ಭಟ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು, ಸಿಬ್ಬಂದಿ ಕೊರತೆ: ಎಸಿಗೆ ಮನವಿ
ಭಟ್ಕಳ: ಇಲ್ಲಿನ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು, ದಾದಿಯರು ಹಾಗೂ ಅಗತ್ಯ ಮೂಲಸೌಕರ್ಯಗಳ ಕೊರತೆಯಿಂದ ರೋಗಿಗಳು ತೊಂದರೆ ಅನುಭವಿಸುತ್ತಿದ್ದಾರೆ. ಆಸ್ಪತ್ರೆಯ ಸಮಸ್ಯೆಗಳನ್ನು ಪರಿಹರಿಸಿ ಅಗತ್ಯ ಸೌಲಭ್ಯ ಕಲ್ಪಿಸುವಂತೆ ಸಾಮಾಜಿಕ ಕಾರ್ಯಕರ್ತ ಜಾವೇದ್ ಮುಕ್ರಿ ನೇತೃತ್ವದಲ್ಲಿ ನಾಗರಿಕರು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಆಸ್ಪತ್ರೆಗೆ ಸುಮಾರು 30 ದಾದಿಯರ ಅಗತ್ಯವಿದ್ದು, ಪ್ರಸ್ತುತ 15 ಮಂದಿ ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಸಿಬ್ಬಂದಿ ಕೊರತೆಯಿಂದ ಹೊರರೋಗಿಗಳ ವಿಭಾಗದ ಇಂಜೆಕ್ಷನ್ ಕೊಠಡಿ ಮುಚ್ಚಲಾಗಿದ್ದು, ತುರ್ತು ಚಿಕಿತ್ಸಾ ವಿಭಾಗದಲ್ಲೇ ಮಹಿಳೆಯರು ಮತ್ತು ಪುರುಷರಿಗೆ ಪ್ರತ್ಯೇಕ ವ್ಯವಸ್ಥೆಯಿಲ್ಲದೆ ಇಂಜೆಕ್ಷನ್ ನೀಡಲಾಗುತ್ತಿದೆ. ಇದರಿಂದ ರೋಗಿಗಳ ಗೌಪ್ಯತೆಗೆ ಧಕ್ಕೆಯಾಗುತ್ತಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ.
ಕಳೆದ ಮೂರು ವರ್ಷಗಳಿಂದ ಖಾಯಂ ಸ್ತ್ರೀರೋಗ ತಜ್ಞರಿಲ್ಲ. ಅಲ್ಲದೆ, ಮೂಳೆ ತಜ್ಞರು, ತುರ್ತು ಶಸ್ತ್ರಚಿಕಿತ್ಸಾ ಕೊಠಡಿ ಹಾಗೂ ಸಿಟಿ ಸ್ಕ್ಯಾನ್ ಸೌಲಭ್ಯವೂ ಇಲ್ಲ. ಅಪಘಾತಗಳಲ್ಲಿ ಗಂಭೀರವಾಗಿ ಗಾಯಗೊಂಡವರನ್ನು ದೂರದ ಆಸ್ಪತ್ರೆಗಳಿಗೆ ಕರೆದೊಯ್ಯಬೇಕಾದ ಅನಿವಾರ್ಯತೆ ಎದುರಾಗಿದೆ. ಔಷಧಿ, ಪ್ರಯೋಗಾಲಯ ಹಾಗೂ ಇತರ ಸಿಬ್ಬಂದಿ ಕೊರತೆಯಿಂದಲೂ ರೋಗಿಗಳು ಸಮಸ್ಯೆ ಅನುಭವಿಸುತ್ತಿದ್ದಾರೆ ಎಂದು ದೂರಲಾಗಿದೆ.
ಖಾಲಿ ಇರುವ ವೈದ್ಯರು ಮತ್ತು ಸಿಬ್ಬಂದಿ ಹುದ್ದೆಗಳನ್ನು ಭರ್ತಿ ಮಾಡುವುದರ ಜತೆಗೆ ಅಗತ್ಯ ವೈದ್ಯಕೀಯ ಉಪಕರಣಗಳು, ಔಷಧಿ ಹಾಗೂ ಮೂಲಸೌಕರ್ಯಗಳನ್ನು ತಕ್ಷಣ ಒದಗಿಸಬೇಕು ಎಂದು ಮನವಿಯಲ್ಲಿ ಆಗ್ರಹಿಸಲಾಗಿದೆ.
ಮನವಿ ಸ್ವೀಕರಿಸಿದ ಸಹಾಯಕ ಆಯುಕ್ತರು, ಆಸ್ಪತ್ರೆಯ ಸಮಸ್ಯೆಗಳ ಕುರಿತು ಪರಿಶೀಲಿಸಿ ವರದಿ ನೀಡುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗೆ ಸೂಚಿಸಿದ್ದಾರೆ.