ವಿಜಯನಗರ ಜಿಲ್ಲೆಯಲ್ಲಿ 97.8 ಕೆ.ಜಿ. ಗಾಂಜಾ ವಶ; 27 ಪ್ರಕರಣ ದಾಖಲು : ಡಿಸಿ ಕವಿತಾ ಎಸ್.ಮನ್ನಿಕೇರಿ
ವಿಜಯನಗರ (ಹೊಸಪೇಟೆ), ಅ. 16: ಮದ್ಯ ಮತ್ತು ಮಾದಕ ವಸ್ತುಗಳ ವಿರುದ್ಧ ಪೊಲೀಸ್ ಇಲಾಖೆ ಹಾಗೂ ರೈಲ್ವೆ ಪೊಲೀಸ್ ಇಲಾಖೆ ನಡೆಸಿದ ಕಾರ್ಯಾಚರಣೆಯಲ್ಲಿ ಒಟ್ಟು 97.8 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಪೈಕಿ 5.8 ಕೆ.ಜಿ. ಗಾಂಜಾವನ್ನು ಸ್ಥಳೀಯ ಕಾರ್ಯಾಚರಣೆಗಳಲ್ಲಿ ಹಾಗೂ ನೆರೆ ರಾಜ್ಯಗಳಿಂದ ರೈಲ್ವೆ ಮೂಲಕ ಸಾಗಿಸಲಾಗುತ್ತಿದ್ದ 92 ಕೆ.ಜಿ. ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ. ಈ ಸಂಬಂಧ ಪ್ರಸಕ್ತ ಸಾಲಿನಲ್ಲಿ ಒಟ್ಟು 27 ಪ್ರಕರಣಗಳನ್ನು ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕವಿತಾ ಎಸ್. ಮನ್ನಿಕೇರಿ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ನಾರ್ಕೋಟಿಕ್ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಪ್ರಸಕ್ತ ಸಾಲಿನಲ್ಲಿ ಒಟ್ಟು 27 ಪ್ರಕರಣಗಳು ದಾಖಲಾಗಿದ್ದು, ಈ ಪೈಕಿ 9 ಪ್ರಕರಣಗಳು ಮಾದಕ ವಸ್ತುಗಳ ಮಾರಾಟಕ್ಕೆ ಹಾಗೂ 18 ಪ್ರಕರಣಗಳು ಮಾದಕ ವಸ್ತುಗಳ ಸೇವನೆಗೆ ಸಂಬಂಧಿಸಿವೆ. ಮಾದಕ ವಸ್ತುಗಳ ಸೇವನೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಒಟ್ಟು 13 ಆರೋಪಿಗಳ ವಿರುದ್ಧ ಈಗಾಗಲೇ ಕಾನೂನು ಕ್ರಮ ಜರುಗಿಸಲಾಗಿದೆ. ಅಕ್ಟೋಬರ್ ತಿಂಗಳೊಂದರಲ್ಲೇ ಎರಡು ಮಾದಕ ವಸ್ತುಗಳ ಪ್ರಕರಣಗಳು ದಾಖಲಾಗಿದ್ದು, ಎರಡೂ ಪ್ರಕರಣಗಳಲ್ಲಿ ತಕ್ಷಣ ಸೂಕ್ತ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
ಜಿಲ್ಲೆಯಾದ್ಯಂತ ಮಾದಕ ವಸ್ತುಗಳ ಸೇವನೆ ಮತ್ತು ಸಾಗಾಟಕ್ಕೆ ಕಡಿವಾಣ ಹಾಕಲು ಶಾಲಾ-ಕಾಲೇಜುಗಳು, ವಸತಿ ನಿಲಯಗಳು ಹಾಗೂ ಜನನಿಬಿಡ ಸಾರ್ವಜನಿಕ ಪ್ರದೇಶಗಳಲ್ಲಿ ನಿರಂತರವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಯಿತು.
ಶಾಲಾ-ಕಾಲೇಜುಗಳು ಹಾಗೂ ವಸತಿ ನಿಲಯಗಳಲ್ಲಿ ಮದ್ಯ ಮತ್ತು ಮಾದಕ ವಸ್ತುಗಳ ಸೇವನೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಬೇಕು. ಶಾಲಾ-ಕಾಲೇಜುಗಳಿಗೆ ಬರುವ ಮಕ್ಕಳ ನಡವಳಿಕೆಯಲ್ಲಿ ಬದಲಾವಣೆ, ಮಂಕು ಅಥವಾ ಅನುಮಾನಾಸ್ಪದ ಚಟುವಟಿಕೆಗಳು ಕಂಡುಬಂದಲ್ಲಿ ಹೆಚ್ಚಿನ ನಿಗಾ ವಹಿಸಬೇಕು. ವಿದ್ಯಾರ್ಥಿಗಳು ಗಾಂಜಾ, ಡ್ರಗ್ಸ್ ಸೇರಿದಂತೆ ಇತರ ಮಾದಕ ವಸ್ತುಗಳ ಸೇವನೆಗೆ ಬಲಿಯಾಗಿರುವುದು ಕಂಡುಬಂದಲ್ಲಿ ಅವರಿಗೆ ಸೂಕ್ತ ಸಲಹೆ ಮತ್ತು ಮಾರ್ಗದರ್ಶನ ನೀಡಬೇಕು ಎಂದು ಸೂಚಿಸಲಾಯಿತು.
ರೈತರು ತಮ್ಮ ಕೃಷಿ ಜಮೀನುಗಳಲ್ಲಿ ಅಕ್ರಮವಾಗಿ ಗಾಂಜಾ ಅಥವಾ ಇತರ ನಿಷೇಧಿತ ಬೆಳೆಗಳನ್ನು ಬೆಳೆಯದಂತೆ ತಡೆಯಲು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಕಾಡಂಚಿನ ಗ್ರಾಮಗಳ ನಿವಾಸಿಗಳಿಗೆ ಮಾದಕ ದ್ರವ್ಯಗಳ ಸೇವನೆಯ ದುಷ್ಪರಿಣಾಮಗಳ ಕುರಿತು ಅರಿವು ಮೂಡಿಸುವುದರ ಜತೆಗೆ, ಅರಣ್ಯ ಪ್ರದೇಶಗಳಲ್ಲಿ ನಿಷೇಧಿತ ಬೆಳೆಗಳನ್ನು ಬೆಳೆಯದಂತೆ ನಿರ್ದೇಶನ ನೀಡಬೇಕು ಎಂದು ತಿಳಿಸಲಾಯಿತು.
ವೈದ್ಯರ ಸಲಹೆ ಮತ್ತು ಸೂಚನೆ ಇಲ್ಲದೆ ಔಷಧಗಳನ್ನು ವಿತರಿಸಬಾರದು. ಅಂಚೆ ಹಾಗೂ ಇತರ ಆನ್ಲೈನ್ ಸೇವೆಗಳ ಮೂಲಕ ರವಾನೆಯಾಗುವ ಪಾರ್ಸೆಲ್ಗಳು ಮತ್ತು ಉತ್ಪನ್ನಗಳ ಕುರಿತು ಅನುಮಾನ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು ಎಂದು ಸೂಚಿಸಲಾಯಿತು.
ಮಾದಕ ವಸ್ತುಗಳ ಸಾಗಾಟ ಅಥವಾ ಸೇವನೆಗೆ ಸಂಬಂಧಿಸಿದ ಅನುಮಾನಾಸ್ಪದ ಚಟುವಟಿಕೆಗಳ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಬಹುದು. ಮಾಹಿತಿ ನೀಡುವವರ ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಜಾಹ್ನವಿ, ಅರಣ್ಯ ಇಲಾಖೆಯ ಉಪ ಸಂರಕ್ಷಣಾಧಿಕಾರಿ ಅನುಪಮ, ಅಪರ ಜಿಲ್ಲಾಧಿಕಾರಿ ಪಿ.ಎನ್. ಲೋಕೇಶ್ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.