ ಘಟಕ ಸೇರಿದಂತೆ ಆಸ್ಪತ್ರೆಯ ಅಭಿವೃದ್ಧಿ ಯೋಜನೆಗಳನ್ನು ಅಂತಿಮಗೊಳಿಸುವ ಕುರಿತು ಶೀಘ್ರದಲ್ಲೇ ಶಾಸಕರು ಹಾಗೂ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಂಗಳೂರಿನಲ್ಲಿ ಬಹುಪಯೋಗಿ ಇಸ್ಲಾಮಿಕ್ ಕೇಂದ್ರದ ಶಂಕುಸ್ಥಾಪನೆ ಶೀಘ್ರದಲ್ಲೇ ನೆರವೇರಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor